

ವಿಜಯಪುರ: ಜಿಲ್ಲೆಯ ತಾಲೂಕು, ಹೋಬಳಿ ಹಾಗೂ ಮತ್ತಿತರ ಪ್ರದೇಶಗಳಲ್ಲಿರುವ ಮತಗಟ್ಟೆಗಳಿಗೆ ಶುಕ್ರವಾರ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ್ ಅಲ್ಲಿನ ಸ್ಥಿತಿಗತಿ ಪರಿಶೀಲಿಸಿದರು. ಬಳಿಕ ಮತಗಟ್ಟೆಗಳಿಗೆ ಮೂಲ ಸೌಕರ್ಯ ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಇಂಡಿ ತಾಲೂಕಿನ ಹೊರ್ತಿ ಕನ್ನಡ ಗಂಡು ಮಕ್ಕಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಅವರು, ಮಕ್ಕಳ ಹಾಜರಾತಿ ಮತ್ತು ನಿರ್ಮಾಣ ಹಂತದ ಕಟ್ಟಡ ಪರಿಶೀಲನೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಿದರು.
ನಂತರ ಉರ್ದು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಮಕ್ಕಳ ಹಾಜರಾತಿ, ಮೂಲ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದರು.
ಇಂಡಿ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 178 ರಿಂದ 184 ರವರೆಗೆ ಮತಗಟ್ಟೆಗಳಿಗೆ ಭೇಟಿ ನೀಡಿದ ಅವರು, ಮತಗಟ್ಟೆಗಳಲ್ಲಿರುವ ಮೂಲಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು. ಬಿಎಲ್‌ಓಗಳಿಗೆ ವಿಶೇಷ ಅಭಿಯಾನ ಬಗ್ಗೆ ತಿಳಿವಳಿಕೆ ಮೂಡಿಸಿ, ಬಿಎಲ್‌ಓ ತಂತ್ರಾಂಶ ಪ್ರಗತಿ ಪರಿಶೀಲನೆ ನಡೆಸಿ, ನಮೂನೆ 6,7 ಹಾಗೂ 8ರ ಕುರಿತು ಮಾಹಿತಿ ಪಡೆದುಕೊಂಡರು.
ಹೊರ್ತಿ ಗ್ರಾಮದ ಅಂಗನವಾಡಿ, ಗ್ರಾಮ ಪಂಚಾಯತ್ ಕಚೇರಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ರೋಗಿಗಳಿಗೆ ನೀಡುತ್ತಿರುವ ವೈದ್ಯೋಪಚಾರ ಕುರಿತು ಮಾಹಿತಿ ಪಡೆದುಕೊಂಡು, ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ವೈದ್ಯೋಪಚಾರ ನಡೆಸಬೇಕು. ಯಾವುದೇ ಲೋಪವಾಗದಂತೆ ಕಾರ್ಯನಿರ್ವಹಿಸುವಂತೆ ಸಂಬಂಧಿಸಿದವರಿಗೆ ಸೂಚನೆ ನೀಡಿದರು.
ಹಳಗುಣಕಿಯ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತಿರುವ ಸೌಕರ್ಯಗಳ ಕುರಿತು ವಿದ್ಯಾರ್ಥಿಗಳಿಂದ ಮಾಹಿತಿ ಪಡೆದುಕೊಂಡರು. ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ, ವಸತಿ ಶಾಲೆಯಲ್ಲಿರುವ ಪ್ರಯೋಗಾಲಯ ವೀಕ್ಷಣೆ ನಡೆಸಿದ ಅವರು, ವಸತಿ ಶಾಲೆಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಶಾಲೆಯ ಆವರಣದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಗಿಡ-ಮರಗಳನ್ನು ಬೆಳೆಸುವ ಮೂಲಕ ಉತ್ತಮ ವಾತಾವರಣ ನಿರ್ಮಿಸಿಕೊಡುವ ಮೂಲಕ ವಿದ್ಯಾರ್ಥಿಗಳ ಉತ್ತಮ ಫಲಿತಾಂಶಕ್ಕೆ ಪ್ರೇರೆಪಿಸಬೇಕು ಎಂದು ಹೇಳಿದರು.
ಇಂಡಿ ತಹಸೀಲ್ದಾರ್ ವಿಜಯಕುಮಾರ ಕಡಕಬಾವಿ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಬಿ.ಜೆ. ಇಂಡಿ, ಚಡಚಣ ಕ್ಷೇತ್ರ ಶಿಕ್ಷಾಣಾಧಿಕಾರಿ ನಾಯಕ, ಇಂಡಿ ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಎಸ್. ಆಲಗೂರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗೀತಾ ಗುತ್ತರಗಿಮಠ, ಜಿಪಂ ಯೋಜನಾ ವಿಭಾಗದ ಅಧಿಕಾರಿ ಎ.ಬಿ. ಅಲ್ಲಾಪೂರ ಮತ್ತಿತರರಿದ್ದರು.