

ವಿಜಯವಾಣಿ ಸುದ್ದಿಜಾಲ ಧಾರವಾಡ
ಮಹಿಳೆಯರು ಉದ್ಯೋಗದ ಜತೆಗೆ ಕುಟುಂಬ ನಿರ್ವಹಣೆ ಜವಾಬ್ದಾರಿ ಹೊಂದಿರುತ್ತಾರೆ. ಹೀಗಾಗಿ ಮಹಿಳೆ ಸಂಪಾದನೆ ಮಾಡಿದ ಜ್ಞಾನ ಕುಟುಂಬದ ಆರ್ಥಿಕತೆ ಬೆಳವಣಿಗೆಗೆ ಕಾರಣವಾಗುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.
ನಗರದ ಆನಂದ ಮಗದುಮ್ಮ ಕಲ್ಯಾಣ ಮಂಟಪದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಮತ್ತು ಪ್ರಗತಿಬಂಧು ಸ್ವ ಸಹಾಯ ಸಂಘಗಳ ಒಕ್ಕೂಟದ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಮಹಿಳಾ ಸಮಾವೇಶ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಮಹಿಳೆಯರಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಿವಿಧ ತರಬೇತಿ ನೀಡಿ ಅವರಲ್ಲಿ ಕೌಶಲ ವೃದ್ಧಿಸಲಾಗುತ್ತಿದೆ. ಇದರಿಂದ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಅನುಕೂಲ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಾಲು ಉತ್ಪಾದನೆಗೆ ಪ್ರೋತ್ಸಾಹಿಸಲಾಗುತ್ತಿದೆ. ಇದರಿಂದ ಮಹಿಳೆಯರು ನಿರಂತರ ಆದಾಯದ ಜತೆಗೆ ಉಳಿತಾಯ ಮಾಡಬಹುದು. ಬದುಕಿನಲ್ಲಿ ಕಷ್ಟಗಳನ್ನು ಆತ್ಮವಿಶ್ವಾಸದಿಂದ ಎದುರಿಸಿದಾಗಲೇ ಜೀವನಲ್ಲಿ ಉನ್ನತ ಸಾಧನೆ ಸಾಧ್ಯ. ಬದುಕಿಲ್ಲಿನ ಅಸಾಧ್ಯವಾದದ್ದು ಯಾವುದು ಇಲ್ಲ. ನಿರಂತರ ಶ್ರಮ ಇರಲೇಬೇಕು ಎಂದರು.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾತನಾಡಿ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಿಂದ ಸ್ವಸಹಾಯ ಗುಂಪುಗಳ ಮೂಲಕ ವಿವಿಧ ತರಬೇತಿ ಕೇಂದ್ರಗಳನ್ನು ನಡೆಸಿ ಮಹಿಳೆಯರಿಗೆ ಸ್ವಾವಲಂಬನೆ ಜೀವನ ನಡೆಸಲು ಸಹಕಾರಿಯಾಗುತ್ತಿರುವುದು ದೇಶದಲ್ಲೇ ಮಾದರಿ ಕೆಲಸವಾಗಿದೆ. ಕೇಂದ್ರ ಸರ್ಕಾರ ಮಹಿಳೆಯರ ಉನ್ನತಿಗೆ ವಿವಿಧ ಯೋಜನೆಗಳನ್ನು ರೂಪಿಸಿದೆ. ಅವುಗಳ ಅನುಷ್ಠಾನಕ್ಕೂ ಗ್ರಾಮೀಣಾಭಿವೃದ್ಧಿ ಯೋಜನೆಯಿಂದ ಶ್ರಮಿಸಲಾಗುತ್ತಿದೆ. ಮಹಿಳೆಯರ ಸಬಲೀಕರಣಕ್ಕೆ ನಿರಂತರವಾಗಿ ತರಬೇತಿ ನೀಡಲಾಗುತ್ತಿದೆ ಎಂದರು
ಶಾಸಕ ಅರವಿಂದ ಬೆಲ್ಲದ ಅಧ್ಯಕ್ಷತೆ ವಹಿಸುವರು. ಧರ್ಮಸ್ಥಳದ ಗ್ರಾಮೀಣಾಭಿವೃದ್ಧಿ ಯೋಜನೆಯ ಸ್ವಸಹಾಯ ಗುಂಪುಗಳ ಮೂಲಕ ಸಾಲ ಸೌಲಭ್ಯ ಪಡೆದು ಸ್ವ ಉದ್ಯೋಗ ನಡೆಸಿ ಉತ್ತಮ ಜೀವನ ನಡೆಸುತ್ತಿರುವ ಸಾಧಕ ಮಹಿಳೆಯರಿಗೆ ಸನ್ಮಾನಿಸಲಾಯಿತು.
ವಕೀಲ ಆನಂದ ಮಗದುಮ್ಮ, ಜನಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ರಾಜಣ್ಣ ಕೊರವಿ, ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕ ವಸಂತ ಸಾಲ್ಯಾನ್, ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಸಂತೋಷ ಶೆಟ್ಟಿ, ಮುಖಂಡರಾದ ಸವಿತಾ ಅಮರಶೆಟ್ಟಿ, ವಸಂತ ಅರ್ಕಾಚಾರ, ಇತರರು ಇದ್ದರು.