ನ.1ರಿಂದ ಕಡ್ಡಾಯ ಪ್ಲಾಸ್ಟಿಕ್ ನಿಷೇಧ

kdp
Published on

ಉಡುಪಿ: ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ನವೆಂಬರ್ 1 ರಿಂದ ಕಡ್ಡಾಯವಾಗಿ ಪ್ಲಾಸ್ಟಿಕ್ ಬಳಕೆ ನಿಷೇಧಿಸುವ ಕುರಿತು ಪಿಡಿಒ ಹಾಗೂ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಸೂಚಿಸಿದರು.

ಸೋಮವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ಲಾಸ್ಟಿಕ್ ನಿಷೇಧ ಕಾಯ್ದೆ 2016 ರಲ್ಲಿ ಜಾರಿಇಯಾಗಿದ್ದರೂ ಗ್ರಾಮೀಣ ಪ್ರದೇಶದಲ್ಲಿ ಆದೇಶ ಪಾಲನೆಯಾಗುತ್ತಿಲ್ಲ, ಅಂಗಡಿಗಳಲ್ಲಿ, ಹೋಟೆಲ್‌ಗಳಲ್ಲಿ ಗ್ರಾಹಕರಿಗೆ ಪ್ಲಾಸ್ಟಿಕ್ ಚೀಲಗಳನ್ನು ನೀಡುತ್ತಿರುವುದು ಕಂಡು ಬರುತ್ತಿದೆ. ಪ್ಲಾಸ್ಟಿಕ್‌ಗೆ ಪರ್ಯಾಯ ವಸ್ತುಗಳು ಇದ್ದರೂ ಬಳಸಲಾಗುತ್ತಿಲ್ಲ. ಅದ್ದರಿಂದ ನವೆಂಬರ್ 1 ರಿಂದ ಪ್ಲಾಸ್ಟಿಕ್ ಬಳಸುವವರ ವಿರುದ್ಧ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕಡ್ಡಾಯವಾಗಿ ದಂಡ ವಸೂಲಿ ಮಾಡಬೇಕು. ಈ ಬಗ್ಗೆ ಗ್ರಾಮಗಳಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ ಮಾಹಿತಿ ನೀಡಿ, ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಶೇ. 15 ಅಧಿಕ ಮಳೆಯಾಗಿದೆ. 4375 ಮಿ.ಮೀ. ವಾಡಿಕೆ ಮಳೆ ಇದ್ದು, 5051 ಮಿ.ಮಿ ಮಳೆಯಾಗಿದೆ. 273 ಹೆಕ್ಟೇರ್ ಭತ್ತದ ಕೃಷಿಗೆ ಹಾನಿಯಾಗಿದ್ದು, ಪರಿಹಾರ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.

ತೋಟಗಾರಿಕಾ ಇಲಾಖೆ ಉಪ ನಿರ್ದೇಶಕಿ ಭುವನೇಶ್ವರಿ, ಮಳೆಯಿಂದಾಗಿ 29 ಹೆಕ್ಟೇರ್ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ. ಮಟ್ಟು ಸುತ್ತುಮುತ್ತಲಿನ ಪ್ರದೇಶದಲ್ಲಿ ಬೆಳೆದಿದ್ದ 6.8 ಹೆಕ್ಟೇರ್ ಮಟ್ಟುಗುಳ್ಳ ಬೆಳೆಗೆ 1 ಎಕರೆಗೆ 20 ಸಾವಿರ ರೂ. ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಉಪಾಧ್ಯಕ್ಷೆ ಶೀಲಾ ಶೆಟ್ಟಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಜಿ. ಪುತ್ರನ್, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಹೆಗ್ಡೆ ಮಾರಾಳಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಸುಮಿತ್ ಶೆಟ್ಟಿ, ಸಿಇಒ ಡಾ.ನವೀನ್ ಭಟ್, ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಯೋಜನಾ ನಿರ್ದೇಶಕ ಗುರುದತ್, ಯೋಜನೆ, ಅಂದಾಜು ಮತ್ತು ಮೌಲ್ಯ ಮಾಪನಾಧಿಕಾರಿ ರಾಧಾಕೃಷ್ಣ ಅಡಿಗ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net