ಕಾವೇರಿ ಹೋರಾಟಕ್ಕೆ ಛಾಯಾಗ್ರಾಹಕರ ಬೆಂಬಲ: ಮಂಡ್ಯ ನಗರದಲ್ಲಿ ಪ್ರತಿಭಟನಾ ಮೆರವಣಿಗೆ

Photographers support Cauvery protest
Published on

ಮಂಡ್ಯ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರೈತರಿಗೆ ನಿರಂತರ ಅನ್ಯಾಯವಾಗುತ್ತಿರುವುದನ್ನು ವಿರೋಧಿಸಿ ವೃತ್ತಿಪರ ಛಾಯಾಗ್ರಾಹಕರು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಮಾಂಡವ್ಯ ವೃತ್ತಿಪರ ಛಾಯಾಚಿತ್ರಗ್ರಾಹಕರ ಸಂಘದ ಆಶ್ರಯದಲ್ಲಿ ಸ್ಟುಡಿಯೋಗಳನ್ನು ಬಂದ್ ಮಾಡಿ ಕಾವೇರಿ ಹೋರಾಟಕ್ಕೆ ವೃತ್ತಿಪರ ಛಾಯಾಗ್ರಾಹಕರು ಬೆಂಬಲ ಸೂಚಿಸಿದರು. ನಗರದ ಸಿಲ್ವರ್‌ಜ್ಯೂಬಿಲಿ ಉದ್ಯಾನದಲ್ಲಿ ಜಮಾವಣೆಗೊಂಡ ಛಾಯಾಗ್ರಾಹಕರು ಬಳಿಕ ಮೆರವಣಿಗೆ ಹೊರಟು ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿ ನಂತರ ಜಿಲ್ಲಾ ರೈತ ಹಿತರಕ್ಷಣ ಸಮಿತಿ ಧರಣಿ ಸ್ಥಳಕ್ಕೆ ತೆರಳಿ ಕೆಲಕಾಲ ರಸ್ತೆ ತಡೆ ನಡೆಸಿ ಹೋರಾಟ ಬೆಂಬಲಿಸಿದರು.

ಕಾವೇರಿ ವಿಚಾರದಲ್ಲಿ ರೈತರಿಗೆ ಸತತವಾಗಿ ಅನ್ಯಾಯವಾಗುತ್ತಿದ್ದು, ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಸುಪ್ರೀಂ ಕೋರ್ಟ್ ತೀರ್ಪು ಮಾರಕವಾಗಿದೆ. ಮಳೆ ಕೊರತೆಯಿಂದ ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆ ಇದೆ. ಆದರೂ ಸಹ ತಮಿಳುನಾಡಿಗೆ ನೀರು ಹರಿಸುತ್ತಿರುವುದು ರೈತರಿಗೆ ಮಾಡಿದ ದ್ರೋಹವಾಗಿದೆ. ರೈತರು ದೇಶದ ಬೆನ್ನೆಲುಬು ರೈತರ ಹಿತ ಕಾಪಾಡುವುದು ಆಳುವ ಸರ್ಕಾರದ ಆದ್ಯ ಕರ್ತವ್ಯ. ಹಾಗಾಗಿ ಕೃಷ್ಣರಾಜಸಾಗರದಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ತಕ್ಷಣ ಸ್ಥಗಿತ ಮಾಡಬೇಕು. ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ದೃಢ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಉಮೇಶ್, ಉಪಾಧ್ಯಕ್ಷ ಕಾರ್ತಿಕ್, ಕಾರ್ಯದರ್ಶಿ ರೂಬಿನ್, ಮಹೇಶ್, ಲಕ್ಷ್ಮಣ್ ಪಟೇಲ್, ಬಾಬು, ಜಗದೀಶ್, ಮಾಜಿ ಅಧ್ಯಕ್ಷರಾದ ಬಾಲು, ಮಧುಚಂದ್ರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net