ಗಣೇಶೋತ್ಸವಕ್ಕೆ ಅನುಮತಿ: ಬಿಬಿಎಂಪಿಯಿಂದ ಏಕಗವಾಕ್ಷಿ ಪದ್ದತಿ

bbmp office
Published on

ಬೆಂಗಳೂರು: ಮುಂಬರುವ ಗೌರಿ-ಗಣೇಶೋತ್ಸವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಮೂರ್ತಿಗಳ ಪ್ರತಿಷ್ಠಾಪನೆಗೆ ಬಿಬಿಎಂಪಿ, ಬೆಸ್ಕಾಂ, ಪೊಲೀಸ್ ಸೇರಿ ವಿವಿಧ ಇಲಾಖೆಗಳಿಂದ ಅನುಮತಿ ಪತ್ರ ಪಡೆಯಲು ಅನುಕೂಲವಾಗುವಂತೆ ಏಕಗವಾಕ್ಷಿ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ.

ಗೌರಿ-ಗಣೇಶ ಹಬ್ಬದ ವೇಳೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಬಿಬಿಎಂಪಿ ಮತ್ತು ನಗರ ಪೊಲೀಸರ ಜಂಟಿ ಸಹಯೋಗದಲ್ಲಿ ಶನಿವಾರ ಪುರಭವನದಲ್ಲಿ ನಡೆದ ಶಾಂತಿ ಸೌಹಾರ್ದತೆ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಏಕ ಗವಾಕ್ಷಿ ಪದ್ಧತಿಗೆ ಬೇಕಾದ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದನ್ನು ಇದನ್ನು ಸಾರ್ವಜನಿಕರು ಪಾಲಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಎಂ.ಮಹೇಶ್ವರ್ ರಾವ್ ಮನವಿ ಮಾಡಿದ್ದಾರೆ.

ಸಭೆಯಲ್ಲಿ ಮಾತನಾಡಿದ ಮುಖ್ಯ ಆಯುಕ್ತರು, ಪಾಲಿಕೆಯ 75 ಉಪ ವಿಭಾಗ ಕಚೇರಿಗಳಲ್ಲಿ ಬಿಬಿಎಂಪಿ, ಬೆಸ್ಕಾಂ, ಪೊಲೀಸ್ ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಿ ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗುತ್ತದೆ. ಈ ಕೇಂದ್ರಗಳ ವಿಳಾಸ ಹಾಗೂ ಏಕಗವಾಕ್ಷಿ ಕೇಂದ್ರಗಳಲ್ಲಿರುವ ನೋಡಲ್ ಅಧಿಕಾರಿಗಳ ವಿವರವಾದ ಮಾಹಿತಿಯನ್ನು ಶೀಘ್ರವೇ ಪಾಲಿಕೆಯ ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಲಾಗುವುದು ಎಂದರು.

ಮೊಬೈಲ್ ಟ್ಯಾಂಕ್ ವ್ಯವಸ್ಥೆ:

ಬಿಬಿಎಂಪಿಯು ಗಣೇಶ ಮೂರ್ತಿಗಳ ವಿಸರ್ಜನೆಗೆ ಪ್ರಮುಖ ಕೆರೆಗಳ ಕಲ್ಯಾಣಿಗಳಲ್ಲಿ ಸೂಕ್ತ ವ್ಯವಸ್ಥೆ ಮಾಡಿಕೊಡಲಿದೆ. ಪ್ರಮುಖ ಸ್ಥಳ/ಜಂಕ್ಷನ್ ಮತ್ತು ಅಗತ್ಯ ಇರುವೆಡೆ ವಾರ್ಡ್‌ವಾರು ತಾತ್ಕಾಲಿಕವಾಗಿ ಸಂಚಾರಿ ವಿಸರ್ಜನಾ ಘಟಕಗಳನ್ನು (ಮೊಬೈಲ್ ಟ್ಯಾಂಕ್) ವ್ಯವಸ್ಥೆ ಮಾಡಲಾಗುವುದು. ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಬೇಕು. ವಾಯುಮಾಲಿನ್ಯ, ನೀರು ಕಲುಷಿತ ಆಗುವಂತಹ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾನೆ ಮಾಡಬಾರದು. ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳ ವೇಳೆ ಶಾಂತಿ ಕಾಪಾಡಬೇಕು ಎಂದು ಮುಖ್ಯ ಆಯುಕ್ತರು ವಿವರಿಸಿದರು.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಾತನಾಡಿ, ಹಬ್ಬಗಳನ್ನು ಆಚರಿಸಲು ಉತ್ತಮ ಸಲಹೆಗಳನ್ನು ನೀಡಿದ್ದು, ಆ ಎಲ್ಲ ಸಲಹೆಗಳಿಗೆ ಅಗತ್ಯ ಕ್ರಮಗಳನ್ನು ಕೈಗೊಂಡು ಇರುವ ಸಮಸ್ಯೆಗಳನ್ನು ಬಗೆಹರಿಸಲಾಗುವುದೆಂದು ತಿಳಿಸಿದರು.

