ಪ್ರತಿಭಟನೆಗೆ ಅನುಮತಿ ಕುರಿತು ನಿರ್ಧಾರ ಕೈಗೊಳ್ಳಿ ಪೊಲೀಸರಿಗೆ ಹೈಕೋರ್ಟ್ ನಿರ್ದೇಶನ

High Court 13 Jan 20
Published on

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಹೊಂಬೇಗೌಡನಗರದಲ್ಲಿ ಶನಿವಾರ (ಜ.25) ಪ್ರತಿಭಟನೆ ನಡೆಸಲು ಅನುಮತಿ ಕೋರಿ ‘ಬಿಡುಗಡೆಯ ಚಿರತೆಗಳು ಕರ್ನಾಟಕ’ ಸಂಘಟನೆ ಸಲ್ಲಿಸಿರುವ ಅರ್ಜಿ ಪರಿಗಣಿಸಿ ಸೂಕ್ತ ಆದೇಶ ಹೊರಡಿಸುವಂತೆ ಪೊಲೀಸರಿಗೆ ಹೈಕೋರ್ಟ್ ನಿರ್ದೇಶಿಸಿದೆ. ಸಂಘಟನೆ ಕಾರ್ಯಾಧ್ಯಕ್ಷ ನಜೀಬ್ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ನ್ಯಾ. ಪಿ.ಎಸ್. ದಿನೇಶ್​ಕುಮಾರ್ ಅವರಿದ್ದ ಪೀಠ, ಈ ಆದೇಶ ನೀಡಿತು.

ಸಂಘಟನೆ ಪದಾಧಿಕಾರಿಗಳು ಹೊಂಬೇಗೌಡ ನಗರ ಮೈದಾನದಲ್ಲಿ ಜ.25ರಂದು ಪ್ರತಿಭಟನೆ ನಡೆಸಲು ಪಾಲಿಕೆಯಿಂದ ಅನುಮತಿ ಪಡೆದಿದ್ದರು. ಆನಂತರ ಪೊಲೀಸರಿಗೆ ಅರ್ಜಿ ಸಲ್ಲಿಸಿ, ಅನುಮತಿ ಕೋರಿದ್ದರು. ಆದರೆ ಪೊಲೀಸರು ಅನುಮತಿ ನೀಡದೆ ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿ ದ್ದಾರೆ ಎಂದು ಅರ್ಜಿದಾರರ ಪರ ವಕೀಲ ಜಯಕುಮಾರ್ ಎಸ್. ಪಾಟೀಲ್ ದೂರಿದರು. ಲಾಲ್​ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನ ನಡೆಯುತ್ತಿದ್ದು, ಅದೇ ಪ್ರದೇಶದ ವ್ಯಾಪ್ತಿಯಲ್ಲಿರುವ ಮೈದಾನದಲ್ಲಿ ಪ್ರತಿಭಟನೆಗೆ ಅವಕಾಶ ನೀಡಿದರೆ ತೊಂದರೆ ಎದುರಾಗುವ ಸಾಧ್ಯತೆ ಇದೆ ಎಂದು ಹೆಚ್ಚುವರಿ ಅಡ್ವೊಕೇಟ್ ಜನರಲ್ ಧ್ಯಾನ್ ಚಿನ್ನಪ್ಪ ವಾದ ಮಂಡಿಸಿದರು.

ವಾದ ಪ್ರತಿವಾದ ಆಲಿಸಿದ ಪೀಠ, ಪ್ರತಿಭಟನೆಗೆ ಅನುಮತಿ ಕೋರಿ ಅರ್ಜಿದಾರರು ಸಲ್ಲಿಸಿರುವ ಮನವಿ ಪರಿಗಣಿಸಿ ಸೂಕ್ತ ತೀರ್ಮಾನ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net