ವಿಜಯಪುರ ಮಹಾನಗರ ಪಾಲಿಕೆ ಮೇಯರ್-ಉಪಮೇಯರ್ ಚುನಾವಣೆ ಮುಂದೂಡಿಕೆ

VIJAYAPUR MAHANAGARA PALIKE
ವಿಜಯಪುರ ಮಹಾನಗರ ಪಾಲಿಕೆ.
Published on

ವಿಜಯಪುರ: ತೀವ್ರ ಕುತೂಹಲ ಕೆರಳಿಸಿದ್ದ ಮಹಾನಗರ ಪಾಲಿಕೆ ಮೇಯರ್-ಉಪಮೇಯರ್ ಚುನಾವಣೆ ಮುಂದೂಡಲ್ಪಟ್ಟಿದ್ದು, ಕೌತುಕಕ್ಕೆ ಕೊಕ್ಕೆ ಬಿದ್ದಿದೆ.
ಹೌದು, ಇದೇ ಅ. 30 ರಂದು ನಿಗದಿಯಾಗಿದ್ದ ಮಹಾನಗರ ಪಾಲಿಕೆ ಮೇಯರ್-ಉಪಮೇಯರ್ ಚುನಾವಣೆ ಮುಂದೂಡಿದ್ದಾಗಿ ವಿಜಯಪುರ ಮಹಾನಗರ ಪಾಲಿಕೆ ಅಧ್ಯಕ್ಷಾಧಿಕಾರಿಗಳಾದ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಎಸ್.ಬಿ.ಶೆಟ್ಟೆಣವರ ತಿಳಿಸಿದ್ದಾರೆ.
ವಿಜಯಪುರ ಮಹಾನಗರ ಪಾಲಿಕೆಯ ಮಹಾಪೌರ ಹಾಗೂ ಉಪ ಮಹಾಪೌರ ಸ್ಥಾನಗಳ ಮೀಸಲಾತಿಯನ್ನು ಪ್ರಶ್ನಿಸಿ ಕಲಬುರಗಿ ಉಚ್ಛ ನ್ಯಾಯಾಲಯದಲ್ಲಿ ದಾಖಲಾದ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಅ.27ರಂದು ಪ್ರಕರಣದ ವಿಚಾರಣೆ ನಡೆಸಿದ ಉಚ್ಛ ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು ಅ. 30ರಂದು ಮುಂದೂಡಿದ ಹಿನ್ನೆಲೆಯಲ್ಲಿ ಪ್ರಕರಣ ಇತ್ಯರ್ಥವಾಗುವರೆಗೆ ಚುನಾವಣೆ ನಡೆಸಲು ಯಾವುದೇ ಕ್ರಮ ತೆಗೆದುಕೊಳ್ಳದಂತೆ ಕಲುಬುರಗಿ ಪೀಠದ ಹೆಚ್ಚುವರಿ ಅಡ್ವೋಕೆಟ್ ಜನರಲ್ ತಿಳಿಸಿರುವುದರಿಂದ ಮಹಾನಗರ ಪಾಲಿಕೆ ಚುನಾವಣೆ ಮುಂದೂಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಹೀಗಾಗಿ ತೀವ್ರ ಜಿದ್ದಾಜಿದ್ದಿಯಿಂದ ಕೂಡಿದ ಚುನಾವಣೆಗೆ ತಣ್ಣಿರು ಎರಚಿದಂತಾಗಿದೆ. ಈಗಾಗಲೇ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರು ಮೇಯರ್-ಉಪಮೇಯರ್ ಚುನಾವಣೆಗೆ ತೀವ್ರ ಕಸರತ್ತು ನಡೆಸಿದ್ದರು. ಆಗಲೇ ಪ್ರವಾಸಕ್ಕೂ ತೆರಳಿದ್ದರು. ಇದೀಗ ವಿಚಾರಣೆ ಮುಂದೂಡಿದ್ದರಿಂದ ಚುನಾವಣೆ ಪ್ರಕ್ರಿಯೆ ತಂಗಳಾದಂತಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net