

ಮೂಡಿಗೆರೆ: ಸಂವಿಧಾನವನ್ನು ಬದಲಾಯಿಸುವುದಾಗಿ ಹೇಳುತ್ತಿದ್ದ ಬಿಜೆಪಿಯನ್ನೇ ಜನ ಬದಲಾಯಿಸಲಿದ್ದಾರೆ ಎಂದು ಮಾಜಿ ಸಚಿವೆ ಮೋಟಮ್ಮ ಹೇಳಿದರು.
ಚುನಾವಣೆ ವೇಳೆ ಸೋಲಿನ ಭಯದಿಂದಾಗಿ ಸಂವಿಧಾನ ಬದಲಾವಣೆ ಮಾಡುವುದಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿಯಾಗಿದ್ದರೂ ನರೇಂದ್ರ ಮೋದಿ ಅವರು ವಿವಿಧ ರಾಜ್ಯಗಳಲ್ಲಿ ಸುಳ್ಳು ಪ್ರಚಾರ ಮಾಡಿ ಕರ್ನಾಟಕದ ಮಾನ ತೆಗೆಯುತ್ತಿದ್ದಾರೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಯಾವುದೇ ವಿಚಾರಕ್ಕೆ ಪ್ರತಿಕ್ರಿಯೆ ನೀಡುವ ಪಿಎಂ ಅವರು ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಕುರಿತು ಮಾತನಾಡುತ್ತಿಲ್ಲ. ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ನಡೆಸಿ, ಸಾಮೂಹಿಕ ಅತ್ಯಾಚಾರ, ಕೊಲೆ ಮಾಡಿದ್ದರೂ ಅಲ್ಲಿಗೆ ಭೇಟಿ ನೀಡಿಲ್ಲ ಎಂದು ದೂರಿದರು.
ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆಯನ್ನು ಸರ್ಕಾರ ಎಸ್‌ಐಟಿಗೆ ವಹಿಸಿದೆ. ರಾಜ್ಯ ಸರ್ಕಾರದ ನಿರ್ಧಾರದಿಂದ ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಸಿಗಲಿದೆ. ಪೆನ್‌ಡ್ರೈವ್ ಹಂಚಿಕೆ ಮಾಡಿ ಮಹಿಳೆಯರ ಮಾನ ಹರಾಜು ಹಾಕಲು ಮುಂದಾಗಿರುವ ಕೆಲವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲೆ ಆರೋಪ ಹೊರಿಸಿ ನುಡಿಚಿಕೊಳ್ಳಲು ಯತ್ನಿಸಿ ಸಿಕ್ಕಿಬಿದ್ದಿದ್ದಾರೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮಹಿಳೆಯರಿಗೆ ರಕ್ಷಣೆ ಹಾಗೂ ಗೌರವಕ್ಕೆ ಧಕ್ಕೆಯಾಗದು ಎಂದು ಹೇಳಿದರು.
2014ರವರೆಗೆ ಭಾರತದಲ್ಲಿ ಶೇ.20 ಮಾತ್ರ ಬಡತನವಿತ್ತು. ಬಿಜೆಪಿ 10 ವರ್ಷದ ಆಡಳಿತದಲ್ಲಿ ಬಡತನ ಶೇ.80ಕ್ಕೆ ಏರಿದೆ.