

ಮಂಗಳೂರು: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೋಕ್ಸೋ) ಹಾಗೂ ಎಫ್‌ಟಿಎಸ್‌ಸಿ-1 ನ್ಯಾಯಾಲಯದ ನ್ಯಾಯಾಧೀಶರಾದ ಮಂಜುಳಾ ಇಟ್ಟಿ ಅವರು 3 ವರ್ಷ ಜೈಲು, 2 ಸಾವಿರ ರೂ. ದಂಡ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಮೂಡುಬಿದಿರೆಯ ಆನಂದ ಶಿಕ್ಷೆಗೊಳಗಾದವನು. ಈತ 2021ರ ಫೆ.12ರಂದು ರಾತ್ರಿ 8.30ಕ್ಕೆ ನೆರೆಮನೆಯ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಬಗ್ಗೆ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಪೊಲೀಸ್ ನಿರೀಕ್ಷಕಿ ರೋಸಮ್ಮ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ನ್ಯಾಯಾಧೀಶರು ಆರೋಪಿಗೆ ಪೊಕ್ಸೋ ಕಾಯಿದೆಯ ಕಲಂ 8ರಂತೆ 3 ವರ್ಷ ಸಾದಾ ಸಜೆ ಮತ್ತು 1,000 ರೂ. ದಂಡ, ಕಲಂ 354ರಡಿ 1 ವರ್ಷ ಸಾದಾ ಸಜೆ ಮತ್ತು 1,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಅಲ್ಲದೆ ನೊಂದ ಬಾಲಕಿಗೆ ಪರಿಹಾರ ನೀಡುವಂತೆಯೂ ಆದೇಶಿಸಿದ್ದಾರೆ. ಸರ್ಕಾರಿ ಅಭಿಯೋಜಕಿ ಸಹನಾದೇವಿ ಪ್ರಾಸಿಕ್ಯೂಷನ್ ಪರವಾಗಿ ವಾದಿಸಿದ್ದರು.