

ಪಿರಿಯಾಪಟ್ಟಣ: ಗ್ರಾಮ ಆಡಳಿತಾಧಿಕಾರಿಗಳ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗ್ರಾಮ ಆಡಳಿತಾಧಿಕಾರಿಗಳ ಸಂಘದ ತಾಲೂಕು ಘಟಕದ ವತಿಯಿಂದ ಪಟ್ಟಣದ ತಾಲೂಕು ಕಚೇರಿಯ ಮುಂಭಾಗ ನಡೆಸುತ್ತಿರುವ 2ನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಪಿಡಿಎನ್‌ಎ (ಭ್ರಷ್ಟಾಚಾರ ನಿಗ್ರಹದಳ ಕರ್ನಾಟಕ ಸಂಸ್ಥೆ) ತಾಲೂಕು ಘಟಕದ ಪದಾಧಿಕಾರಿಗಳು ಬೆಂಬಲ ವ್ಯಕ್ತಪಡಿಸಿ ಶನಿವಾರ ಮುಷ್ಕರದಲ್ಲಿ ಪಾಲ್ಗೊಂಡರು.
ಪಿಡಿಎನ್‌ಎ ತಾಲೂಕು ಘಟಕದ ಅಧ್ಯಕ್ಷ ಸಿ.ಜೆ.ಪ್ರಕಾಶ್ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಆಡಳಿತಾಧಿಕಾರಿಗಳ ಮೂಲ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಕೂಡಲೇ ಮುಂದಾಗಬೇಕು ಎಂದು ಒತ್ತಾಯಿಸಿದರು. ತಹಸೀಲ್ದಾರ್ ನಿಸರ್ಗಪ್ರಿಯ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವರಿಗೆ ಮನವಿ ಸಲ್ಲಿಸಿದರು.
ತಾಲೂಕು ಗ್ರಾಮ ಆಡಳಿತಾಧಿಕಾರಿಗಳ ಸಂಘದ ಅಧ್ಯಕ್ಷ ನವೀನ್ ರಾವ್, ಉಪಾಧ್ಯಕ್ಷ ದೀಪಕ್, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಇತರರು ಇದ್ದರು.