ವೇತನ, ರಜೆ ಸೌಲಭ್ಯ ನಮಗೂ ನೀಡಿ

5manju5-WEb
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಡಿಸಿ ಕಚೇರಿ ಆವರಣದಲ್ಲಿ ಧರಣಿ ನಡೆಸಿದರು. ಡಾ.ಸಂಜೀವ ಬಾವತಿ, ಪ್ರಕಾಶ ಹಕಾಟೆ ಇತರರಿದ್ದರು.
Published on

ಬೆಳಗಾವಿ: ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘಟನೆ ನೇತೃತ್ವದಲ್ಲಿ ನೌಕರರು ಸೋಮವಾರ ಧರಣಿ ನಡೆಸಿದರು.

ರಾಜ್ಯದಲ್ಲಿ ಹಲವು ವರ್ಷಗಳಿಂದ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ವೈದ್ಯಕೀಯ ಸಿಬ್ಬಂದಿಗೆ ಸೇವಾ ಭದ್ರತೆ ನೀಡಬೇಕು. ಎನ್‌ಎಚ್‌ಎಂ ಕಾರ್ಯಕ್ರಮದ ಹುದ್ದೆಯನ್ನು ಕಾಯಂ ಹುದ್ದೆಗಳಾಗಿ ಸೃಷ್ಟಿಸಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಹರಿಯಾಣದ ಮಾದರಿಯಲ್ಲಿ ಎಚ್‌ಆರ್ ನೀತಿ ರಚಿಸಬೇಕು ಎಂದು ಆಗ್ರಹಿಸಿದರು.

ಗುತ್ತಿಗೆ ಮತ್ತು ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ನೌಕರರಿಗೆ ಸರ್ಕಾರವು ನೇರವಾಗಿ ಖಜಾನೆ-2ನಿಂದ ವೇತನ ನೀಡಬೇಕು. ಮಧ್ಯವರ್ತಿಗಳ ವ್ಯವಸ್ಥೆ ಸಂಪೂರ್ಣ ರದ್ದುಪಡಿಸಬೇಕು. ಸರ್ಕಾರಿ ನೌಕರರಿಗೆ ಸಿಗುತ್ತಿರುವ ರಜೆ, ವೇತನ, ಆರೋಗ್ಯ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಹೊರಗುತ್ತಿಗೆ ನೌಕರರಿಗೂ ನೀಡಬೇಕು. ನೌಕರರ ಕಲ್ಯಾಣ ನಿಧಿ ಅಥವಾ ಕಲ್ಯಾಣ ಮಂಡಳಿ ಸ್ಥಾಪಿಸಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.

ಹಲವು ವರ್ಷಗಳಿಂದ ಬೇಡಿಕೆ ಈಡೇರಿಸುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ಸರ್ಕಾರ ಮಧ್ಯಪ್ರವೇಶಿಸಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿಕೊಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ನಿರಂತರ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಕೆ ನೀಡಿದರು. ಸಂಘದ ಜಿಲ್ಲಾಧ್ಯಕ್ಷ ಡಾ.ಸಂಜೀವ ಬಾವತಿ, ಪ್ರಕಾಶ ಹಕಾಟೆ, ಶಂಕರ ದೇಸಾಯಿ, ಮಂಜುನಾಥ ಬಡಿಗೇರ, ರಾಘವೇಂದ್ರ ಎಸ್. ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಹಾಥರಸ್ ಘಟನೆ ಖಂಡಿಸಿ ಪ್ರತಿಭಟನೆ

ಉತ್ತರ ಪ್ರದೇಶದ ಹಾಥರಸ್ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾ ಭೀಮಸೇನೆ, ದಲಿತ ಸೇನಾ, ಛಲವಾದಿ ಮಹಾಸಭಾ, ವಾಲ್ಮೀಕಿ ಸಮಾಜ, ಬೆಳಗಾವಿ ಜಿಲ್ಲಾ ವಾಲ್ಮೀಕಿ ನಾಯಕ ಸಮಾಜ, ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ, ಭಾರತೀಯ ಬೌದ್ಧ ಮಹಾಸಭಾ ಹಾಗೂ ಇನ್ನಿತರ ಅನೇಕ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ಪ್ರಧಾನಿ, ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ಅತ್ಯಾಚಾರ ಪ್ರಕರಣ ಮುಚ್ಚಿ ಹಾಕುವ ಮತ್ತು ದುಷ್ಕರ್ಮಿಗಳನ್ನು ರಕ್ಷಣೆ ಮಾಡುವ ಉದ್ದೇಶದಿಂದಲೇ ಉತ್ತರ ಪ್ರದೇಶದ ಪೊಲೀಸರು ತರಾತುರಿಯಲ್ಲಿ ಕುಟುಂಬ ಸದಸ್ಯರನ್ನು ದೂರು ಇಟ್ಟು ಸಂತ್ರಸ್ತೆಯ ಅಂತ್ಯಕ್ರಿಯೆ ನಡೆಸಿರುವುದು ಖಂಡನೀಯ. ತಕ್ಷಣವೇ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು. ಜತೆಗೆ ಸಂತ್ರಸ್ತೆಗೆ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net