ಯೋಜನೆಗಳ ಸದ್ಬಳಕೆ ಆಗಬೇಕು

poster relese
Published on

 ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದವರ ಅಭಿವೃದ್ಧಿಗೆ ಸರ್ಕಾರ ವಿವಿಧ ಯೋಜನೆಗಳು ಜಾರಿಗೊಳಿಸಿದ್ದು, ಅರ್ಹರಿಗೆ ಯೋಜನೆಗಳ ಸೌಲಭ್ಯ ಸಿಗುವಂತೆ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಸೂಚಿಸಿದರು.

ದೇವನಹಳ್ಳಿ ತಾಲೂಕು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದಡಿ ಅರ್ಹ ಫಲಾನುಭವಿಗಳ ಆಯ್ಕೆ ಮಾಡುವ ಸಂಬಂಧ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿದರು, ಅಲೆಮಾರಿ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನಿಗಮದಿಂದ ಹಲವು ಯೋಜನೆಗಳು ಜಾರಿಯಾಗಿವೆ.ಇದರಲ್ಲಿ ಭೂ ಒಡೆತನ ಯೋಜನೆ, ನಿವೇಶನ ಹಾಗೂ ಮನೆ ಸೌಲಭ್ಯ, ಬ್ಯಾಂಕ್‌ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಸಮಗ್ರ ಗಂಗಾ ಕಲ್ಯಾಣ ಯೋಜನೆ ಕಾರ್ಯಕ್ರಮಗಳಿವೆ. ಇವುಗಳ ಬಗ್ಗೆ ಅಲೆಮಾರಿ ಸಮುದಾಯದ ಜನರಿಗೆ ಅರಿವು ಮೂಡಿಸಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಸಿಗುವಂತೆ ಕ್ರಮವಹಿಸಬೇಕು ಎಂದರು.

ಸೌಲಭ್ಯದ ಮಾಹಿತಿ ಪಡೆಯಬೇಕು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದಡಿ ಅನೇಕ ಯೋಜನೆಗಳು ಅನುಷ್ಟಾನಗೊಂಡಿದ್ದು ಗ್ರಾಮಾಂತರ ಜಿಲ್ಲೆಯಲ್ಲಿ ಈ ಬಗ್ಗೆ ವ್ಯಾಪಕ ಪ್ರಚಾರ ಕೈಗೊಳ್ಳಲಾಗುತ್ತಿದೆ. ಈ ಬಗ್ಗೆ ಲಾನುಭವಿಗಳು ಮಾಹಿತಿ ಪಡೆದು ಸೌಲಭ್ಯಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಟಿ.ಎಲ್.ಎಸ್. ಪ್ರೇಮಾ ತಿಳಿಸಿದರು

ಲಾಟರಿ ಮೂಲಕ ಆಯ್ಕೆ:

2023 ರಿಂದ 24 ನೇ ಸಾಲಿನ ವರೆಗೆ ನಿಗಮದ ವಿವಿಧ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಿದ್ಧ ಫಲಾನುಭವಿಗಳ ಆಯ್ಕೆಯನ್ನು ಲಾಟರಿ ಮೂಲಕ ಸಮಿತಿ ಸದಸ್ಯರ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು. ಇದೇ ವೇಳೆ ನಿಗಮದ ವಿವಿಧ ಯೋಜನೆಗಳ ಕುರಿತ ಪೋಸ್ಟರ್‌ನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾಡಳಿತದ ಸಿಬ್ಬಂದಿ ಬಿಡುಗಡೆಗೊಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net