

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಮುಗಿದಿದ್ದು, ಕೂಡಲೇ ರಸ್ತೆ, ಸೇತುವೆ, ತಡೆಗೋಡೆ, ಚರಂಡಿ ಮತ್ತಿತರ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಸಂಬಂಧಪಟ್ಟ ಎಂಜಿನಿಯರ್‌ಗಳಿಗೆ ಸಂಸದ ಪ್ರತಾಪ್ ಸಿಂಹ ಸೂಚಿಸಿದರು.
ನಗರದ ಜಿ.ಪಂ.ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಸ್ತೆ ಹದಗೆಟ್ಟಿರುವ ಬಗ್ಗೆ ಈಗಾಗಲೇ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿ ಬರುತ್ತಿದೆ. ಆದ್ದರಿಂದ ಕೂಡಲೇ ರಸ್ತೆ ಗುಂಡಿಮುಚ್ಚುವ ಕೆಲಸ ಆಗಬೇಕು. ಈಗಾಗಲೇ ಅನುಮೋದನೆ ಆಗಿರುವ ರಸ್ತೆ ಕಾಮಗಾರಿ ಕೈಗೊಳ್ಳಬೇಕು. ಸಾರ್ವಜನಿಕರಿಗೆ ಸ್ಪಂದಿಸುವಲ್ಲಿ ಎಂಜಿನಿಯರ್‌ಗಳು ಕೆಲಸ ಮಾಡಬೇಕು. ರಸ್ತೆ ಕಾಮಗಾರಿ ಸಂಬಂಧ ಯಾವುದೇ ರೀತಿಯ ದೂರು ಬರದಂತೆ ಕಾಮಗಾರಿ ಕೈಗೊಳ್ಳಬೇಕು ಎಂದು ಸ್ಪಷ್ಟ ನಿರ್ದೇಶನ ನೀಡಿದರು.
ಕುಶಾಲನಗರ ಬಳಿಯ ತಾವರೆಕೆರೆ ಮತ್ತು ಮಡಿಕೇರಿ-ಸಂಪಾಜೆ ರಸ್ತೆ ಮಾರ್ಗದಲ್ಲಿ ತಡೆಗೋಡೆ, ಸೇತುವೆ ಮತ್ತಿತರ ಕಾಮಗಾರಿ ತ್ವರಿತವಾಗಿ ಕೈಗೊಳ್ಳಬೇಕು. ಬೋಯಿಕೇರಿ ಮತ್ತು ಆನೆಕಾಡು ಬಳಿ ರಸ್ತೆ ಕಾಮಗಾರಿಗೆ ಅನುಮೋದನೆ ಪಡೆದು ಕಾಮಗಾರಿ ಕೈಗೊಳ್ಳಬೇಕು ಎಂದು ಸಂಸದರು ಸೂಚಿದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಮಾತನಾಡಿ, ಈಗಾಗಲೇ ೭ ಹಂತದಲ್ಲಿ ಪರಿಹಾರ ವಿತರಿಸಲಾಗಿದೆ. ಬಾಕಿ ಕಾಫಿ ಬೆಳೆ ಹಾನಿ ಪರಿಹಾರ ವಿತರಿಸಲಾಗುವುದು. ಒಟ್ಟಾರೆ ೧೧೦ ಕೋಟಿ ರೂ. ಬೆಳೆ ಹಾನಿ ಪರಿಹಾರಕ್ಕೆ ಆಗುತ್ತದೆ ಎಂದ ಅವರು, ಕಸ ವಿಲೇವಾರಿ ಘಟಕ ನಿರ್ಮಾಣಕ್ಕೆ ಜಾಗ ಬೇಕಿದ್ದಲ್ಲಿ ಒಂದು ವಾರದಲ್ಲಿ ಕಾಯ್ದಿರಿಸಲಾಗುವುದು. ಈ ಸಂಬಂಧ ಮಾಹಿತಿಯ ಪಟ್ಟಿ ನೀಡುವಂತೆ ತಾ.ಪಂ.ಇಒಗಳಿಗೆ ಸೂಚಿಸಿದರು. ಕೆಲವು ಕಡೆ ಅಂತರ್ಜಲ ಸಂಪರ್ಕ, ತೆರೆದ ಬಾವಿ ಇದೆ. ಹಾಗಾಗಿ ಅಂತಹ ಕಡೆಗಳಲ್ಲಿ ಇನ್ನೂ ಸಂಪರ್ಕ ಕಲ್ಪಿಸಿಲ್ಲ ಎಂದು ಎಂಜಿನಿಯರ್‌ಗಳು ಮಾಹಿತಿ ನೀಡಿದರು.
ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಮಾತನಾಡಿ, ಚೆಂಬೆ ಬೆಳ್ಳೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ನಲ್ಲಿ ನೀರು ಸಂಪರ್ಕ ಕಲ್ಪಿಸಲಾಗಿದೆಯೇ ಇಲ್ಲದಿದ್ದಲ್ಲಿ ಕೂಡಲೇ ನಲ್ಲಿ ನೀರು ಸಂಪರ್ಕ ಕಲ್ಪಿಸುವಂತೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿಕಾಳಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್, ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ವಿವಿಧ ಇಲಾಖೆಯ ಅಧಿಕಾರಿಗಳಿದ್ದರು.
ವಿದ್ಯುತ್ ಸಮಸ್ಯೆ ಕುರಿತು ದೂರು
ಸಮಿತಿ ಸದಸ್ಯರೊಬ್ಬರು ಮಾತನಾಡಿ, ಜಂಗಲ್ ಹಾಡಿ, ಚೈನಿ ಹಡ್ಲು, ಬೊಂಬುಕಾಡು ಮತ್ತಿತರ ಹಾಡಿಗಳಲ್ಲಿ ಇದುವರೆಗೆ ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ ಎಂದು ದೂರಿದರು. ಪ್ರತಿಕ್ರಿಯಿಸಿದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್, ಹಾಡಿಗಳಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲು ಇದುವರೆಗೆ ಅನುಮತಿ ಪಡೆದಿಲ್ಲ ಎಂದು ಸಭೆಯ ಗಮನಕ್ಕೆ ತಂದರು.
ಸಮಿತಿ ಸದಸ್ಯರೊಬ್ಬರು ಬಾಳೆಲೆ ವ್ಯಾಪ್ತಿಯಲ್ಲಿ ವಿದ್ಯುತ್ ಪರಿವರ್ತಕ ಕಳ್ಳತನವಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮುಂಗಾರು ಸಂದರ್ಭದಲ್ಲಿ ಪ್ರಾಕೃತಿಕ ವಿಕೋಪದಿಂದ ವಿದ್ಯುತ್ ಕಂಬ ಹಾಗೂ ಪರಿವರ್ತಕಗಳ ಹಾನಿ, ಬಾಳೆಲೆ, ಕೂಡಿಗೆ, ಮಾದಾಪುರಗಳಲ್ಲಿ ವಿದ್ಯುತ್ ಉಪ ಕೇಂದ್ರಗಳನ್ನು ನಿರ್ಮಿಸಬೇಕಿದೆ ಎಂದು ಸೆಸ್ಕ್ ಇಇ ಅನಿತಾ ಬಾಯಿ ಮಾಹಿತಿ ನೀಡಿದರು.
ಸಂಸದ ಪ್ರತಾಪ್ ಸಿಂಹ ಮಾತನಾಡಿ, ಸೆಸ್ಕ್, ಅರಣ್ಯ, ಐಟಿಡಿಪಿ ಇಲಾಖೆಗಳು ಸಮನ್ವಯತೆಯಿಂದ ವಿದ್ಯುತ್ ಸಂಪರ್ಕ ಕಲ್ಪಿಸಲು ಮುಂದಾಗುವಂತೆ ಸೂಚಿಸಿದರು.
ಬಾಕ್ಸ್
ಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕೆ ಶ್ರಮಿಸಿ
ಕೊಡಗು ಜಿಲ್ಲೆ ಕಳೆದ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವು ೧೧ ನೇ ಸ್ಥಾನದಲ್ಲಿದ್ದು, ಈ ಬಾರಿ ಇನ್ನೂ ಹೆಚ್ಚಿನ ಫಲಿತಾಂಶ ಪಡೆಯಲು ಶ್ರಮಿಸಬೇಕು. ಹೆಚ್ಚಿನ ಫಲಿತಾಂಶ ಪಡೆದ ಶಾಲೆಗಳಿಗೆ ಸನ್ಮಾನ ಮಾಡಲಾಗುವುದು. ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು ಎಲ್ಲರಿಗೂ ಸನ್ಮಾನಿಸಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ಸೂಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಿಡಿಪಿಐ ವೇದಮೂರ್ತಿ, ೧೬೯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೆಚ್ಚಳಕ್ಕೆ ಅಗತ್ಯ ಕ್ರಮವಹಿಸಲಾಗಿದೆ ಎಂದು ತಿಳಿಸಿದರು.