ಪಿ.ಎಂ.ವಿಶ್ವಕರ್ಮ ಯೋಜನೆ ಅಗತ್ಯ ಮಾಹಿತಿ ನೀಡಿ: ವೆಂಕಟ್ ರಾಜಾ

dc sabhe
Published on

ಮಡಿಕೇರಿ: ಪಿ.ಎಂ.ವಿಶ್ವಕರ್ಮ ಯೋಜನೆ ಅಗತ್ಯ ಮಾಹಿತಿ ಒದಗಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಮಿತಿ ಸದಸ್ಯರಿಗೆ ಕಾಲ ಕಾಲಕ್ಕೆ ಮಾಹಿತಿ ನೀಡಬೇಕು. ಸರ್ಕಾರದ ಕಾರ್ಯಕ್ರಮಗಳು ಅರ್ಹರಿಗೆ ತಲುಪುತ್ತಿವೆಯೇ ಎಂಬ ಬಗ್ಗೆ ತಿಳಿಸಬೇಕು. ಕೌಶಲ್ಯ ಅಭಿವೃದ್ದಿ ಯೋಜನೆಯಿಂದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ಕೌಶಲ್ಯ ತರಬೇತಿ ಪಡೆದಿರುವ ಬಗ್ಗೆ ಮಾಹಿತಿ ನೀಡುವಂತೆ ಹೇಳಿದರು.

ವಿಶ್ವಕರ್ಮ ಯೋಜನೆ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸದಸ್ಯ ನಾಗೇಶ್ ಕುಂದಲ್ಪಾಡಿ ಮಾತನಾಡಿ, ಪ್ರಧಾನಮಂತ್ರಿ ವಿಶ್ವಕರ್ಮ ಕಾರ್ಯಕ್ರಮದಡಿ ಇದುವರೆಗೆ ಜಿಲ್ಲೆಯ ೧೦೩ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಷ್ಟು ಮಂದಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಲಾಗಿದೆ. ಜೊತೆಗೆ ಪ್ರಮಾಣ ಪತ್ರ ವಿತರಿಸಲಾಗಿದೆ ಎಂಬ ಮಾಹಿತಿಯ ಪಟ್ಟಿ ಒದಗಿಸುವಂತೆ ತಿಳಿಸಿದರು.

ಈ ಕುರಿತು ಮಾಹಿತಿ ನೀಡಿದ ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಶಿವಲಿಂಗಯ್ಯ, ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ಟೈಲರ್, ಕಾರ್‌ಪೆಂಟರ್, ಬಾರ್ಬರ್ಸ್‌, ಲಾಂಡ್ರಿ ವರ್ಕರ್ಸ್‌, ಗಾರ್‌ಲೆಂಡ್ ಮೇಕರ್, ಡಾಲ್ ಆಂಡ್ ಟಾಯ್ ಮೇಕರ್, ಪೋಟರ್, ಗೋಲ್ಡ್‌ಸ್ಮಿತ್, ಮೆಟಲ್ ಸ್ಮಿತ್, ಬೋಟ್ ಮೇಕರ್, ಆರ್‌ಮೊರರ್, ಸ್ಟೋನ್ ಕಾರ್‌ವರ್, ಲಾಕ್‌ಸ್ಮಿತ್, ಕೊಬ್ಲರ್ ಮತ್ತಿತರ ಕಾರ್ಯಕ್ರಮದಡಿ ತರಬೇತಿ ನೀಡಲಾಗಿದೆ. ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ಜಿಲ್ಲೆಯಲ್ಲಿ ೨೦೭೫ ಅರ್ಜಿ ಸ್ವೀಕರಿಸಲಾಗಿದ್ದು, ಇದರಲ್ಲಿ ೬೭೬ ಅರ್ಜಿ ಅಂಗೀಕರಿಸಲಾಗಿದೆ. ೨ ಅರ್ಜಿಗಳು ತಿರಸ್ಕೃತಗೊಂಡಿದ್ದು, ೧೩೯೭ ಅರ್ಜಿಗಳು ಬಾಕಿ ಇವೆ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ೧೭೨೫ ಅರ್ಜಿ ಸ್ವೀಕರಿಸಲಾಗಿದ್ದು, ೪೩೮ ಅರ್ಜಿಗಳನ್ನು ಅಂಗೀಕರಿಸಲಾಗಿದೆ. ೧೨೮೬ ಅರ್ಜಿಗಳು ಬಾಕಿ ಇದ್ದು, ೧ ಅರ್ಜಿ ತಿರಸ್ಕೃತಗೊಂಡಿದೆ. ಹಾಗೆಯೇ ನಗರ/ಪಟ್ಟಣ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿ ೩೫೦ ಅರ್ಜಿಗಳು ಸ್ವೀಕೃತವಾಗಿದ್ದು, ೨೩೮ ಅರ್ಜಿ ಅಂಗೀಕರಿಸಲಾಗಿದೆ. ೧೧೧ ಅರ್ಜಿಗಳು ಬಾಕಿ ಇದ್ದು ೧ ಅರ್ಜಿ ತಿರಸ್ಕೃತಗೊಂಡಿದೆ ಎಂದು ಶಿವಲಿಂಗಯ್ಯ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ನಾಗೇಶ್ ಕುಂದಲ್ಪಾಡಿ, ತರಬೇತಿ ಪಡೆದವರು ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳುತ್ತಿದ್ದಾರೆಯೇ, ಸರ್ಕಾರದ ಕಾರ್ಯಕ್ರಮ ಉಪಯೋಗ ಆಗುತ್ತಿದೆಯೇ ಎಂಬ ಬಗ್ಗೆ ಮಾಹಿತಿ ಒದಗಿಸುವಂತಾಗಬೇಕು ಎಂದರು.

