ಮಾ.17ಕ್ಕೆ ಚಿಕ್ಕಬಳ್ಳಾಪುರಕ್ಕೆ ಪ್ರಧಾನಿ ಮೋದಿ

27CBP1
Published on

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 22 ಸಾವಿರ ನಿವೇಶನಗಳನ್ನು ಬಡವರಿಗೆ ವಿತರಣೆ ಮಾಡುವ ಜತೆಗೆ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಲು ಮಾ.17ರಂದು ಪ್ರಧಾನಿ ನರೇಂದ್ರ ಮೋದಿ ಕ್ಷೇತ್ರಕ್ಕೆ ಆಗಮಿಸಲಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದರು.
ಮಂಚೇನಹಳ್ಳಿ ತಾಲೂಕಿನ ಹಳೇಹಳ್ಳಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಗ್ರಾಮಸಭೆಯಲ್ಲಿ ಮಾತನಾಡಿದ ಸಚಿವರು, ಪ್ರಧಾನಿ ನರೇಂದ್ರ ಮೋದಿ ಅವರಿಂದಲೇ ನಿವೇಶನ ಹಕ್ಕುಪತ್ರ, ಮನೆಗಳ ನಿರ್ಮಾಣದ ಆದೇಶಪತ್ರ, ಆಯುಷ್ಮಾನ್ ಭಾರತ್ ಯೋಜನೆಯಡಿ 1.5 ಕೋಟಿ ಕಾರ್ಡ್‌ಗಳ ವಿತರಣೆಯಾಗಲಿದೆ ಎಂದರು.
ಆರೋಗ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ರಾಜ್ಯಕ್ಕೆ ಆರು ವೈದ್ಯಕೀಯ ಕಾಲೇಜುಗಳು ಮಂಜೂರಾಗಿದ್ದು, ಈ ಪೈಕಿ ಹಾವೇರಿ, ಯಾದಗಿರಿ, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರದ ಕಾಲೇಜುಗಳ ಉದ್ಘಾಟನೆ ಮಾ.17ರಂದು ನೆರವೇರಲಿದೆ. ಉಳಿದಂತೆ ರಾಮನಗರ ಮತ್ತು ಚಿತ್ರದುರ್ಗ ಜಿಲ್ಲೆಗಳಿಗೆ ಆಯವ್ಯಯದಲ್ಲಿ ವೈದ್ಯಕೀಯ ಕಾಲೇಜುಗಳು ಮಂಜೂರಾಗಿದೆ ಎಂದರು.
ನೂತನ ತಾಲೂಕು ಮಂಚೇನಹಳ್ಳಿಯಲ್ಲಿ ಅಭಿವೃದ್ಧಿಯ ಪರ್ವ ಆರಂಭವಾಗಿದ್ದು, ಮಾ.2ರಂದು ಹೊಸ ತಾಲೂಕಿನ ತಾಲೂಕು ಕಚೇರಿ ಉದ್ಘಾಟನೆ, 39 ಕೋಟಿ ರೂ. ವೆಚ್ಚದ ತಾಲೂಕು ಮಟ್ಟದ ಆಸ್ಪತ್ರೆ, ತಾಯಿ ಮತ್ತು ಮಗುವಿನ ಆಸ್ಪತ್ರೆಗಳ ನಿರ್ಮಾಣಕ್ಕೆ ಭೂಮಿಪೂಜೆ, ಗೌರಿಬಿದನೂರು ಗಡಿಯಿಂದ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿವರೆಗೆ ರಾಷ್ಟ್ರೀಯ ಹೆದ್ದಾರಿ 232ರ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ, ದಂಡಿಗಾನಹಳ್ಳಿಯಂದ 62 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಯೋಜನೆ ಸೇರಿದಂತೆ 500 ಕೋಟಿ ರೂ. ಗೂ ಹೆಚ್ಚು ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದರು.
