

ಬೆಳ್ಳಾರೆ: ದಕ್ಷಿಣಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು, ಜಿಲ್ಲಾಧಿಕಾರಿ, ಎಸ್ಪಿ, ತಹಸೀಲ್ದಾರ್ ಬೆಳ್ಳಾರೆ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದು, ಪರಿಶೀಲನೆ ಕೈಗೊಂಡಿದ್ದಾರೆ.
ಬೆಳ್ಳಾರೆ ನಗರ ಠಾಣೆಗೆ ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್, ಐಜಿಪಿ ದೇವಜ್ಯೋತಿ ರೇ, ಎಸ್ಪಿ ಸೋನವಾಲೆ, ಹೆಚ್ಚುವರಿ ಎಸ್ಪಿ ಕುಮಾರಚಂದ್ರ ಮತ್ತು ದಕ್ಷಿಣಕನ್ನಡ ಜಿಲ್ಲಾಧಿಕಾರಿ, ತಹಸೀಲ್ದಾರ್ ಅವರು ಭೇಟಿ ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ. ಕೊಲೆಗೆ ಮೂರು ಕಾರಣ ಇರುವ ಶಂಕೆ ಇದೆ. ಇದುವರೆಗೆ 15 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ವಶಕ್ಕೆ ಪಡೆದಿರುವವರು ಯಾವ ಭಾಗದವರು ಎಂಬುದನ್ನು ತಿಳಿಸಲು ಸಾಧ್ಯವಿಲ್ಲ. ಆದರೆ ಇನ್ನೂ ಯಾರನ್ನೂ ಬಂಧಿಸಿಲ್ಲ, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಅಲೋಕ್ ಕುಮಾರ್ ತಿಳಿಸಿದ್ದಾರೆ.