

ಹುಬ್ಬಳ್ಳಿ: ಇಲ್ಲಿಯ ಗೋಕುಲ ರಸ್ತೆ ಕೋಟಿಲಿಂಗ ನಗರದ ಮಲ್ಲಿಕಾರ್ಜುನ ಉದ್ಯಾನದಲ್ಲಿ ಮಹಾನಗರ ಪಾಲಿಕೆ ವತಿಯಿಂದ ಬುಧವಾರ ಆಯೋಜಿಸಿದ್ದ ಲಕ್ಷ ವೃಕ್ಷಗಳನ್ನು ನೆಡುವ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಒಂದು ಲಕ್ಷ ಸಸಿ ನೆಡುವ ಬೃಹತ್ ಕಾರ್ಯಕ್ರಮ ಇದಾಗಿದೆ. ಇದರಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು. ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಸಲಹೆ ನೀಡಿದರು.
ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ಮಹಾನಗರ ಪಾಲಿಕೆ ವ್ಯಾಪ್ತಿಯ ಸುಮಾರು 579 ಉದ್ಯಾನಗಳಲ್ಲಿ ಲಕ್ಷ ವೃಕ್ಷಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಸಾರ್ವಜನಿಕರು ಈ ಕಾರ್ಯಕ್ಕೆ ಕೈ ಜೋಡಿಸುವ ಮೂಲಕ ಮರಗಿಡಗಳನ್ನು ಸಂರಕ್ಷಣೆ ಮಾಡಬೇಕು ಎಂದರು.
ಜಿಲ್ಲಾಧಿಕಾರಿ ದಿವ್ಯಪ್ರಭು, ಮೇಯರ್ ರಾಮಣ್ಣ ಬಡಿಗೇರ, ಉಪ ಮೇಯರ್ ದುರ್ಗಮ್ಮ ಬಿಜವಾಡ, ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಸದಸ್ಯ ಚೇತನ ಹಿರೇಕೆರೂರ, ನಾಗರಾಜ ಗೌರಿ, ಪ್ರೇಮನಾಥ ಚಿಕ್ಕತುಂಬಳ, ಮಾಜಿ ಮೇಯರ್ ಪ್ರಕಾಶ ಕ್ಯಾರಕಟ್ಟಿ, ಪಾಲಿಕೆ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.