

ರಾಯಚೂರು: ಶಾಖೋತ್ಪನ್ನ ಕೇಂದ್ರಗಳಲ್ಲಿ ಪೂರ್ಣ ಪ್ರಮಾಣದ ವಿದ್ಯುತ್ ಉತ್ಪಾದನೆಗೆ ಅಗತ್ಯ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ ನೀಡಿದರು.
ರಾಯಚೂರು ಬೃಹತ್ ಶಾಖೋತ್ಪನ್ನ ವಿದ್ಯುತ್ ಕೇಂದ್ರ ಮತ್ತು ಯರಮರಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳಿಗೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು. ನಂತರ ಅಧಿಕಾರಿಗಳ ಸಭೆ ನಡೆಸಿ ವಿದ್ಯುತ್ ಉತ್ಪಾದನಾ ಕೇಂದ್ರಗಳ ನಿರ್ವಹಣೆ, ಕಲ್ಲಿದ್ದಲು ಪೂರೈಕೆ, ನೀರಿನ ಲಭ್ಯತೆ ಬಗ್ಗೆ ಮಾಹಿತಿ ಪಡೆದುಕೊಂಡರು. ವಿದ್ಯುತ್ ಉತ್ಪಾದನಾ ಘಟಕಗಳನ್ನು ಸುಸ್ಥಿತಿಯಲ್ಲಿಡಲು ಸಮರ್ಪಕ ರೀತಿಯಲ್ಲಿ ನಿರ್ವಹಣೆ ಕಾರ್ಯ ನಡೆಸಬೇಕು. ಯಾವುದೇ ಕೊರತೆಯಿದ್ದಲ್ಲಿ ಗಮನಕ್ಕೆ ತರಬೇಕು ಎಂದು ಸೂಚಿಸಿದರು.
ಆರ್‌ಟಿಪಿಎಸ್‌ನ ಒಂದು ಮತ್ತು 2ನೇ ಘಟಕದಲ್ಲಿ ತಾಂತ್ರಿಕ ಸಮಸ್ಯೆಯಿಂದ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಲಾಗಿದ್ದು, ಶೀಘ್ರಗತಿಯಲ್ಲಿ ದುರಸ್ತಿ ಕಾರ್ಯ ಕೈಗೊಂಡು ವಿದ್ಯುತ್ ಉತ್ಪಾದನೆಗೆ ಘಟಕಗಳನ್ನು ಅಣಿಗೊಳಿಸಬೇಕು. ಕೇಂದ್ರಗಳಿಗೆ ಕಲ್ಲಿದ್ದಲು ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು. ಭೂ ಸಂತ್ರಸ್ತರಿಗೆ ಉದ್ಯೋಗ ನೀಡುವ ಕುರಿತು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಕೆ.ಜೆ.ಜಾರ್ಜ್ ಸೂಚನೆ ನೀಡಿದರು.
ವೈಟಿಪಿಎಸ್ ನಿರ್ವಹಣೆಯನ್ನು ಖಾಸಗಿ ಸಂಸ್ಥೆಗೆ ವಹಿಸಿರುವ ಬಗ್ಗೆ ಮಾಹಿತಿ ಪಡೆದುಕೊಂಡರು. ಶಾಸಕ ಬಸನಗೌಡ ತುರ್ವಿಹಾಳ, ಪ್ರಮುಖರಾದ ರವಿ ಬೋಸರಾಜು, ಮಲ್ಲಿಕಾರ್ಜುನ ಯದ್ದಲದಿನ್ನಿ, ನಾಗವೇಣಿ ಪಾಟೀಲ್ ಉಪಸ್ಥಿತರಿದ್ದರು.