ಸಭೆಯಲ್ಲಿ ಕೌಶಲ್ಯ ಅಭಿವೃದ್ದಿ ಇಲಾಖೆಯ ಅಧಿಕಾರಿ ರೇಖಾ ಗಣಪತಿ, ಖಾದಿ ಗ್ರಾಮೋದ್ಯೋಗ ಮಂಡಳಿಯ ಅಧಿಕಾರಿ ಸುಧಾಮ, ಪಿಎಂ ವಿಶ್ವಕರ್ಮ ಕಾರ್ಯಕ್ರಮದ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸದಸ್ಯರಾದ ರಾಬಿನ್ ದೇವಯ್ಯ, ಎಂಎಸ್‌ಎಂಇ ವಿಭಾಗದ ಜಂಟಿ ನಿರ್ದೇಶಕ ದೇವರಾಜು, ಗ್ರಾಮೀಣ ಸ್ವ ಉದ್ಯೋಗ ತರಬೇತಿ ಕೇಂದ್ರದ ಅಧಿಕಾರಿ ಪ್ರಕಾಶ್ ಕುಮಾರ, ಕೈಗಾರಿಕಾ ಇಲಾಖೆಯ ಉಪ ನಿರ್ದೇಶಕ ಸಿ.ಎನ್.ರಘು, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಗಂಗಾಧರ್ ನಾಯಕ್, ರಾಜ್ಯ ಹಣಕಾಸು ಸಂಸ್ಥೆಯ ಅಧಿಕಾರಿ ಶಿವಣ್ಣ, ವಿಶೇಷ ಭೂಸ್ವಾಧೀನ ಅಧಿಕಾರಿ ಇತರರು ಇದ್ದರು.

ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ

ಕುಶಾಲನಗರದ ಕೂಡ್ಲೂರು ಕೈಗಾರಿಕಾ ಪ್ರದೇಶವನ್ನು ಮತ್ತಷ್ಟು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಭೆಯಲ್ಲಿ ಚರ್ಚಿಸಲಾಯಿತು. ಕೂಡ್ಲೂರು ಕೈಗಾರಿಕಾ ಪ್ರದೇಶದ ಸುತ್ತಮುತ್ತ ಸಮತಟ್ಟು ಜಾಗ ಬೇಕಿದೆ. ಆ ನಿಟ್ಟಿನಲ್ಲಿ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಜೊತೆ ಚರ್ಚಿಸಲಾಗಿದೆ ಎಂದು ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಶಿವಲಿಂಗಯ್ಯ ಹೇಳಿದರು.

ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕ ಜಿ.ಎಸ್.ಗುರುಸ್ವಾಮಿ ಮಾತನಾಡಿ, ಕುಶಾಲನಗರದ ಸುಂದರ ನಗರದಲ್ಲಿ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆಯಡಿ ಸಣ್ಣ ಮತ್ತು ಅತಿ ಸಣ್ಣ ಯೋಜನೆಯಡಿ ಸಿದ್ದ ಉಡುಪು ಉತ್ಪಾದನಾ ಘಟಕ ತೆರೆಯಲು ಉದ್ದೇಶಿಸಲಾಗಿದೆ. ಆ ನಿಟ್ಟಿನಲ್ಲಿ ಸಮಿತಿಯ ಅನುಮತಿ ಬೇಕಿದೆ. ಸುಮಾರು ೧೫೦ ಜನರಿಗೆ ಉದ್ಯೋಗ ಕಲ್ಪಿಸಬಹುದಾಗಿದೆ ಎಂದರು.

ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು, ಸ್ಥಳ ಪರಿಶೀಲಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net