ಸಾಧನೆಗೆ ಪರಿಶ್ರಮ ಮುಖ್ಯ

30 vikram 6
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಸಾಧನೆ ಮಾಡಲು ಹೊರಟಾಗ ಅನೇಕ ಅಡೆತಡೆ ಮತ್ತು ಸವಾಲುಗಳನ್ನು ಸ್ವೀಕರಿಸಿ ಮುನ್ನಡೆಯಬೇಕು ಎಂದು ಸಮಾಜ ಸೇವಕಿ ಶಿವಲೀಲಾ ಕುಲಕರ್ಣಿ ಅಭಿಪ್ರಾಯಪಟ್ಟರು.
ನಗರದ ಕರ್ನಾಟಕ ಕಲಾ ಕಾಲೇಜು, ಕಾಲೇಜಿನ ಐಕ್ಯೂ ಎಸಿ ವಿಭಾಗ, ಶಹರ ಆಟೋ ಚಾಲಕರ ಮತ್ತು ಮಾಲಿಕರ ಸಂಘ ಮತ್ತು ಹಿದಾಯತ್ ರಾಯಚೂರು ಅಭಿಮಾನಿ ಬಳಗದ ವತಿಯಿಂದ ಕಾಲೇಜಿನ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಬಹುಮಾನ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಸಾಧನೆಗೆ ಸತತ ಅಧ್ಯಯನ ಪರಿಶ್ರಮ ಅಗತ್ಯ. ಹೀಗಾಗಿ ವಿದ್ಯಾರ್ಥಿಗಳು ನಿರಂತರ ಅಧ್ಯಯನದಲ್ಲಿ ತೊಡಗುವುದರ ಜತೆಗೆ ಪರಿಸರ ಉಳಿಸಿ ಬೆಳಸುವ ಕಾರ್ಯಕ್ಕೆ ಹೆಚ್ಚು ಒತ್ತು ನೀಡಬೇಕು. ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಲು ಪ್ರಯತ್ನಿಸಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದ ಅವರು, ಜೀವನದಲ್ಲಿ ನಿರ್ದಿಷ್ಟ ಗುರಿ, ಛಲ ಹೊಂದಬೇಕು ಎಂದರು.
ಕವಿವಿ ಸಿಂಡಿಕೇಟ್ ಮಾಜಿ ಸದಸ್ಯ ರವಿಕುಮಾರ ಮಾಳಿಗೇರ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಕೌಶಲ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳ ಮುಂದೆ ಅನೇಕ ಆಯ್ಕೆಗಳಿವೆ. ಜೀವನದಲ್ಲಿ ತಂತ್ರಜ್ಞಾನ ಮೈಗೂಡಿಸಿಕೊಂಡು ಮುನ್ನಡೆಯಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಡಾ. ಡಿ.ಬಿ.ಕರಡೋಣಿ ಮಾತನಾಡಿ, ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಇತಿಹಾಸ ಮತ್ತು ಸಾಹಿತ್ಯ ಓದುವುದರಿಂದ ಸಂಸ್ಕಾರ ದೊರಕುತ್ತದೆ. ಇಂತಹ ಸಮಾಜಮುಖಿ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿರಬೇಕು ಎಂದರು.
ವಿವಿಧ ವಿಷಯಗಳಲ್ಲಿ ಸಾಧನೆ ಮಾಡಿದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಹಿದಾಯತ್ ರಾಯಚೂರು, ಬಸವರಾಜ ಜಾಧವ, ಶಹರ ಆಟೋ ಚಾಲಕರ ಮತ್ತು ಮಾಲಿಕರ ಸಂಘದ ಅಧ್ಯಕ್ಷ ಶಿವಾನಂದ ನಿಗದಿ, ಖಲೀಲ ಶೇಖ, ಜ್ಯೋತಿ ಗೌಳಿ, ಆಕಾಶ ಹಣಸೂರು, ವಿದ್ಯಾರ್ಥಿಗಳು ಪ್ರಾಧ್ಯಾಪಕರು, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net