

ಉಡುಪಿ: ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕೆಪಿಸಿಸಿ ಅಧಕ್ಷ ಡಿ.ಕೆ. ಶಿವಕುಮಾರ್‌ಗೆ ಶುಕ್ರವಾರ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಬೆನ್ನಲ್ಲೆ ಶನಿವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.
ಕಳೆದ ಮೂರು ವರ್ಷದಲ್ಲಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯಲ್ಲಿ ತೀವ್ರ ಹಿನ್ನಡೆಯಾಗಿದ್ದು, ಉಸಿರುಗಟ್ಟುವ ವಾತಾವರಣದ ಬಗ್ಗೆ ಪಕ್ಷದ ಹಿರಿಯ ಮುಖಂಡರಿಗೆ ತಿಳಿಸಿದ್ದರೂ ಪ್ರಯೋಜನವಾಗಿಲ್ಲ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇಂಥ ಸ್ಥಿತಿಯಲ್ಲಿ ತನಗೆ ನೀಡಲಾಗಿರುವ ಕೆಪಿಸಿಸಿ ಉಪಾಧ್ಯಕ್ಷ ಸ್ಥಾನಕ್ಕೆ ನ್ಯಾಯ ಒದಗಿಸಲಾಗದು ಎಂದಿರುವ ಪ್ರಮೋದ್, ಈ ಹಿನ್ನೆಲೆಯಲ್ಲಿ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ವಿವರಿಸಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಇದುವರೆಗೆ ಕಾರ್ಯನಿರ್ವಹಿಸಲು ಅವಕಾಶ ಒದಗಿಸಿರುವುದಕ್ಕೆ ಧನ್ಯವಾದ ತಿಳಿಸಿದ್ದಾರೆ. ಇತ್ತೀಚೆಗೆ ಕೆಪಿಸಿಸಿ ರಾಜ್ಯ ಉಪಾಧ್ಯಕ್ಷರಾಗಿ ನೇಮಕ ಮಾಡಿರುವುದನ್ನು ಉಲ್ಲೇಖಿಸಿದ್ದು, ಆ ಬಗ್ಗೆ ಕೃತಜ್ಞತೆ ತಿಳಿಸಿದ್ದಾರೆ. ನಾನು ಕಾಂಗ್ರೆಸ್ ಪಕ್ಷದ ಅಭಿವೃದ್ಧಿಗಾಗಿ ತನ್ನ ಸ್ವಂತ ದುಡಿಮೆಯ ಹಣ ಮತ್ತು ಸಮಯವನ್ನು ವಿನಿಯೋಗಿಸಿದ್ದನ್ನು ವಿವರಿಸಿದ್ದು, ಪಕ್ಷವು ಈ ಶ್ರಮಕ್ಕಾಗಿ ತನಗೆ ವಿವಿಧ ಹುದ್ದೆಗಳನ್ನು ನೀಡಿದೆ. ಅಂತೆಯೇ ತನ್ನ ಕ್ಷೇತ್ರ ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದ್ದೇನೆ ಎಂದು ತಿಳಿಸಿದ್ದಾರೆ.
2016ರಿಂದ 2018ರವರೆಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರಮೋದ್ ಮಧ್ವರಾಜ್ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರಾಗಿದ್ದರು. 2018ರಲ್ಲಿ ವಿವಿಧ ಪತ್ರಿಕೆಗಳು ನಡೆಸಿದ ಸಮೀಕ್ಷೆಯಲ್ಲಿ ತಾನು ಅಭಿವೃದ್ಧಿ ವಿಚಾರದಲ್ಲಿ ನಂ. 1 ಶಾಸಕ ಎಂದು ಗುರುತಿಸಿದ್ದನ್ನು ಅಧ್ಯಕ್ಷರಿಗೆ ಬರೆದ ಪತ್ರದಲ್ಲಿ ನೆನಪಿಸಿದ್ದಾರೆ.
ರಾಜಕೀಯ ಕುಟುಂಬ ಹಿನ್ನೆಲೆಯ ಪ್ರಮೋದ್ ಮಧ್ವರಾಜ್ ಅವರ ತಂದೆ ಮಲ್ಪೆ ಮಧ್ವರಾಜ್ 1962ರಲ್ಲಿ ಕಾಂಗ್ರೆಸ್ ಪಕ್ಷದಿಂದ ಉಡುಪಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು. ತಾಯಿ ಮನೋರಮಾ ಆರಂಭದಲ್ಲಿ ಕಾಂಗ್ರೆಸ್‌ನಲ್ಲಿದ್ದು ಬಳಿಕ ಬಿಜೆಪಿ ಸೇರ್ಪಡೆಯಾಗಿ ಸಂಸದೆಯಾಗಿ ಚುನಾಯಿತರಾಗಿದ್ದರು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯ ಸರ್ಕಾರದ ಸಚಿವೆಯಾಗಿ ಕಾರ್ಯನಿರ್ವಹಿಸಿದ್ದರು.