

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಪ್ರತಿಪಕ್ಷಗಳು ನಾಯಕರ ಹುಟ್ಟುಹಬ್ಬ, ವೈಯಕ್ತಿಕ ಉತ್ಸವದಲ್ಲಿ ನಿರತವಾಗಿವೆ. ಆದರೆ, ಬಿಜೆಪಿ ಮಾತ್ರ ಜನ ಸಾಮಾನ್ಯರ ಉತ್ಸವ ಆಚರಿಸುತ್ತಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದರು. ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿ, ಜನರಿಗೆ ಅನುಕೂಲವಾಗುವ ಬೃಹತ್ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿರುವ ಕೇಂದ್ರ ಮತ್ತು ರಾಜ್ಯದ ಡಬಲ್ ಇಂಜಿನ್ ಸರ್ಕಾರದಿಂದ ಎಲ್ಲ ವರ್ಗದ ಅಭಿವೃದ್ಧಿ ಕಂಡು ಬರುತ್ತಿದೆ. ಇನ್ನು ರೈತರು, ಮಹಿಳೆಯರು, ಯುವಕರ ಸಬಲೀಕರಣದ ಕಾರ್ಯಕ್ರಮದಲ್ಲಿ ಬಿಜೆಪಿ ತೊಡಗಿದೆ ಎಂದರು.
ಫಸಲ್ ಬಿಮಾ ಯೋಜನೆಯಡಿ ಕೇಂದ್ರದಿಂದ ರೈತನಿಗೆ ತಲಾ 6 ಸಾವಿರ ಮತ್ತು ರಾಜ್ಯದಿಂದ ತಲಾ 4 ಸಾವಿರ ಸೇರಿ ವಾರ್ಷಿಕ 10 ಸಾವಿರ ರೂ.ಗಳನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ. ಸಿಂಗಲ್ ಇಂಜಿನ್ ಸರ್ಕಾರವಾಗಿದ್ದರೆ ಒಂದು ಕಡೆ ನೆರವಿಗೆ ಮಾತ್ರ ಫಲಾನುಭವಿಗಳು ತೃಪ್ತಿಪಡಬೇಕಾಗಿತ್ತು. ಆದ್ದರಿಂದ ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಸರ್ಕಾರ ಇರಬೇಕು ಎಂದು ಹೇಳಿದರು.ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಒಂದು ವರ್ಷ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಜನೋತ್ಸವ ಕೈಗೊಳ್ಳಲಾಗುತ್ತಿದೆ. ಜಿಲ್ಲೆಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಮಲಿಂಗಪ್ಪ ಮಾತನಾಡಿ, ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗಹಿಸುವ ನಿಟ್ಟಿನಲ್ಲಿ ಸರ್ಕಾರದ ಸಾಧನೆಯ ಜನೋತ್ಸವದ ಬಗ್ಗೆ ವ್ಯಾಪಕವಾಗಿ ಪ್ರಚಾರ ಕೈಗೊಳ್ಳಬೇಕು ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದರು.ನಗರಸಭೆ ಅಧ್ಯಕ್ಷ ಡಿ.ಎಸ್.ಆನಂದ್ ರೆಡ್ಡಿ ಬಾಬು, ಜಿಪಂ ಮಾಜಿ ಅಧ್ಯಕ್ಷ ಪಿ.ಎನ್.ಕೇಶವರೆಡ್ಡಿ, ಮಾವು ಮತ್ತು ಮಾರುಕಟ್ಟೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಕೆ.ವಿ.ನಾಗರಾಜ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮರಳಕುಂಟೆ ಕೃಷ್ಣಮೂರ್ತಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಲೀಲಾವತಿ ಶ್ರೀನಿವಾಸ್, ಮಂಡಲ ಅಧ್ಯಕ್ಷರಾದ ಆನಂದ್ ಅನು, ಕೆ.ಎಸ್.ಕೃಷ್ಣಾರೆಡ್ಡಿ, ಭಾರತಿ, ಮಲ್ಲಿಕಾ, ತಾಪಂ ಮಾಜಿ ಅಧ್ಯಕ್ಷರಾದ ಬಿ.ಎಂ.ರಾಮಸ್ವಾಮಿ, ಪಿ.ಎ.ಮೋಹನ್ ಮತ್ತಿತರರು ಇದ್ದರು.
ಜಿಲ್ಲೆಯೊಂದಕ್ಕೆ 5 ಕೋಟಿ ರೂ.: ರೈತರ ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ಮೊದಲ ದಿನವೇ ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ ಯೋಜನೆ ಜಾರಿಗೊಳಿಸಿದ್ದು, ಇದು ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ ಅನುಕೂಲವಾಗಿದೆ. ರಾಜ್ಯದಲ್ಲಿ 10 ಲಕ್ಷ ವಿದ್ಯಾರ್ಥಿಗಳು ಫಲಾನುಭವಿಗಳಿದ್ದು, ಚಿಕ್ಕಬಳ್ಳಾಪುರವೊಂದಕ್ಕೆ 5 ಕೋಟಿ ರೂ. ಅನುದಾನ ಸಿಕ್ಕಿದೆ ಎಂದು ಡಾ.ಸುಧಾಕರ್ ತಿಳಿಸಿದರು.
