

ಮಂಡ್ಯ: ಇತ್ತೀಚಿನ ದಿನದಲ್ಲಿ ವಿದ್ಯಾರ್ಥಿಗಳಲ್ಲಿ ಮೊಬೈಲ್, ಟಿವಿ, ಸಿನಿಮಾ ವ್ಯಾಮೋಹ ಹೆಚ್ಚಾಗುತ್ತಿದೆ. ಅಂತೆಯೇ ಪಠ್ಯಪುಸ್ತಕ ಓದುವ ಅಭ್ಯಾಸ ಕಡಿಮೆಮಾಗುತ್ತಿದೆ ಎಂದು ಬಸರಾಳು ಗ್ರಾಪಂ ಮಾಜಿ ಅಧ್ಯಕ್ಷರೂ ಆದ ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡ ಮಹಾಲಿಂಗೇಗೌಡ ಮುದ್ದನಘಟ್ಟ ಹೇಳಿದರು.
ತಾಲೂಕಿನ ಮೋಳೆಕೊಪ್ಪಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉತ್ತರವಲಯದಿಂದ ಸಹಯೋಗದಲ್ಲಿ ಆಯೋಜಿಸಿದ್ದ ಬಸರಾಳು ಹೊಬಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶಾಲಾ ಮತ್ತು ಕಾಲೇಜಿನ ವಿದ್ಯಾರ್ಥಿಗಳು ಪಠ್ಯ, ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚು ಆಸಕ್ತಿ ಬೆಳಸಿಕೊಂಡರೆ ಉನ್ನತ ಸಾಧನೆ ಮಾಡಬಹುದು. ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಕರ ಮತ್ತು ಪಾಲಕರ ಪಾತ್ರದ ಜತೆಗೆ ಪಠ್ಯೇತರ ಚಟುವಟಿಕೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಮಕ್ಕಳ ಪ್ರತಿಭೆ ಹೊರತೆಗೆಯಲು ಪ್ರತಿಭಾ ಕಾರಂಜಿ ಸಹಕಾರಿಯಾಗಿದೆ ಎಂದರು.
ರಾಜ್ಯ ಒಕ್ಕಲಿಗರ ಸಂಘದ ಜಂಟಿ ಕಾರ್ಯದರ್ಶಿ ರಾಘವೇಂದ್ರ ಮುದ್ದನಘಟ್ಟ ಅವರ ಪರವಾಗಿ ಕ್ಲಸ್ಟರ್ ಮಟ್ಟದ ಶಾಲೆಗಳಿಗೆ ಉಚಿತವಾಗಿ ನಾಡಪ್ರಭು ಕೆಂಪೇಗೌಡರ ಫೋಟೋಗಳನ್ನು ವಿತರಿಸಲಾಯಿತು. ಗ್ರಾಮ ಪಂಚಾಯಿತಿ ಸದಸ್ಯ ರವಿಗೌಡ, ಮುಖ್ಯಶಿಕ್ಷಕ ನಾಗೇಶ್, ಪ್ರೌಢ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಶಶಿಧರ್ ಈಚಗೆರೆ, ಶಿಕ್ಷಕರಾದ ಕುಮಾರ್, ಗಿರೀಶ್, ಎಂ.ಜಿ.ತಿಮ್ಮೇಗೌಡ, ಪುಟ್ಟಸ್ವಾಮಿ ಇತರರಿದ್ದರು.