

ಗದಗ: ಕಳೆದ ನಾಲ್ಕೈದು ದಿನಗಳಿಂದ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಗುತ್ತಿದ್ದು ಜಿಲ್ಲೆಯ ಪ್ರತಿ ಗ್ರಾಮಕ್ಕೂ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವಂತೆ ಸಚಿವ ಡಾ.ಎಚ್.ಕೆ.ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಹೆಸ್ಕಾಂ ಹಾಗೂ ಜಿಲ್ಲಾ ಮಟ್ಟದ ಪ್ರಮುಖ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗದಗ ಜಿಲ್ಲೆಯ ಗ್ರಾಮೀಣ ಹಾಗೂ ನಗರದ ಪ್ರದೇಶದ ವಾಸಿಗಳಿಗೆ ಸಮರ್ಪಕ ವಿದ್ಯುತ್ ಪೂರೈಸಲು ಆಯಾ ವ್ಯಾಪ್ತಿಯ ಹೆಸ್ಕಾಂ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಅಲ್ಲದೇ ರೈತರ ಬೆಳೆಗೆ ನೀರು ಪೂರೈಸಲು ನಿರಂತರ ಏಳು ಗಂಟೆ ಕಾಲ ವಿದ್ಯುತ್ ಪೂರೈಕೆ ಮಾಡಬೇಕು. ಈ ವಿದ್ಯುತ್ ಪೂರೈಕೆಯಲ್ಲಿ ವ್ಯತಯ ಕಂಡುಬಂದಲ್ಲಿ ತಕ್ಷಣ ಆಯಾ ವ್ಯಾಪ್ತಿಯ ಅಧಿಕಾರಿಗಳು ವಿಧ್ಯುತ ವ್ಯತ್ಯಯದ ಕುರಿತು ರೈತರಿಗೆ ಮಾಹಿತಿ ಒದಗಿಸಬೇಕು ಎಂದು ಹೇಳಿದರು.
ಮಳೆಯ ಕೊರತೆಯಿಂದಾಗಿ ರಾಜ್ಯದಲ್ಲಿ ಬರಗಾಲ ಘೋಷಣೆಯಾಗಿದೆ. ವಿದ್ಯುತ್ ಉತ್ಪಾದನೆಯಲ್ಲಿಯೂ ಸಹ ಕೊರತೆ ಎದುರಾಗಿದ್ದು ಸಮರ್ಪಕ ವಿದ್ಯುತ್ ಪೂರೈಕೆ ಮಾಡಲು ಸರ್ಕಾರದ ಹಂತದಲ್ಲಿ ಪ್ರಯತ್ನ ನಿರಂತರವಾಗಿ ನಡೆದಿದೆ. ಸಧ್ಯದಲ್ಲೇ ವಿದ್ಯುತ್ ಖರೀದಿಸಿ ಸಮರ್ಪಕ ವಿದ್ಯುತ್ ಪೂರೈಕೆ ಮಾಡಲಾಗವುದು ಈ ಪ್ರಕ್ರಿಯೆ ಕೈಗೊಳ್ಳಲು ಅಲ್ಪ ಸಮಯ ಅಗತ್ಯವಾಗಿದೆ. ಅಲ್ಲಿಯವರೆಗೂ ಸಾರ್ವಜನಿಕರು, ರೈತ ಸಮುದಾಯ ಸಹನೆಯಿಂದ ಇರುವಂತೆ ಅಧಿಕಾರಿಗಳು ಮನವರಿಕೆ ಮಾಡಿಕೊಡುವಂತೆ ತಿಳಿಸಿದರು.
ರೋಣ ಶಾಸಕರಾದ ಜಿ.ಎಸ್.ಪಾಟೀಲ ರೈತರ ಹೊಲಗಳಿಗೆ ಪದೇ ಪದೇ ವಿದ್ಯುತ್ ವ್ಯತವ್ಯಯವಾಗುತ್ತಿರುವ ಬಗ್ಗೆ ಮಾತನಾಡಿ ಈ ಹಿಂದೆ ದಿನದ ಇಪ್ಪತ್ತನಾಲ್ಕು ಗಂಟೆಯೂ ನಿರಂತರ ವಿದ್ಯುತ್ ಪೂರೈಕೆಯಾಗುತ್ತಿತ್ತು. ಸಧ್ಯ ವಿಧ್ಯುತ ವ್ಯತವ್ಯಯದಿಂದಾಗಿ ಸಾರ್ವಜನಿಕರು ಹಾಗೂ ರೈತರು ತೊಂದರೆಗೊಳಗಾಗಿದ್ದು ಕೂಡಲೇ ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಕೋರಿದರು. ಇದೇ ಸಂದರ್ಭದಲ್ಲಿ ರೋಣ ಕ್ಷೇತ್ರದಿಂದ ಆಗಮಿಸಿದ ರೈತರು ಸಭೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡುವ ಮೂಲಕ ರೈತರ ಬೆಳೆಗೆ ನೀರು ನೀಡಲು ಸಹಕರಿಸುವಂತೆ ಕೋರಿದರು. ಶಾಸಕ ಚಂದ್ರು ಲಮಾಣಿ ಅವರು ಮಾತನಾಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ, ಡಿ.ವಾಯ್.ಎಸ್ಪಿ. ಸಂಕದ, ಕೆ.ಪಿ.ಟಿ.ಸಿ.ಎಲ್ ಕಾರ್ಯಪಾಲಕ ಅಭಿಯಂತರ ರಮೇಶ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಹಾಜರಿದ್ದರು.