

ಕಾರವಾರ: ಕೃಷಿಕರು ತಮ್ಮ ಉತ್ಪನ್ನಗಳನ್ನು ಸಂಸ್ಕರಿಸಿ, ಮೌಲ್ಯ ವರ್ಧನೆ ಮಾಡುವ ಮೂಲಕ ಹೆಚ್ಚಿನ ಪ್ರಮಾಣದ ಆರ್ಥಿಕ ಲಾಭ ಪಡೆಯಬಹುದು ಎಂದು ಜಿಪಂ ಸಿಇಒ ಡಾ.ದಿಲೀಶ್ ಶಶಿ ಹೇಳಿದರು.
ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಮಂಗಳವಾರ ಕೃಷಿ ಇಲಾಖೆ, ಒಪೆಕ್ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಗಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯ ಕುರಿತ ಜಿಲ್ಲಾ ಮಟ್ಟದ ಅರಿವು ಮೂಡಿಸುವ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಉತ್ಪನ್ನಗಳ ಸಂಸ್ಕೃರಣೆ, ಮೌಲ್ಯವರ್ಧನೆಗೆ ಅಗತ್ಯವಿರುವ ಎಲ್ಲ ರೀತಿಯ ಮಾಹಿತಿ, ನೆರವು ಮತ್ತು ತರಬೇತಿಯನ್ನು ಕೃಷಿ ಇಲಾಖೆಯ ಮೂಲಕ ನೀಡಲಾಗುತ್ತಿದೆ. ಜಿಲ್ಲೆಯ ರೈತರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಕೃಷಿಕರು ತಮ್ಮ ಉತ್ಪನ್ನಗಳನ್ನು ಸೂಕ್ತ ರೀತಿಯಲ್ಲಿ ಮೌಲ್ಯವರ್ಧನೆ ಮಾಡುವ ವಿಧಾನಗಳನ್ನು ತಿಳಿಯದೇ ಇರುವ ಕಾರಣ ನಷ್ಠ ಅನುಭವಿಸುತ್ತಿದ್ದಾರೆ. ಪಶ್ಚಿಮಘಟ್ಟ ಪ್ರದೇಶವನ್ನು ಹೊಂದಿರುವ ನಮ್ಮ ಜಿಲ್ಲೆಯಲ್ಲಿ ಬೆಳೆಯುವ ಹಲವು ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ವಿಶೇಷ ಬೇಡಿಕೆ ಇದೆ. ಆಹಾರ ಸಂಸ್ಕರಣಾ ಘಟಕ ಸ್ಥಾಪಿಸಲು ಆರ್ಥಿಕ ನೆರವು ಕೂಡ ಸಿಗುತ್ತದೆ. ಮತ್ತು ಸಂಸ್ಕರಿಸಿದ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಸೌಲಭ್ಯ ಒದಗಿಸಲು ಕೃಷಿ ಇಲಾಖೆಯ ಅಧಿಕಾರಿಗಳು ಸಂಪೂರ್ಣ ಸಹಕಾರ ನೀಡಲಿದ್ದಾರೆ ಎಂದರು.
ಜಿಲ್ಲೆಯಲ್ಲಿನ ಕಿರು ಆಹಾರ ಸಂಸ್ಕರಣಾ ಘಟಕಗಳನ್ನು ಆರಂಭಿಸಲು ಆರ್ಥಿಕ ನೆರವು ಕೋರಿ ಬ್ಯಾಂಕ್‌ಗಳಿಗೆ ಅರ್ಜಿ ಸಲ್ಲಿಸುವ ರೈತರ ಅರ್ಜಿಗಳನ್ನು, ಸಣ್ಣಪುಟ್ಟ ಕಾರಣಗಳಿಗೆ ತಿರಸ್ಕೃರಿಸದಂತೆ ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು.
ಕೆಪೆಕ್ ಸಂಸ್ಥೆಯ ಎಡಿಎಂ ಚಂದ್ರಕುಮಾರ ಪ್ರಸ್ತಾವಿಕವಾಗಿ ಮಾತನಾಡಿ, ಪಿಎಂಎಫ್‌ಎಇ ಯೋಜನೆಯು ಕಿರು ಆಹಾರ ಸಂಸ್ಕರಣಾ ಘಟಕಗಳಿಗೆ ಹಣಕಾಸು, ತಾಂತ್ರಿಕ ಮತ್ತು ವ್ಯವಹಾರ ಬೆಂಬಲ ಸಂಸ್ಕರಣೆ ಮತ್ತು ರಫ್ತು, ಆಮದು ಮಾಡಲು ಸಹಕಾರ, ರೈತರು ಉತ್ಪಾದಿಸಿದ ಪದಾರ್ಥಗಳಿಗೆ ಉತ್ತಮ ಮೌಲ್ಯವನ್ನು ಒದಗಿಸುವುದು, ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಸೃಷ್ಟಿ, ಸಣ್ಣ ಪ್ರಮಾಣದ ಉದ್ಯಮ ಪ್ರಾರಂಭಿಸಲು ಅವಕಾಶ ಕಲ್ಪಿಸಲಾಗಿದೆ. ಈ ಯೋಜನೆಯು ವಿಶ್ವಾಸರ್ಹ ಯೋಜನೆಯಾಗಿದ್ದು, ಶೇ.50 ರಷ್ಟು ಸಹಾಯಧನ ನೀಡಲಾಗುತ್ತದೆ ಎಂದು ವಿವರಿಸಿದರು.
ಕಾರ್ಯಕ್ರಮದಲ್ಲಿ ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ. ಮೋಹನ್ ಕುಮಾರ್ , ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಡಾ. ಸತೀಶ್ ಬಿ.ಪಿ. , ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಪ್ರತೀಕ್, ನಬಾರ್ಡ್ನ ಡಿಡಿಎಂ ಸುಶೀಲ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ರಾಜಪ್ಪ ಗೌಳಿ ಇದ್ದರು. ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಶಿವಪ್ರಸಾದ ಗಾವಂಕರ ಸ್ವಾಗತಿಸಿದರು. ನಟರಾಜ್ ವಂದಿಸಿದರು.