

ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಅಧ್ಯಕ್ಷತೆಯಲ್ಲಿ ನ. 14ರಿಂದ 16ರವರೆಗೆ ಬೆಳಗಾವಿ ವಿಭಾಗದ ಜಿಲ್ಲೆಗಳ ಅಧ್ಯಯನ ಪ್ರವಾಸ ಕೈಗೊಳ್ಳಲಿದೆ ಎಂದು ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡ, ಗದಗ, ಬಾಗಲಕೋಟ, ವಿಜಯಪುರ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಸಮುದಾಯದವರ ಅಭಿವೃದ್ಧಿಗೆ ಹಮ್ಮಿಕೊಂಡಿರುವ ವಿವಿಧ ಯೋಜನೆಗಳ, ಕಾರ್ಯಕ್ರಮಗಳ ಪ್ರಗತಿ ಕುರಿತು ಆಯಾ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮಿತಿಯು ಪ್ರಗತಿ ಪರಿಶೀಲನೆ ನಡೆಸಲಿದೆ.
ನ. 14ರಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬೆಳಗ್ಗೆ 10.30ಕ್ಕೆ ಗದಗ ಹಾಗೂ ಮಧ್ಯಾಹ್ನ 2.30ಕ್ಕೆ ಧಾರವಾಡ ಜಿಲ್ಲೆ ಪ್ರಗತಿ ಪರಿಶೀಲನೆ ಸಭೆ, ನ. 15ರಂದು ಬಾಗಲಕೋಟ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬೆಳಗ್ಗೆ 10.30ಕ್ಕೆ ವಿಜಯಪುರ ಜಿಲ್ಲೆ ಮತ್ತು ಮಧ್ಯಾಹ್ನ 2.30 ಕ್ಕೆ ಬಾಗಲಕೋಟ ಜಿಲ್ಲೆಯ ಪ್ರಗತಿ ಪರಿಶೀಲನೆ ನಡೆಸಲಿದೆ. ನ. 16ರಂದು ಬೆಳಗಾವಿ ಸುವರ್ಣಸೌಧದಲ್ಲಿ ಬೆಳಗ್ಗೆ 10.30ಕ್ಕೆ ಮತ್ತು ಮಧ್ಯಾಹ್ನ 2.30ಕ್ಕೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.
ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು 3 ವರ್ಷಗಳಲ್ಲಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಸಮುದಾಯದವರ ಅಭಿವೃದ್ಧಿಗೆ ಅನುಷ್ಠಾನವಾಗಿರುವ ವಿವಿಧ ಯೋಜನೆಗಳ, ಕಾರ್ಯಕ್ರಮಗಳ ಪ್ರಗತಿ ವರದಿಯನ್ನು ಸಮಿತಿಗೆ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.