ತಾಯಿ ಚಾಮುಂಡಿಗೆ ಗೃಹಲಕ್ಷ್ಮಿ ಯೋಜನೆಯ ಎಲ್ಲ ಕಂತು ಪಾವತಿ!

Chamundeshwari
Published on

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯ ಭರ್ತಿ ಐದು ವರ್ಷಗಳ ಕಂತನ್ನು ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಸೋಮವಾರ ತಾಯಿ ಚಾಮುಂಡೇಶ್ವರಿಗೆ ಸಮರ್ಪಿಸಿದರು

.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪರವಾಗಿ ಅವರು ನಗರದ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ಹಣವನ್ನು ಅರ್ಪಿಸುವ ಮೂಲಕ ಸರ್ಕಾರದ ಹರಕೆ ತೀರಿಸಿದರು.


ಪ್ರತಿ ತಿಂಗಳಿಗೆ 2 ಸಾವಿರ ರೂ.ನಂತೆ 59 ತಿಂಗಳ ಕಂತಿನ 1.18 ಲಕ್ಷ ರೂಪಾಯಿಯನ್ನು ಸಚಿವೆ ಹೆಬ್ಬಾಳ್ಕರ್ ವೈಯಕ್ತಿಕವಾಗಿ ನೀಡಿದ್ದಾರೆ.


ಹಿನ್ನೆಲೆ: ವಿಧಾನಸಭಾ ಚುನಾವಣೆಗೂ ಪೂರ್ವ ಮೇ 9ರಂದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್, ದಿನೇಶ್ ಗೂಳಿಗೌಡ ಹಾಗೂ ಇತರ ಕಾಂಗ್ರೆಸ್ ನಾಯಕರು ಚಾಮುಂಡಿ ದೇವಿ ಸನ್ನಿಧಿಯಲ್ಲಿ ಗ್ಯಾರಂಟಿ ಕಾರ್ಡ್‌ಗಳನ್ನಿಟ್ಟು ಹರಕೆ ಕಟ್ಟಿದ್ದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಶಕ್ತಿ ನೀಡುವಂತೆ ತಾಯಿಯಲ್ಲಿ ಬೇಡಿಕೊಂಡಿದ್ದರು. ಅದರಂತೆ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳೊಂದಿಗೆ ಅಧಿಕಾರವನ್ನು ಹಿಡಿದಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಕಳೆಯುವುದರೊಳಗೆ ಭರವಸೆ ನೀಡಿದ್ದಂತೆ ಐದರಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ.


ಆಗಸ್ಟ್ 30ರಂದು ಮೈಸೂರಿನಲ್ಲಿ ಈ ಯೋಜನೆಗೆ ಚಾಲನೆ ನೀಡುವ ಮೊದಲು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಇತರ ಪ್ರಮುಖರು ದೇವಿಯ ದರ್ಶನ ಮಾಡಿ ಹರಕೆ ತೀರಿಸಿದ್ದರು. ರಾಜ್ಯದ ಯಜಮಾನಿಯರ ಖಾತೆಗೆ ಪ್ರತಿ ತಿಂಗಳು ಜಮಾ ಮಾಡುವ ತಲಾ 2 ಸಾವಿರ ರೂ. ಮೊದಲ ಕಂತನ್ನು ತಾಯಿ ಚಾಮುಂಡೇಶ್ವರಿ ದೇವಿಗೆ ಅಂದು ಸಮರ್ಪಣೆ ಮಾಡಿದ್ದೆವು ಎಂದು ಹೆಬಾಳ್ಕರ್ ಪ್ರಕಟಣೆಯಲ್ಲಿ ವಿವರಿಸಿದ್ದಾರೆ.


ಪ್ರತಿ ತಿಂಗಳು ತಾಯಿ ಚಾಮುಂಡೇಶ್ವರಿ ದೇವಿಗೆ ಗೃಹಲಕ್ಷ್ಮಿ ಕಂತನ್ನು ನೀಡುವಂತೆ ಶಾಸಕ ದಿನೇಶ ಗೂಳಿಗೌಡ ಅವರು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರಲ್ಲಿ ಮನವಿ ಮಾಡಿದ್ದರು. ಸಿಎಂ, ಡಿಸಿಎಂ ತಕ್ಷಣ ಈ ಕುರಿತು ಕ್ರಮ ವಹಿಸುವಂತೆ ಸೂಚಿಸಿದ್ದರು. ಆ ಹಿನ್ನೆಲೆಯಲ್ಲಿ ಒಂದೇ ಸಲ ಎಲ್ಲ ಕಂತಿನ ಹಣವನ್ನು ನಾಡದೇವಿಗೆ ಅರ್ಪಿಸಲಾಗಿದೆ ಎಂದು ಸಚಿವೆ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net