

ವಿರಾಜಪೇಟೆ: ಮಕ್ಕಳ ಪ್ರತಿಭೆ ಹೊರಹೊಮ್ಮಲು ಪ್ರತಿಭಾ ದಿನಾಚರಣೆ ವೇದಿಕೆಯಾಗಿದ್ದು, ವಿದ್ಯಾರ್ಥಿಗಳು ಇದನ್ನು ಮುಕ್ತವಾಗಿ ಬಳಸಿಕೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದು ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ.ಜೇಮ್ಸ್ ಡೊಮಿನಿಕ್ ಸಲಹೆ ನೀಡಿದರು.
ಪಟ್ಟಣದ ಸಂತ ಅನ್ನಮ್ಮ ಪ್ರೌಢ ಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ಪ್ರತಿಭಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಂತ ಅನ್ನಮ್ಮ ಪಿಯು ಕಾಲೇಜಿನ ಪ್ರಾಂಶುಪಾಲ ರೆ.ಫಾ.ಮದಲೈ ಮುತ್ತು ಮಾತನಾಡಿ, ಶಾಲಾ ಹಂತದಲ್ಲಿ ಪ್ರತಿಭಾ ದಿನಾಚರಣೆ ಅತೀ ಮುಖ್ಯವಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದರು.
ಪ್ರತಿಭಾ ದಿನಾಚರಣೆ ಪ್ರಯುಕ್ತ ಮಕ್ಕಳಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆ ಏರ್ಪಡಿಸಲಾಗಿತ್ತು. ಪ್ರೌಢ ಶಾಲಾ ಮುಖ್ಯ ಶಿಕ್ಷಕ ಬೆನ್ನಿ ಜೋಸೆಫ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ರೋಸಿ, ಸಿಸ್ಟರ್ ಐಡಾ, ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಕವಿತಾ ಮನೋಜ್, ಕಾರ್ಯದರ್ಶಿ ರೂಪಾ ಲಕ್ಷ್ಮೀ, ವಿದ್ಯಾರ್ಥಿ ಪ್ರತಿನಿಧಿ ರಿಸಿಕಾ ರಾಜೇಶ್ ಇದ್ದರು.