

ಚನ್ನರಾಯಪಟ್ಟಣ: ಬಾಲ್ಯ ವಿವಾಹ ತಡೆಗೆ ಸರ್ಕಾರ ಅನೇಕ ಕಾಯ್ದೆ-ಕಾನೂನುಗಳನ್ನು ಜಾರಿಗೆ ತಂದರೂ ಬಾಲ್ಯ ವಿವಾಹ ನಡೆಯುತ್ತಿದೆ. ಅದನ್ನು ಸಂಪೂರ್ಣ ತಡೆಗಟ್ಟಲು ಸಾರ್ವಜನಿಕರ ಸಹಕಾರ ಅಗತ್ಯ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎ.ಎಸ್.ಇಂದ್ರಾ ಹೇಳಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ತಾಲೂಕಿನ ಆನೆಕೆರೆಯ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಆಯೋಜಿಸಿದ್ದ ಬಾಲ್ಯವಿವಾಹ ನಿಷೇಧ ಹಾಗೂ ಪೋಕ್ಸೋ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಾಲ್ಯ ವಿವಾಹ ಮಾಡಿಸಿದರೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಗೊತ್ತಾದರೆ ವಿವಾಹದಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ ಶಿಕ್ಷೆ ಗ್ಯಾರಂಟಿ, ವಧುವಿಗೆ 18 ವರ್ಷ, ವರನಿಗೆ 21 ವರ್ಷ ತುಂಬಿದ್ದರೆ ಮಾತ್ರ ಮದುವೆಗೆ ಅರ್ಹರಾಗಿರುತ್ತಾರೆ. ಇದನ್ನು ಅರಿತು ಪ್ರತಿಯೊಬ್ಬರೂ ಬಾಲ್ಯವಿವಾಹ ತಡೆಗೆ ಮುಂದಾಗಬೇಕು ಎಂದು ಸಲಹೆ ನೀಡಿದರು.
ಬಾಲ್ಯ ವಿವಾಹದಿಂದ ಬಾಲಕಿಯರು ದೈಹಿಕ ಮತ್ತು ಮಾನಸಿಕವಾಗಿ ಬೆಳವಣಿಗೆ ಕುಂಠಿತವಾಗಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಸಮಾಜದ ಪ್ರಗತಿಗೆ ಅಡ್ಡಿ ಉಂಟು ಮಾಡುತ್ತದೆ. ಭವಿಷ್ಯ ಮಂಕಾಗುತ್ತದೆ. ಬಾಲಕಿಯರಿಗೆ ಉತ್ತಮ ವಿದ್ಯಾಭ್ಯಾಸ ನೀಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರಬೇಕು. ಬಾಲ್ಯವಿವಾಹ ಮಾಡುವುದು ಶಿಕ್ಷಾರ್ಹ ಅಪರಾಧ. ಬಾಲ್ಯ ವಿವಾಹವನ್ನು ತಡೆಗಟ್ಟುವ ಮೂಲಕ ಬಾಲ್ಯವಿವಾಹ ಮುಕ್ತ ತಾಲೂಕನ್ನಾಗಿ ಮಾಡಲು ಎಲ್ಲರೂ ಕೈಜೋಡಿಸಬೇಕಾಗಿದೆ. ಅದೇ ರೀತಿ 2012ರಲ್ಲಿ ಪೋಕ್ಸೋ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳದಿಂದ ಮಕ್ಕಳನ್ನು ರಕ್ಷಿಸುವುದು ಈ ಕಾಯ್ದೆಯ ಉದ್ದೇಶ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅರ್ಚನಾ ಮಾತನಾಡಿದರು. ಮುಖ್ಯಶಿಕ್ಷಕ ಕೆ.ಆರ್.ಉಮೇಶ್ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಇದ್ದರು.