

ಹನೂರು: ಪಟ್ಟಣದ ಎಲ್ಲೇಮಾಳ ರಾಮಾಪುರ ವಿಭಜಕ ರಸ್ತೆಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ನಾಡಪ್ರಭು ಕೆಂಪೇಗೌಡ ವೃತ್ತದ ಬಳಿ ಒತ್ತುವರಿಯಾಗಿರುವ ಸರ್ಕಾರಿ ಜಾಗವನ್ನು ತೆರವುಗೊಳಿಸುವಂತೆ ಶನಿವಾರ ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ತಹಸೀಲ್ದಾರ್ ವೈ.ಕೆ. ಗುರುಪ್ರಸಾದ್ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಪಟ್ಟಣ ಪಂಚಾಯಿತಿ ಸದಸ್ಯ ಗಿರೀಶ್ ಮಾತನಾಡಿ, ಪಟ್ಟಣದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕೆಂಪೇಗೌಡ ವೃತ್ತ ನಿರ್ಮಾಣ ಸಂಬಂಧ ಈಗಾಗಲೇ ಸಭೆಯಲ್ಲಿ ಅನುಮೋದನೆ ಪಡೆದು ಜಿಲ್ಲಾಧಿಕಾರಿ ಅವರಿಗೆ ವರದಿ ಸಲ್ಲಿಸಲಾಗಿದೆ. ಇಲ್ಲಿ ವೃತ್ತ ನಿರ್ಮಿಸಲು ಸೂಕ್ತ ಸ್ಥಳಾವಕಾಶವಿದೆ. ಆದರೆ, ವ್ಯಕ್ತಿಯೊಬ್ಬರು ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಆದ್ದರಿಂದ ಈ ಬಗ್ಗೆ ಕ್ರಮವಹಿಸುವಂತೆ ಮನವಿ ಮಾಡಿದರು.
ಇದೇ ವೇಳೆ ತಾಲೂಕು ಒಕ್ಕಲಿಗರ ಸಂಘದ ನಿರ್ದೇಶಕ ಮಾದೇಶ್ ಮಾತನಾಡಿ, ನಿರ್ಧರಿಸಿರುವ ಸ್ಥಳದಲ್ಲಿ ಕೆಂಪೇಗೌಡ ವೃತ್ತ ನಿರ್ಮಿಸುವ ಸಂಬಂಧ ಹಿಂದಿನ ಶಾಸಕ ಆರ್.ನರೇಂದ್ರ ಅವರು ಪಪಂ ಸಾಮಾನ್ಯ ಸಭೆಯಲ್ಲಿ ಅನುಮೋದನೆ ನೀಡಿದ್ದರು. ಹಾಲಿ ಶಾಸಕ ಎಂ.ಆರ್.ಮಂಜುನಾಥ್ ಅವರು ಕಳೆದ ತಿಂಗಳು ನಡೆದ ಕೆಂಪೇಗೌಡ ಜಯಂತಿ ಪೂರ್ವಭಾವಿ ಸಭೆಯಲ್ಲಿ ಈ ಬಗ್ಗೆ ಸರ್ವೆ ಕಾರ್ಯ ನಡೆಸಿ ಒತ್ತುವರಿಯಾಗಿರುವ ಜಾಗವನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಆದರೆ, ಈವರೆಗೂ ಯಾವುದೇ ಕ್ರಮವಾಗಿಲ್ಲ. ಆದ್ದರಿಂದ ಈ ಬಗ್ಗೆ ಮುತುವರ್ಜಿ ವಹಿಸಿ ಒತ್ತುವರಿ ಜಾಗವನ್ನು ತೆರವುಗೊಳಿಸುವಂತೆ ಒತ್ತಾಯಿಸಿದರು. ಈ ಬಗ್ಗೆ ಶೀಘ್ರ ಅಗತ್ಯ ಕ್ರಮವಹಿಸುವುದಾಗಿ ತಹಸೀಲ್ದಾರ್ ಗುರುಪ್ರಸಾದ್ ಭರವಸೆ ನೀಡಿದರು.
ಕೊಳ್ಳೇಗಾಲ ಹಾಗೂ ಹನೂರು ತಾಲೂಕು ಒಕ್ಕಲಿಗರ ಸಂಘದ ನಿರ್ದೇಶಕ ಮಂಜೇಶ್ ಇದ್ದರು.