

ಶಿವಮೊಗ್ಗ: ಶಿವಮೊಗ್ಗವು ರಾಜ್ಯ ರಾಜಕಾರಣದ ಶಕ್ತಿ ಕೇಂದ್ರವಾದರೂ ಅಭಿವೃದ್ಧಿ ವಿಚಾರದಲ್ಲಿ ಯಾರೊಬ್ಬರೂ ರಾಜಕೀಯ ಮಾಡಿಲ್ಲ. ಮುಂದಿನ ಐದು ವರ್ಷಗಳಲ್ಲಿ ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳನ್ನು ಸಾರ್ವಜನಿಕರ ನಿರೀಕ್ಷೆಯಂತೆ ಕಾರ್ಯರೂಪಕ್ಕೆ ತರಲಾಗುವುದು ಎಂದು ಶಿವಮೊಗ್ಗ ಶಾಸಕ ಎಸ್.ಎನ್.ಚನ್ನಬಸಪ್ಪ ಭರವಸೆ ನೀಡಿದರು.
ನಗರದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಸಂಯೋಜಿತ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸ ಎಲ್ಲ ಶಾಸಕರಿಂದಲೂ ನಿರಂತರವಾಗಿ ಮುಂದುವರಿಯುತ್ತದೆ. ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ ಎಲ್ಲ ಶಾಸಕರು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದರು.
ಪ್ರತಿ ತಾಲೂಕಿನಲ್ಲೂ ನಾನಾ ಬಗೆಯ ಸಮಸ್ಯೆಗಳಿದ್ದು ಎಲ್ಲ ಶಾಸಕರು ಪರಸ್ಪರ ಒಟ್ಟಾಗಿ ಬೆಂಬಲಿಸಿ ರಾಜ್ಯಮಟ್ಟದಲ್ಲಿ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಗಮನ ಹರಿಸುತ್ತೇವೆ. ಜಿಲ್ಲೆಯ ಅವಶ್ಯಕತೆ ಹಾಗೂ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸರ್ಕಾರದ ಹಂತದಲ್ಲಿ ಸಕಲ ಪ್ರಯತ್ನ ಮಾಡುತ್ತೇವೆ ಎಂದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಮಾತನಾಡಿ, ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನೇಕ ನಾಯಕರು ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಎಲ್ಲ ಶಾಸಕರು ಜಿಲ್ಲೆಯ ಸಮಗ್ರ ದೃಷ್ಟಿಕೋನ ಗಮನದಲ್ಲಿಕೊಂಡು ಕೆಲಸ ಮಾಡುವುದರಿಂದ ಅಭಿವೃದ್ಧಿ ವೇಗ ಪಡೆದುಕೊಳ್ಳುತ್ತದೆ ಎಂದರು.
ಸಂಘದ ಉಪಾಧ್ಯಕ್ಷ ಬಿ.ಗೋಪಿನಾಥ್, ಕಾರ್ಯದರ್ಶಿ ವಸಂತ ಹೋಬಳಿದಾರ್, ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ಮಾಜಿ ಅಧ್ಯಕ್ಷ ಡಿ.ಎಂ.ಶಂಕರಪ್ಪ, ಟಿ.ಆರ್.ಅಶ್ವತ್ಥ ನಾರಾಯಣಶೆಟ್ಟಿ, ಜೆ.ಆರ್.ವಾಸುದೇವ, ರಮೇಶ್ ಹೆಗಡೆ, ಬಿ.ಆರ್.ಸಂತೋಷ್, ಗಣೇಶ್ ಎಂ.ಅಂಗಡಿ, ಪ್ರದೀಪ್ ಯಲಿ, ಮಧುಸೂದನ್ ಐತಾಳ್, ಉದಯ್‌ಕುಮಾರ್, ಮರಿಸ್ವಾಮಿ, ಇ.ಪರಮೇಶ್ವರ್, ಸುಕುಮಾರ್, ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಆರ್.ರಂಗಪ್ಪ ಇತರರಿದ್ದರು.