ಅಜ್ಞಾನದಿಂದ ಜನಸಂಖ್ಯೆ ಹೆಚ್ಚಳ: ನ್ಯಾ.ಶರ್ಮಿಳಾ

udp-11-Population Day
Published on

ಉಡುಪಿ: ದೇಶದಲ್ಲಿ ಜನಸಂಖ್ಯಾ ಹೆಚ್ಚಳ ಸಮಸ್ಯೆಗೆ ಬಡತನ, ಅಜ್ಞಾನ ಮತ್ತು ಮೂಢನಂಬಿಕೆ ಮುಖ್ಯ ಕಾರಣ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಹೇಳಿದರು.

ಮಂಗಳವಾರ ನಗರದ ವೈಕುಂಠ ಬಾಳಿಗಾ ಕಾನೂನು ಮಹಾ ವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಟುಂಬ ಕಲ್ಯಾಣ ವಿಭಾಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವೈಕುಂಠ ಬಾಳಿಗಾ ಕಾನೂನು ಮಹಾ ವಿದ್ಯಾಲಯ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಪ್ರಸ್ತುತ ಮುಂದುವರಿದ ದೇಶಗಳಲ್ಲಿ ಜನಸಂಖ್ಯೆ ಹೆಚ್ಚಳವು ಬಹುದೊಡ್ಡ ಸಮಸ್ಯೆಯಾಗಿದ್ದು, ಇದರಿಂದಾಗಿ ಹಲವು ಆರ್ಥಿಕ, ಸಾಮಾಜಿಕ ಸಮಸ್ಯೆಗಳು ಉದ್ಭವವಾಗಿವೆ. ಜನಸಂಖ್ಯಾ ಹೆಚ್ಚಳದಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವುದು ಹಾಗೂ ಕುಟುಂಬ ನಿಯಂತ್ರಣ ಕ್ರಮಗಳನ್ನು ಅನುಸರಿಸುವುದು ಅತೀ ಅಗತ್ಯ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಾಗಭೂಷಣ ಉಡುಪ ಪ್ರಾಸ್ತಾವಿಕವಾಗಿ ಮಾತನಾಡಿ, ಕುಟುಂಬದ ನಿರ್ವಹಣೆ ಹಾಗೂ ಅಭಿವೃದ್ಧಿಯಲ್ಲಿ ಜನಸಂಖ್ಯೆ ಬಹಳ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಶಿಕ್ಷಣದ ಕೊರತೆ, ಬಾಲ್ಯ ವಿವಾಹ, ಜನಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿದ್ದು, ಜನಸಂಖ್ಯಾ ಹೆಚ್ಚಳವು ನೇರವಾಗಿ ಪ್ರಕೃತಿ ಮೇಲೆ ಪರಿಣಾಮ ಬೀರಲಿದ್ದು, ಪ್ರಾಕೃತಿಕ ಅಸಮತೋಲನ ಉಂಟಾಗುವ ಸಾಧ್ಯತೆಗಳಿವೆ ಎಂದರು.

ಜನಸಂಖ್ಯಾ ದಿನಾಚರಣೆ ಕುರಿತ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮ್‌ರಾವ್ ಕೆ, ಪ್ರಭಾರ ತಾಲೂಕು ಆರೋಗ್ಯಾಧಿಕಾರಿ ಡಾ.ಅಂಜಲಿ ವಾಗ್ಲೆ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಎಚ್., ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ಪ್ರಾಂಶುಪಾಲ ಪ್ರೊ.ರಘುನಾಥ ಕೆ.ಎಸ್, ನಿರ್ದೇಶಕಿ ಡಾ.ನಿರ್ಮಲಾ ಕುಮಾರಿ ಉಪಸ್ಥಿತರಿದ್ದರು. ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ಸ್ವಾಗತಿಸಿ, ಹಿರಿಯ ತಾಲೂಕು ಆರೋಗ್ಯ ನಿರೀಕ್ಷಣಾ ಅಧಿಕಾರಿ ದೇವಪ್ಪ ಪಟಗಾರ್ ನಿರೂಪಿಸಿ, ಕಾಲೇಜಿನ ಉಪನ್ಯಾಸಕ ಡಾ.ನವೀನ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net