

ಕಲಬುರಗಿ : ಪ್ರಧಾನಿ ನರೇಂದ್ರ ಮೋದಿ ಅವರು ಜ.೧೯ ರಂದು ಕಲಬುರಗಿ ನಗರಕ್ಕೆ ಆಗಮಿಸಲಿದ್ದಾರೆ. ಅಂದು ವಿಶೇಷ ವಿಮಾನ ಮೂಲಕ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದು ಇಳಿಯಲಿದ್ದಾರೆ. ಕೆಲ ಹೊತ್ತು ತಂಗಿ ಸ್ಥಳೀಯ ಮುಖಂಡರನ್ನು ಭೇಟಿ ಮಾಡುವರು. ಇದೇ ವೇಳೆಯಲ್ಲಿ ಕೆಲ ಸಮಯವನ್ನು ಪಡೆದುಕೊಂಡು ಪ್ರಧಾನ ಮಂತ್ರಿ ಆವಾಸ ಯೋಜನೆಯಡಿ ಬಡವರಿಗೆ ಮನೆಗಳ ಹಕ್ಕುಪತ್ರಗಳನ್ನು ಹಂಚಿಕೆ ಮಾಡುವ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಬಳಿಕ ಸೇನಾ ಹೆಲಿಕಾಪ್ಟರ್ ಮೂಲಕ ಸೋಲ್ಲಾಪುರ ಜಿಲ್ಲೆಗೆ ತೆರಳಲಿದ್ದಾರೆ. ಮರಳಿ ಸಂಜೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿ ಅದೇ ವಿಶೇಷ ವಿಮಾನ ಮೂಲಕ ದೆಹಲಿಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರಧಾನಿ ಕಚೇರಿಯಿಂದ ಜಿಲ್ಲಾಡಳಿತಕ್ಕೆ ಸಂದೇಶ ಬಂದಿದೆ. ಅದರ, ಬೆನ್ನಲ್ಲಿಯೇ ಪ್ರಾದೇಶಿಕ ಆಯುಕ್ತ ಕೃಷ್ಣಾ ಬಾಜಪೇಯಿ, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಪೊಲೀಸ್ ಆಯುಕ್ತ ಚೇತನ ಆರ್., ಎಸ್ಪಿ ಅಡ್ಡೂರು ಶ್ರೀನಿವಾಸಲು, ಹೆಚ್ಚುವರಿ ಡಿಸಿ ರಾಯಪ್ಪ ಹುಣಸಗಿ ಇನ್ನಿತರ ಹಿರಿಯ ಅಧಿಕಾರಿಗಳು ಸಮಾಲೋಚನೆ ನಡೆಸಿದರು.
ಪ್ರಧಾನಿಗಳು ಬರುವ ಸಮಯ ಮತ್ತು ತೆರಳುವ ಸಮಯ ಮೊದಲಾದವನ್ನು ಬುಧವಾರ ಸಂಜೆ ಹೊತ್ತಿಗೆ ಅಂತಿಮಗೊಳ್ಳಲಿದೆ. ಆರಂಭಿಕ ಮಾಹಿತಿಯಂತೆ ಅಂದು ಬೆಳಗ್ಗೆ ೧೧ ಗಂಟೆಗೆ ಕಲಬುರಗಿಗೆ ಆಗಮಿಸಬಹುದು ಎನ್ನಲಾಗಿದೆ.