

ಮಂಡ್ಯ: ಮಳವಳ್ಳಿ ತಾಲೂಕು ಹಲಗೂರು ಗ್ರಾಮ ಪಂಚಾಯಿತಿ ಪಿಡಿಒಗೆ ಬೆದರಿಕೆ ಹಾಕಿ ಜಾತಿ ನಿಂದನೆ ಮಾಡಿರುವ ಸದಸ್ಯ ಸುರೇಂದ್ರ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ನಗರದಲ್ಲಿ ಮನವಿ ಸಲ್ಲಿಸಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ತಾಲೂಕು ಕಚೇರಿಗೆ ತೆರಳಿ ತಹಸೀಲ್ದಾರ್ ಮೂಲಕ ರಾಜ್ಯಸರ್ಕಾರಕ್ಕೆ ಮನವಿ ರವಾನಿಸಿದರು. ಹಲಗೂರು ಗ್ರಾಪಂ ಪಿಡಿಒ ಸಿ.ರುದ್ರಯ್ಯ ನಿಷ್ಟೆಯಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ ಇವರ ಬಳಿ ಸದಸ್ಯ ಸುರೇಂದ್ರ ನ್ಯಾಯ ಸಮ್ಮತವಲ್ಲದ ಬೇಡಿಕೆಗಳನ್ನು ಇಟ್ಟಿದ್ದು, ಅದಕ್ಕೆ ಸ್ಪಂದಿಸದ ಹಿನ್ನಲೆಯಲ್ಲಿ ಸೇವೆಯಿಂದ ಅಮಾನತು ಮಾಡಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆದ್ದರಿಂದ ಆತನನ್ನು ಬಂಧಿಸುವುದರ ಜತೆಗೆ ಸದಸ್ಯತ್ವವನ್ನು ರದ್ದುಗೊಳಿಸಬೇಕು. ಈ ಮೂಲಕ ಅಧಿಕಾರಿಗಳು ನಿರ್ಭೀತಿಯಿಂದ ಕೆಲಸ ಮಾಡುವ ವಾತಾವರಣ ಕಲ್ಪಿಸಿಕೊಡಬೇಕೆಂದು ಮನವಿ ಮಾಡಿದರು.
ಸಂಘದ ತಾಲೂಕು ಅಧ್ಯಕ್ಷ ಕೆ.ಮಂಜುನಾಥ್, ಸಂಘಟನಾ ಕಾರ್ಯದರ್ಶಿ ಸುನೀಲ್ಕುಮಾರ್, ಬಿ.ಎಸ್.ಸುರೇಶ್, ಎಸ್.ಕೃಷ್ಣೇಗೌಡ ಇತರರಿದ್ದರು.