

ಮಂಡ್ಯ: ಶಾಲಾ ಮಟ್ಟದಲ್ಲಿ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಿದರೆ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲೂ ಭಾಗವಹಿಸಲು ಅವಕಾಶ ಸಿಗುತ್ತದೆ. ಮಾತ್ರವಲ್ಲದೆ ಅವರು ಜೀವನದಲ್ಲಿ ಮತ್ತಷ್ಟು ಸಂಶೋಧನೆ, ಸಾಧನೆ ಮತ್ತು ಪ್ರಯೋಗಗಳನ್ನು ಮಾಡುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ನಗರದ ಲಕ್ಷ್ಮೀ ಜನಾರ್ಧನ ಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಿಕ್ಷಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಕರು ಹಾಗೂ ಪಾಲಕರು ಮಕ್ಕಳ ಶಿಕ್ಷಣದ ಜತೆಗೆ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗೂ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
ಪ್ರತಿ ವಿದ್ಯಾರ್ಥಿಯಲ್ಲಿಯೂ ಪ್ರತಿಭೆ ಅಡಗಿರುತ್ತದೆ. ಅವರ ಸಾಮರ್ಥ್ಯಕ್ಕೆ ತಕ್ಕಂತೆ ಪ್ರತಿಭೆ ಗುರುತಿಸಿ ವೇದಿಕೆಗಳಲ್ಲಿ ಪ್ರದರ್ಶನಕ್ಕೆ ಉತ್ತೇಜನ ನೀಡುವ ಮೂಲಕ ಹೊರ ಜಗತ್ತಿಗೆ ತಿಳಿಸುವ ಪ್ರಯತ್ನ ಮಾಡಬೇಕು. ವಿದ್ಯಾರ್ಥಿಗಳು ಶಿಕ್ಷಣದಷ್ಟೇ ಆರೋಗ್ಯದ ಬಗ್ಗೆ ಗಮನ ಕೊಟ್ಟು ಯೋಗಾಭ್ಯಾಸ ಸೇರಿದಂತೆ ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ದೈಹಿಕ, ಮಾನಸಿಕ, ಆಧ್ಯಾತ್ಮಿಕ, ಸಾಂಸ್ಕೃತಿಕ, ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಶಾಸಕ ರವಿಕುಮಾರ್ ಗಣಿಗ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಡಿಡಿಪಿಐ ಎಚ್.ಶಿವರಾಮೇಗೌಡ, ಬಿಇಒ ಮಹದೇವ, ಲಕ್ಷ್ಮೀ ಜನಾರ್ಧನ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಅಂಜನಾ ಶ್ರೀಕಾಂತ್ ಇತರರಿದ್ದರು.