ಮಾದರಿ ತಾಲೂಕಾಗಿ ಅಭಿವೃದ್ಧಿ:
ಮಂಚೇನಹಳ್ಳಿಯನ್ನು ಮಾದರಿ ತಾಲೂಕು ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು. ಈಗಾಗಲೇ ತಾಲೂಕು ಆಸ್ಪತ್ರೆ ಮಂಜೂರಾಗಿದೆ. ಶ್ರಾವಣ ಮಾಸದಲ್ಲಿ ಹಲವು ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಗುತ್ತದೆ ಎಂದು ಡಾ ಕೆ.ಸುಧಾಕರ್ ಭರವಸೆ ನೀಡಿದರು. ಮಂಚೇನಹಳ್ಳಿಯಲ್ಲಿ ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಮಾತನಾಡಿ, ಗೌರಿಬಿದನೂರಿನಿಂದ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿವರೆಗೂ ರಾಷ್ಟ್ರೀಯ ಹೆದ್ದಾರಿ 232ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ 335 ಕೋಟಿ ರೂ. ಅನುದಾನ ನೀಡಿದೆ. ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮೊದಲ ಸಭೆಯಲ್ಲಿ ಮಂಜೂರಾತಿ ನೀಡಿದ್ದಾರೆ ಎಂದರು. ತಾಪಂ ಮತ್ತು ಜಿಪಂ ಚುನಾವಣೆಗಳು ಶೀಘ್ರದಲ್ಲಿಯೇ ನಡೆಯಲಿದ್ದು, ಇದಕ್ಕೆ ಸಜ್ಜಾಗಬೇಕಾಗಿದೆ. ಈ ನಿಟ್ಟಿನಲ್ಲಿ ಜನೋತ್ಸವದ ಶಕ್ತಿ ಪ್ರದರ್ಶನದ ಮೂಲಕ ಗಮನ ಸೆಳೆಯಬೇಕಾಗಿದೆ ಎಂದರು.
ಕೋಚಿಮುಲ್ ನಿರ್ದೇಶಕ ಸುಬ್ಬಾರೆಡ್ಡಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ನಾರಾಯಣಸ್ವಾಮಿ, ಮುಖಂಡರಾದ ಜಗನ್ನಾಥ್, ಬಾಲಕೃಷ್ಣ ಮತ್ತಿತರರು ಇದ್ದರು.
ಸ್ಪರ್ಧೆಗೆ ಆಹ್ವಾನಿಸಿ ಅವಮಾನ: ಚಿಕ್ಕಬಳ್ಳಾಪುರ: ಕಾಂಗ್ರೆಸ್ ಶಾಸಕರು ಚುನಾವಣೆಗೆ ಸ್ಪರ್ಧಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸುವ ಮೂಲಕ ನಾಯಕರನ್ನು ಅವಮಾನಿಸುತ್ತಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ನಾಯಕರಾಗಿದ್ದ ಸಿದ್ದರಾಮಯ್ಯ 40 ವರ್ಷದಿಂದ ರಾಜಕಾರಣದಲ್ಲಿದ್ದಾರೆ. ಅವರಿಗೆ ಒಂದು ಕ್ಷೇತ್ರವಿದೆ. ಇದರ ಅರಿವಿದ್ದರೂ ಎಲ್ಲರೂ ನಮ್ಮ ಕ್ಷೇತ್ರಕ್ಕೆ ಬನ್ನಿ ಬನ್ನಿ ಎಂದು ಕರೆಯುತ್ತಿದ್ದಾರೆ. ಅವರಿಗೇನು ಕ್ಷೇತ್ರ ಗತಿ ಇಲ್ಲವಾ? ಹೀಗೇಕೆ ಅವಮಾನ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು. ಇತ್ತೀಚೆಗೆ ಸಿದ್ದರಾಮಯ್ಯ ಅವರನ್ನು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಬಾಗೇಪಲ್ಲಿ ಕ್ಷೇತ್ರದಿಂದ ಸ್ಪರ್ಧಿಸಲು ಆಹ್ವಾನಿಸಿದ್ದಾರೆ. ಖುಷಿಯಿಂದ ಕ್ಷೇತ್ರವನ್ನು ಬಿಟ್ಟು ಕೊಡುವುದಾಗಿ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿಗೆ ತನ್ನದೇ ಒಂದು ಕ್ಷೇತ್ರವಿದ್ದರೂ ಅನೇಕ ಶಾಸಕರು, ಮಾಜಿ ಶಾಸಕರು ತಮ್ಮ ಕ್ಷೇತ್ರದಲ್ಲಿ ಸ್ಪರ್ಧೆಗೆ ಆಹ್ವಾನಿಸುವ ಮೂಲಕ ಅವಮಾನಿಸುತ್ತಿದ್ದಾರೆ ಎಂದರು.