ಯೋಜನೆಗಳ ಜಾರಿಯಲ್ಲಿ ವಿಳಂಬ ಧೋರಣೆ ಸಲ್ಲ

19mnv01
Published on

ಮಾನ್ವಿ: ರಾಜ್ಯ ಸರ್ಕಾರ ವಿವಿಧ ಇಲಾಖೆಗಳಿಗೆ ನೀಡಿರುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಬೇಕೆಂದು ಅಧಿಕಾರಿಗಳಿಗೆ ಜಿಪಂ ಉಪಕಾರ್ಯದರ್ಶಿ ಶಶಿಕಾಂತ ಶಿವಪುರೆ ಸೂಚಿಸಿದರು.

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಗುರುವಾರ ಮಾತನಾಡಿದರು. ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ಪೂರ್ಣಗೊಳಿಸುವಲ್ಲಿ ವಿಳಂಬ ನೀತಿ ತೋರಿಸುತ್ತಿರುವುದು ಸರಿಯಲ್ಲ ಎಂದರು.
ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಕಡ್ಡಾಯವಾಗಿ ಬಯೋಮೆಟ್ರಿಕ್ ಹಾಜರಾತಿ ಪ್ರಕಾರ ವೇತನ ಮಾಡಬೇಕು. ಎಲ್ಲ ಗ್ರಾಮ ಪಂಚಾಯಿತಿಗಳು ಪ್ರತಿ ತಿಂಗಳು ಕುಡಿಯುವ ನೀರಿನ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಬೇಕು. ಶುದ್ಧ ಕುಡಿಯುವ ನೀರು ಪೂರೈಸುವುದಕ್ಕೆ ಕ್ರಮ ವಹಿಸಬೇಕು ಎಂದು ತಾಕೀತು ಮಾಡಿದರು.

ಉದ್ಯೋಗ ಖಾತ್ರಿ ಯೋಜನೆಯಡಿ ನಿರಂತರ ಕೆಲಸ ನೀಡಬೇಕು. ಅಮೃತ ಕೆರೆಗಳ ನಿರ್ವಹಣೆಗಾಗಿ 25 ಲಕ್ಷ ರೂ. ವೆಚ್ಚ ಮಾಡಲಾಗುತ್ತಿದ್ದು, ಕೆರೆಯ ನೀರನ್ನು ಕುಡಿಯಲು ಮತ್ತು ಬಳಸಲು ಕ್ರಮ ಕೈಗೊಳ್ಳಬೇಕು ಎಂದು ತಾಪಂ ಇಒ ಖಾಲೀದ್ ಅಹಮ್ಮದ್‌ಗೆ ಸೂಚಿಸಿದರು.

ತಾಲೂಕಿನಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚಿನ ಫಲಿತಾಂಶಕ್ಕಾಗಿ ಶಿಕ್ಷಣ ಇಲಾಖೆ ಸರ್ಕಾರದ 20 ಅಂಶಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು, ತಾಲೂಕಿನಲ್ಲಿ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಹೆಚ್ಚಿನ ಫಲಿತಾಂಶ ಬರುವುದಕ್ಕೆ ಕಾರಣರಾದ ಪ್ರತಿಭಾವಂತ ಶಿಕ್ಷಕರನ್ನು ಗುರುತಿಸಿ ಫಲಿತಾಂಶ ಕಡಿಮೆ ಇರುವ ಶಾಲೆಗಳಲ್ಲಿನ ಮಕ್ಕಳಿಗೆ ಉಪನ್ಯಾಸ ಕೊಡಿಸಬೇಕು. ಅತಿಥಿ ಶಿಕ್ಷಕರಿಗೆ ತರಬೇತಿ ಕೊಡಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರಗೆ ತಿಳಿಸಿದರು.

ಸಾವಯವ ಕೃಷಿ ಉತ್ತೇಜಿಸುವುದಕ್ಕಾಗಿ ನರೇಗಾ ಯೋಜನೆಯಡಿ ಎರೆಹುಳು ಗೊಬ್ಬರ ಘಟಕಗಳ ನಿರ್ಮಾಣ, ಕೃಷಿಹೊಂಡ ನಿರ್ಮಾಣಕ್ಕೆ ರೈತರಿಗೆ ಉತ್ತೇಜನ ನೀಡಬೇಕು ಎಂದು ಕೃಷಿ ಅಧಿಕಾರಿ ಗುರುನಾಥಗೆ ಸೂಚಿಸಿದರು. ಸಾಮಾಜಿಕ ಅರಣ್ಯ ಇಲಾಖೆಯಿಂದ ರಾಜಲಬಂಡ ಹಾಗೂ ಗೋರ್ಕಲ್ ಗ್ರಾಮಗಳಲ್ಲಿ ನೆಡುತೋಪುಗಳನ್ನು ನಿರ್ಮಾಣ ಮಾಡಬೇಕು, ಪ್ರತಿ ವರ್ಷ 30 ಸಾವಿರ ಸಸಿಗಳನ್ನು ನೆಡುವುದಕ್ಕೆ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ವಲಯ ಅರಣ್ಯಾಧಿಕಾರಿ ರಮೇಶಗೆ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net