

ಬೆಂಗಳೂರು: ಬಹುಭಾಷಾ ನಟ, ನಿರ್ದೇಶಕ ಪ್ರಕಾಶ್ ರೈ ಅವರು ಕರ್ನಾಟಕ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ.
ಆಕಾಡೆಮಿಯು ಗುರುವಾರ 2022, 2023 ಹಾಗೂ 2024ನೇ ಸಾಲಿನ ವಿವಿಧ ಪ್ರಶಸ್ತಿಗಳನ್ನು ಪ್ರಕಟಿಸಿತ್ತು. ಅದರಲ್ಲಿ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿತ್ತು. ‘ನಾನು ಈಗಷ್ಟೇ ರಂಗಭೂಮಿಗೆ ಮರಳಿ ಬಂದಿದ್ದೇನೆ. ಮಾಡಬೇಕಾದ ಕೆಲಸ ಬೆಟ್ಟದಷ್ಟಿದೆ. ನನಗಿಂತಲೂ ಅರ್ಹರು ರಂಗಭೂಮಿಯಲ್ಲಿ ಇರುವುದರಿಂದ ಈ ಪುರಸ್ಕಾರವನ್ನು ಸ್ವೀಕರಿಸಲು ನನ್ನ ಮನಸಾಕ್ಷಿ ಒಪ್ಪುತ್ತಿಲ್ಲ’ ಎಂದು ಶುಕ್ರವಾರ ‘ಎಕ್ಸ್’ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಪ್ರಶಸ್ತಿ ಸ್ವೀಕರಿಸಲು ಪ್ರಕಾಶ್ ರೈ ಮತ್ತೊಮ್ಮೆ ಮನವೊಲಿಸಲಾಗುವುದು. ಅಷ್ಟಾಗಿಯೂ ಒಪ್ಪದಿದ್ದರೆ ಅರ್ಹ ಬೇರೆ ಕಲಾವಿದರನ್ನು ಆಯ್ಕೆ ಮಾಡಲಾಗುವುದು ಎಂದು ಅಕಾಡೆಮಿ ಅಧ್ಯಕ್ಷ ಕೆ.ವಿ. ನಾಗರಾಜಮೂರ್ತಿ ತಿಳಿಸಿದ್ದಾರೆ.