ಈಶ್ವರಪ್ಪ ವಿರುದ್ಧದ ಸುಮೋಟೊ ದೂರು ಹಿಂಪಡೆಯಲು ಮನವಿ

kse
ಕೆ.ಎಸ್.ಈಶ್ವರಪ್ಪ ವಿರುದ್ಧ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ದೂರನ್ನು ರದ್ದುಪಡಿಸುವಂತೆ ಆಗ್ರಹಿಸಿ ಕೆ.ಇ.ಕಾಂತೇಶ್, ಇ.ವಿಶ್ವಾಸ್, ಶಂಕರ್ ಗನ್ನಿ, ಮಹಾಲಿಂಗಯ್ಯ ಶಾಸ್ತ್ರಿ ಮುಂತಾದವರು ಜಿ.ಕೆ.ಮಿಥುನ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
Published on

ಶಿವಮೊಗ್ಗ:ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ವಿರುದ್ಧ ಪ್ರಚೋಧನಕಾರಿ ಹೇಳಿಕೆ ಆರೋಪದಡಿ ಜಯನಗರ ಠಾಣೆ ಪೊಲೀಸರು ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ದೂರನ್ನು ಕೈ ಬಿಡುವಂತೆ ಒತ್ತಾಯಿಸಿ ರಾಷ್ಟ್ರಭಕ್ತರ ಬಳಗದ ಕಾರ್ಯಕರ್ತರು ಶನಿವಾರ ಎಸ್ಪಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಈಶ್ವರಪ್ಪ, ವಾಸ್ತವ ಸ್ಥಿತಿಯನ್ನು ವಿವರಿಸಿದ್ದರು. ಮುಂದೆ ಎದುರಾಗಬಹುದಾದ ಸನ್ನಿವೇಶವನ್ನು ತಿಳಿಸಿದ್ದರು. ಅವರು ಪರೋಕ್ಷವಾಗಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು. ಇದರಿಂದ ವಿಚಲಿತವಾಗಿರುವ ಸರ್ಕಾರ ಅಧಿಕಾರ ಬಳಸಿಕೊಂಡು ಅವರ ವಿರುದ್ಧ ದೂರು ದಾಖಲಿಸಿಕೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಈಶ್ವರಪ್ಪ ವಿರುದ್ಧ ದಾಖಲಿಸಿಕೊಂಡಿರುವ ಎಫ್‌ಐಆರ್ ರದ್ದು ಮಾಡದೇ ಇದ್ದರೆ ಮುಂದಿನ ದಿನಗಳಲ್ಲಿ ಸಂಘಟನೆಯಿಂದ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಈ ವೇಳೆ ಎಸ್ಪಿ ಜಿ.ಕೆ.ಮಿಥುನ್‌ಕುಮಾರ್ ಅವರೊಂದಿಗೆ ಸಮಾಲೋಚನೆ ನಡೆಸಿದ ಪ್ರತಿಭಟನಾಕಾರರು ಒತ್ತಡದ ಕಾರಣದಿಂದ ದಾಖಲಿಸಿಕೊಂಡಿರುವ ಎಫ್‌ಐಆರ್ ರದ್ದು ಮಾಡಿ ಎಂದು ಆಗ್ರಹಿಸಿದರು.

ಜಿಪಂ ಮಾಜಿ ಸದಸ್ಯ ಕೆ.ಇ.ಕಾಂತೇಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಮಹಾಲಿಂಗಯ್ಯ ಶಾಸ್ತ್ರಿ, ಮಾಜಿ ಉಪಮೇಯರ್ ಶಂಕರ್ ಗನ್ನಿ, ಪಾಲಿಕೆ ಮಾಜಿ ಸದಸ್ಯ ಇ.ವಿಶ್ವಾಸ್ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net