ಈ ಹಿಂದೆ ರಾಮನಗರ ಜಿಲ್ಲೆಯಲ್ಲಿ ಮುಖ್ಯಮಂತ್ರಿಯೇ ಇದ್ದರೂ ವೈದ್ಯಕೀಯ ಕಾಲೇಜು ತರಲು ಸಾಧ್ಯವಾಗಲಿಲ್ಲ. ಆದರೆ, ಬಿಜೆಪಿ ಸರ್ಕಾರ ವೈದ್ಯಕೀಯ ಕಾಲೇಜು ಘೋಷಣೆಯೊಂದಿಗೆ 600 ಕೋಟಿ ರೂ. ಮಂಜೂರು ಮಾಡಿದೆ. ಜತೆಗೆ 150 ಹಾಸಿಗೆ ಇದ್ದ ಸಾರ್ವಜನಿಕ ಆಸ್ಪತ್ರೆಯನ್ನು 600 ಹಾಸಿಗೆ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲಾಗಿದ್ದು, ಮಾ.1ರಂದು ರಾಮನಗರ ಜಿಲ್ಲಾಸ್ಪತ್ರೆಯನ್ನು ಉದ್ಘಾಟಿಸಲಾಗುತ್ತದೆ ಎಂದರು.
ಮಂಚೇನಹಳ್ಳಿ ವ್ಯಾಪ್ತಿಯಲ್ಲಿ ಕೈಗಾರಿಕಾ ವಲಯ ಸ್ಥಾಪಿಸುವ ಮೂಲಕ ಈ ಭಾಗದ ಪ್ರತಿ ಮನೆಗೆ ಉದ್ಯೋಗ ಕಲ್ಪಿಸಲು ಶ್ರಮಿಸಲಾಗುತ್ತಿದೆ. ಹಿಂದಿನ ಶಾಸಕರು ಮಂಚೇನಹಳ್ಳಿ ಹೋಬಳಿಯಲ್ಲಿ ಹಮ್ಮಿಕೊಂಡ ಅಭಿವೃದ್ಧಿ ಕೆಲಸಗಳ ಬಗ್ಗೆ ಹೇಳುವುದರ ಬದಲಿಗೆ ರಾಜಕೀಯ ತೆವಲಿಗೆ ಕೇವಲ ಟೀಕಿಸುವುದರಲ್ಲಿ ಕಾಲ ಕಳೆಯುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಗ್ರಾಮ ಮಟ್ಟದಲ್ಲಿ ಬಡವರ ಕೆಲಸಗಳನ್ನು ನಿರ್ವಹಿಸುವುದರಲ್ಲಿ ಲೋಪವೆಸಗುವ ಅಧಿಕಾರಿಗಳನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ. ಪಿಡಿಒಗಳು ನಿವೇಶನ ಹಂಚಿಕೆ ಮತ್ತು ಮನೆ ವಿತರಿಸುವ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಸಚಿವರು ಸೂಚಿಸಿದರು.
ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷರಾದ ಮೈತ್ರಾ ರಮೇಶ್, ನರಸಿಂಹಮೂರ್ತಿ, ಕೋಚಿಮುಲ್ ನಿರ್ದೇಶಕ ಸುಬ್ಬಾರೆಡ್ಡಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಸುದರ್ಶನ್ ರೆಡ್ಡಿ, ಜಿಲ್ಲಾ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ನಾರಾಯಣಸ್ವಾಮಿ, ಮುಖಂಡರಾದ ವೆಂಕಟೇಶ್, ಬಾಲಕೃಷ್ಣ, ಲಕ್ಷ್ಮೀಪತಿ, ಚಲಪತಿ, ಮುನಿರಾಜು, ಮಂಜುನಾಥರೆಡ್ಡಿ, ಸವಿತಾ ರಮೇಶ್ , ಗೋವಿಂದರಾಜು, ಹನುಮೇಗೌಡ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net