

ಚನ್ನಪಟ್ಟಣ
ನಮೋ ಬ್ರಿಗೇಡ್ ವತಿಯಿಂದ ಸೆ.28 ರ ಗುರುವಾರ ನಗರದಲ್ಲಿ ಹಮ್ಮಿಕೊಂಡಿದ್ದ ಬೈಕ್ ರ್ಯಾಲಿ ಹಾಗೂ ವೇದಿಕೆ ಸಭೆಗೆ ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದೆ.
ನಮೋ ಬ್ರಿಗೇಡ್ ವತಿಯಿಂದ ಸದೃಢ- ಸಮೃದ್ಧ ಭಾರತಕ್ಕಾಗಿ ಮತ್ತೊಮ್ಮೆ ಮೋದಿ ಎಂಬ ಘೋಷವಾಕ್ಯದೊಂದಿಗೆ ನಗರದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ತಾಲೂಕಿನ ಇತಿಹಾಸ ಪ್ರಸಿದ್ಧ ಕೆಂಗಲ್ ಆಂಜನೇಯಸ್ವಾಮಿ ದೇವಾಲಯದಿಂದ ಬೈಕ್ ರ್ಯಾಲಿ ಆರಂಭಗೊಳಿಸಿ, ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ರ್ಯಾಲಿ ಮಾಡಲು ಉದ್ದೇಶಿಲಾಗಿತ್ತು.
ಇದರೊಂದಿಗೆ, ನಗರದ ಸಾರ್ವಜನಿಕ ವಿದ್ಯಾಸಂಸ್ಥೆಯ ಆವರಣದಲ್ಲಿ ಚಿಂತನಾ ಸಭೆ ಸಹ ಹಮ್ಮಿಕೊಳ್ಳಲಾಗಿತ್ತು. ಬ್ರಿಗೇಡ್ ನ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಈಗಾಗಲೇ ಸಕಲ ಸಿದ್ದತೆಯನ್ನು ಸಹ ಕೈಗೊಳ್ಳಲಾಗಿತ್ತು. ಆದರೆ, ಈ ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದ್ದು, ಕಾರ್ಯಕ್ರಮದ ಮೇಲೆ ಕಾರ್ಮೊಡ ಕವಿದಿದೆ.
ನಮೋ ಬ್ರಿಗೇಡ್ ವತಿಯಿಂದ ನಡೆಯುವ ಕಾರ್ಯಕ್ರಮದ ದಿನದಂದು ನಗರ ಠಾಣಾ ವ್ಯಾಪ್ತಿಯಲ್ಲಿ ೧೩ ಗಣೇಶಮೂರ್ತಿ ವಿಸರ್ಜನೆ ಕಾರ್ಯಕ್ರಮವಿದ್ದು ಜೊತೆಗೆ, ಠಾಣಾ ವ್ಯಾಪ್ತಿಯ ಮೂರು ಕಡೆ ಈದ್ ಮಿಲಾದ್ ಮೆರವಣಿಗೆ ನಡೆಯುವ ಕಾರಣದಿಂದ, ಈ ಎಲ್ಲಾ ಕಾರ್ಯಕ್ರಮಗಳಿಗೆ ಈಗಾಗಲೇ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.
ಈ ಕಾರಣದಿಂದ ಕಾರ್ಯಕ್ರಮ ನಡೆಸಲು ಜಿಲ್ಲಾಧಿಕಾರಿಗಳ ಅನುಮತಿ ಪಡೆದು ನಡೆಸಲು ಸೂಚಿಸಿದೆ. ಠಾಣಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ತಾವು ಕೋರಿರುವ ಮನವಿಯನ್ನು ಪುರಸ್ಕರಿಸಲಾಗಿರುವುದಿಲ್ಲ ಎಂದು ಪುರ ಪೊಲೀಸ್ ಠಾಣೆ ವತಿಯಿಂದ ಕಾರ್ಯಕ್ರಮ ಆಯೋಜಕರಿಗೆ ನೋಟೀಸ್ ನೀಡಲಾಗಿದೆ.