

ಚನ್ನರಾಯಪಟ್ಟಣ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಮೀನು ಹೊಂಡಗಳನ್ನು ನಿರ್ಮಿಸಲು ಅವಕಾಶವಿದೆ. ಈ ಬಗ್ಗೆ ರೈತರಿಗೆ ಜಾಗೃತಿ ಮೂಡಿಸಬೇಕೆಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಿ.ಆರ್.ಹರೀಶ್ ತಿಳಿಸಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಸಹನ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಏರ್ಪಡಿಸಿದ್ದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಸಾಕಷ್ಟು ಕೆರೆಗಳಿವೆ. ವರ್ಷಪೂರ್ತಿ ನೀರು ಇರುವ ಕೆರೆಗಳನ್ನು ಗುರುತಿಸಿ ಮೀನು ಸಾಕಣೆಗೆ ಅವಕಾಶ ಒದಗಿಸಬೇಕು. ಕೆರೆಗಳನ್ನು ಹರಾಜು ಹಾಕಿ ಮೀನುಗಳನ್ನು ಸಾಕಲು ಅವಕಾಶ ನೀಡಬೇಕು. ಈ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ಮೀನುಗಾರಿಕೆ ಇಲಾಖೆ ಅಧಿಕಾರಿ ಗಮನಕ್ಕೆ ತಂದರು.
ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಸಹನ ಕುಮಾರ್ ಮಾತನಾಡಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಈ ಬಗ್ಗೆ ತರಬೇತಿ ನೀಡಿದರೆ ಅವರು ಗ್ರಾಮೀಣ ಭಾಗದ ಜನರಿಗೆ ಮಾಹಿತಿ ನೀಡಲು ಅನುಕೂಲವಾಗುತ್ತದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಹರೀಶ್, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಕ್ರಿಯಾಯೋಜನೆ ಅನ್ವಯ ಕಾರ್ಯನಿರ್ವಹಿಸಬೇಕು. ಕ್ರಿಯಾ ಯೋಜನೆಯಲ್ಲಿ ಇಲ್ಲದಿರುವ ಕಾಮಗಾರಿ ಕೈಗೆತ್ತಿಕೊಳ್ಳುವುದು ಬೇಡ. ಮಧ್ಯ ವರ್ತಿಗಳ ಹಾವಳಿಗೆ ಕಡಿವಾಣ ಹಾಕಬೇಕು. ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆ ತಲುಪುವಂತೆ ನೋಡಿಕೊಳ್ಳಬೇಕು ಎಂದರು.
ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ವಿಮೆ ಪಾವತಿಸಲು ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ರೈತರಿಗೆ ಮಾಹಿತಿ ನೀಡುವ ದೃಷ್ಟಿಯಿಂದ ಈಗಾಗಲೇ 41 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಆಟೋಗಳಲ್ಲಿ ಪ್ರಚಾರ ಮಾಡಲಾಗಿದೆ. ಅದೇ ರೀತಿ ಬೆಳೆ ಸಮೀಕ್ಷೆ ಪ್ರಕ್ರಿಯೆ ಸಹ ಆರಂಭವಾಗಿದ್ದು, ರೈತರು ಬೆಳೆದ ಬೆಳೆಯನ್ನು ಮೊಬೈಲ್ ಆ್ಯಪ್ ಮೂಲಕ ತಾವೇ ಸಮೀಕ್ಷೆ ಮಾಡಲು ಅನುಕೂಲ ಕಲ್ಪಿಸಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಕೆ.ಮೋಹನ್ ಕುಮಾರ್ ತಿಳಿಸಿದರು. ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.