ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣ ಮಹೋತ್ಸವ ಆಚರಣೆ ಪೂರ್ವಭಾವಿ ಸಭೆ

IMG20251009202130.jpg
Published on

ಧಾರವಾಡ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು 50 ವರ್ಷ ಪೂರೈಸಿದ್ದು, ಮಂಡಳಿಯ ಸುವರ್ಣ ಮಹೋತ್ಸವವನ್ನು ಸಾರ್ವಜನಿಕ ಜಾಗೃತಿ ಹಾಗೂ ವಿವಿಧ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣವಾಗಿ ನ.3ರಂದು ಆಚರಿಸಲು ನಿರ್ಧರಿಸಲಾಗಿದೆ. ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಪ್ರಭಾರ ಜಿಲ್ಲಾಧಿಕಾರಿಯೂ ಆಗಿರುವ ಜಿಪಂ ಸಿಇಒ ಭುವನೇಶ ಪಾಟೀಲ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಮಂಡಳಿಯ ಸುವರ್ಣ ಮಹೋತ್ಸವ ಸಮಾರಂಭ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾರ್ಯಕ್ರಮದ ಮೂಲಕ ಮಂಡಳಿಯ ಕಾರ್ಯ ಚಟುವಟಿಕೆಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದು, ಪರಿಸರ ಸಂರಕ್ಷಣಾ ಕಾನೂನುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಬಗ್ಗೆ ತಿಳಿವಳಿಕೆ ಮೂಡಿಸಬೇಕು. ಈ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲಾಗುತ್ತದೆ ಎಂದರು.

ಜಿಲ್ಲಾಮಟ್ಟದ ಕಾರ್ಯಕ್ರಮವನ್ನು ಹುಬ್ಬಳ್ಳಿಯ ನೆಹರು ಕ್ರೀಡಾಂಗಣದಲ್ಲಿ ನ.3ರಂದು ಮಧ್ಯಾಹ್ನ 2 ಗಂಟೆಗೆ ಆಯೋಜಿಸಲು ನಿರ್ಧರಿಸಲಾಗಿದೆ. ಇದರೊಂದಿಗೆ ಪ್ರತಿ ತಾಲೂಕು ಮಟ್ಟದಲ್ಲಿ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಆಯೋಜಿಸಬೇಕು. ಮಾಲಿನ್ಯ ಮಂಡಳಿಯ ಅಧಿಕಾರಿಗಳು ತಾಲೂಕು ಆಡಳಿತದೊಂದಿಗೆ ಸಮನ್ವಯ ಸಾಧಿಸಿ, ಅಚ್ಚುಕಟ್ಟಾಗಿ ಕಾರ್ಯಕ್ರಮ ಸಿದ್ಧಪಡಿಸಿಕೊಳ್ಳಬೇಕು ಎಂದು ಸೂಚಿಸಿದರು.

ಘನ ತ್ಯಾಜ್ಯ ನಿರ್ವಹಣೆ, ಜಲ ಮಾಲಿನ್ಯ, ಇ-ತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸ, ವಿವಿಧ ಸ್ಪರ್ಧೆ, ಬೀದಿ ನಾಟಕ, ಮಕ್ಕಳ ಭಾಷಣ ಆಯೋಜಿಸಲು ಕ್ರಮ ವಹಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೈಗಾರಿಕೋದ್ಯಮಿಗಳು, ಪರಿಸರವಾದಿಗಳು, ವಿದ್ಯಾರ್ಥಿಗಳು, ಜನ ಪ್ರತಿನಿಧಿಗಳು, ಸರ್ಕಾರಿ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಸಂಘ-ಸಂಸ್ಥೆಗಳು ಹಾಗೂ ಇತರೆ ಭಾಗಿದಾರರ ಸಹಭಾಗಿತ್ವದಲ್ಲಿ ಜಿಲ್ಲೆಯಾದ್ಯಂತ ವಿವಿಧ ಜಾಗೃತಿ ಕಾರ್ಯಕ್ರಮದ ಮೂಲಕ ಆಚರಿಸಲಾಗುತ್ತದೆ ಎಂದರು.

ಹಿರಿಯ ಪರಿಸರ ಅಧಿಕಾರಿ ಜಗದೀಶ ಐ.ಎಚ್. ಸ್ವಾಗತಿಸಿ, ಸಭೆ ನಿರ್ವಹಿಸಿದರು. ಸಭೆಯಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಕಾಣಕೋಣಕರ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಹೋನಕೇರಿ, ಸಹಾಯಕ ಅರಣ್ಯಾಧಿಕಾರಿ ಪರಿಮಳ, ಡಿಡಿಪಿಯು ತೇಜಸ್ವಿನಿ ನಾರಾಯಣಕರ, ಶಾಲಾ ಶಿಕ್ಷಣ ಇಲಾಖೆ ಅಧಿಕಾರಿ ಡಾ.ರೇಣುಕಾ ಅಮಲಜೇರಿ, ಪರಿಸರ ನಾಗರಿಕ ಸಮಿತಿ ಅಧ್ಯಕ್ಷ ಶಂಕರ ಕುಂಬಿ, ಎಲ್.ಆರ್.ನಾಯಕ, ತಾಪಂ ಕಾರ್ಯ ನಿರ್ವಾಹಕ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net