

ಚಿಕ್ಕಮಗಳೂರು: ಮಹಿಳೆಯರು ತಮ್ಮ ಜತೆಗೆ ಮಕ್ಕಳನ್ನು ಆರೋಗ್ಯವಂತರನ್ನಾಗಿಸುವ ಮೂಲಕ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಜಿಪಂ ಸಿಇಒ ಡಾ.ಗೋಪಾಲಕೃಷ್ಣ ಹೇಳಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಶನಿವಾರ ಜಿಲ್ಲಾಡಳಿತ. ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಯುಷ್ ಇಲಾಖೆ. ತೋಟಗಾರಿಕಾ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಇಲಾಖೆಯಿಂದ ಆಯೋಜಿಸಿದ್ದ ಪೋಷಣ್ ಮಾಸಾಚರಣೆ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಅಪೌಷ್ಟಿಕತೆ ನಿವಾರಿಸುವಲ್ಲಿ ಕೇಂದ್ರ ಸರ್ಕಾರ ಆಯೋಜಿಸಿರುವ ರಾಷ್ಟ್ರೀಯ ಪೋಷಣ್ ಅಭಿಯಾನ ಒಂದು ಮಹತ್ತರ ಕಾರ್ಯಕ್ರಮ. ಕಿಶೋರಿ ಬಾಲಕಿಯರಿಂದ ಹಿಡಿದು ಗರ್ಭಿಣಿಯರು ಸೇರಿದಂತೆ ಮಹಿಳೆಯರು ಮತ್ತು ಮಕ್ಕಳನ್ನು ಅಪೌಷ್ಟಿಕತೆಯಿಂದ ಮುಕ್ತಗೊಳಿಸುವ ಕಾರ್ಯಕ್ರಮ ಎಂದರು.
ಮಹಿಳೆಯರು ಪೋಷಣ್ ಅಭಿಯಾನದಡಿ ದೊರೆಯುವ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸದುಪಯೋಗಪಡಿಸಿಕೊಳ್ಳಬೇಕು. ಈ ಮೂಲಕ ತಮ್ಮ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದರು.
ಆರ್‌ಸಿಎಚ್ ಅಧಿಕಾರಿ ಡಾ. ಮಂಜುನಾಥ್ ಮಾತನಾಡಿ, ಸದೃಢವಾದ ಮತ್ತು ಆರೋಗ್ಯವಂತ ಸಮಾಜ ಕಟ್ಟಬೇಕಾದರೆ ಗರ್ಭಿಣಿಯರು, ಬಾಣಂತಿಯರು ಪೌಷ್ಟಿಕ ಆಹಾರ ಬಳಸುವ ಮೂಲಕ ತಮ್ಮ ಮತ್ತು ಮಕ್ಕಳ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.
ಪೋಷಣ್ ಮಾಸಾಚರಣೆ ಪ್ರಯುಕ್ತ ಮಹಿಳೆಯರು ತಯಾರಿಸಿದ ಪೌಷ್ಟಿಕ ಆಹಾರಗಳ ಪ್ರದರ್ಶನ. ಮಕ್ಕಳ ಛದ್ಮ ವೇಷ ಪ್ರದರ್ಶನ ನಡೆಯಿತು. ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಎಸ್.ರಾಜಾ ನಾಯಕ್, ಜಿಲ್ಲಾ ಆಯುಷ್ ಅಧಿಕಾರಿ ಗೀತಾ. ತಾಲೂಕು ವೈದ್ಯಾಧಿಕಾರಿ ಡಾ.ಸೀಮಾ, ಉಪ ಆರೋಗ್ಯ ಶಿಕ್ಷಣಾಧಿಕಾರಿ ಲಲಿತಾ ನಾಯಕ್, ಸಿಡಿಪಿಒ ಚರಣ್ ರಾಜ್, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಪೃಥ್ವಿಜಿತ್, ಸವಿತಾ, ಯಮುನಾ ಮತ್ತಿತರರಿದ್ದರು.