ದೈಹಿಕ, ಮಾನಸಿಕ ಸದೃಢ

HYR pu sports 20
Published on

ಹಿರಿಯೂರು: ಕ್ರೀಡೆ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಅವಿಭಾಜ್ಯ ಅಂಗವಾಗಿದೆ. ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದು ಪಿಯು ಇಲಾಖೆ ಉಪನಿರ್ದೇಶಕ ಆರ್.ಪುಟ್ಟಸ್ವಾಮಿ ಹೇಳಿದರು.

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಸರ್ಕಾರಿ ಪದವಿ ಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ ನಗರದ ತಾಲೂಕು ಕ್ರೀಡಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಕ್ರೀಡೆ ಐತಿಹಾಸಿಕ ಪರಂಪರೆ ಹೊಂದಿದೆ. ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ, ಭಾಗವಹಿಸುವಿಕೆ ಮುಖ್ಯ ಎಂದರು.

ಕ್ರೀಡಾ ಜ್ಯೋತಿ ಸ್ವೀಕರಿಸಿ ಮಾತನಾಡಿದ ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಆರ್.ಶಿವಕುಮಾರ್, ಮಕ್ಕಳು ತಮ್ಮಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹಾಕುವಲ್ಲಿ ಕ್ರೀಡೆಗಳು ಪ್ರಮುಖ ಪಾತ್ರ ವಹಿಸುತ್ತವೆ. ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚಿನ ಗಮನ ಹರಿಸಬೇಕು ಎಂದು ಹೇಳಿದರು.

ಸರ್ಕಾರಿ ಪಿಯು ಕಾಲೆಜು ಪ್ರಾಚಾರ್ಯ ಕೆ.ಇ.ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರ ಸಂಘದ ತಾಲೂಕಾಧ್ಯಕ್ಷ ಕೆ.ಆರ್.ತಿಪ್ಪೇಸ್ವಾಮಿ, ಪ್ರಾಚಾರ್ಯರಾದ ಕೆ.ನಾಗಣ್ಣ, ಮನೋಹರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net