ಸಭೆಯಲ್ಲಿ ಬಿಬಿಎಂಪಿ ವಿಶೇಷ ಆಯುಕ್ತರಾದ ನವೀನ್ ಕುಮಾರ್ ರಾಜು, ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಕಾರ್ತಿಕ್ ರೆಡ್ಡಿ, ಬಿಬಿಎಂಪಿ, ಬೆಸ್ಕಾಂ, ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಅಗ್ನಿಶಾಮಕ ಅಧಿಕಾರಿಗಳು, ಗಣೇಶ ಪ್ರತಿಷ್ಠಾನದ ಆಯೋಜಕರು, ವಿವಿಧ ಸಮುದಾಯದ ಮುಖಂಡರು ಹಾಜರಿದ್ದರು.

ಈ ಬಾರಿಯ ಗಣೇಶೋತ್ಸವಕ್ಕೆ ಯಾವುದೇ ರೀತಿಯ ಅಡ್ಡಿ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಹಬ್ಬ ಆಚರಿಸುವ ವೇಳೆ ಬಿಬಿಎಂಪಿ, ಪೊಲೀಸ್ ಇಲಾಖೆಯಿಂದ ಬರುವ ಸಲಹೆ/ಸೂಚನೆಗಳನ್ನು ಎಲ್ಲರೂ ಪಾಲಿಸಬೇಕು. ಮೆರವಣಿಗೆಯ ಮಾರ್ಗಕ್ಕೆ ಎಲ್ಲರೂ ಸಹಕಾರ ನೀಡಬೇಕು. ಎಲ್ಲಿಯೂ ಸಂಚಾರ ದಟ್ಟಣೆ ಉಂಟಾಗದಂತೆ ಪೊಲೀಸ್ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ.

- ಸೀಮಂತ್‌ಕುಮಾರ್ ಸಿಂಗ್, ನಗರ ಪೊಲೀಸ್ ಆಯುಕ್ತ

ಸಭೆಯಲ್ಲಿ ನಾಗರಿಕರಿಂದ ಕೇಳಿಬಂದ ಪ್ರಮುಖ ಸಲಹೆಗಳಿವು:

* ಹಬ್ಬಗಳ ವೇಳೆ ಡಿಜೆ ಬಳಕೆ ಸಂಪೂರ್ಣವಾಗಿ ನಿಷೇಧಿಸಬೇಕು.

* ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನ್ವಯವಾಗುವ ನಿಯಮಗಳನ್ನು ಮುಂಚಿತವಾಗಿಯೇ ಮಾಹಿತಿ ನೀಡಿ ಮೆರವಣಿಗೆ ಸಾಗುವ ರಸ್ತೆಗಳನ್ನು ದುರಸ್ತಿಗೊಳಿಸಬೇಕು.

* ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಸಂಚಾರ ದಟ್ಟಣೆ ಆಗದಂತೆ ಕ್ರಮವಹಿಸಬೇಕು.

* ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿಯಾದ ಪೊಲೀಸ್ ಭದ್ರತೆ ಕಲ್ಪಿಸಬೇಕು.

* ಧ್ವನಿವರ್ಧಕಗಳ ಅಳವಡಿಸುವಿಕೆ, ಪಟಾಕಿ ಹಚ್ಚುವಿಕೆಯನ್ನು ತಡೆಯಬೇಕು.

* ಏಕ ಗವಾಕ್ಷಿ ಪದ್ದತಿಯಲ್ಲಿ ಅನುಮತಿ ನೀಡುವುದನ್ನು ಸರಿಯಾಗಿ ಜಾರಿಗೊಳಿಸಬೇಕು.

* ಹೆಚ್ಚು ಜನ ಸೇರುವ ಸ್ಥಳದಲ್ಲಿ ಸಿಸಿ ಕ್ಯಾಮರಾ ಅಳವಡಿಸಲು ಆಯೋಜಕರಿಗೆ ಸೂಚಿಸಬೇಕು.

* ಕೆರೆಗಳ ಬಳಿಯಿರುವ ಕಲ್ಯಾಣಿಗಳಲ್ಲಿ ಮೂರ್ತಿ ವಿಸರ್ಜನೆ ವೇಳೆ ಶಿಸ್ತು, ಸ್ವಚ್ಛತೆಗೆ ಆದ್ಯತೆ ನೀಡಬೇಕು.

* ಮೂರ್ತಿ ವಿಸರ್ಜನೆಗೆ ಎಲ್ಲ ವಾರ್ಡ್‌ಗಳಲ್ಲಿ ಮೊಬೈಲ್ ಟ್ಯಾಂಕರ್ ವ್ಯವಸ್ಥೆ ಕಲ್ಪಿಸಬೇಕು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net