

ಕುಶಾಲನಗರ:
ಕೊಡಗು ಜಿಲ್ಲಾ ಪಂಚಾಯತಿ, ಶಾಲಾ ಶಿಕ್ಷಣ ಇಲಾಖೆ, ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಸಮಗ್ರ ಶಿಕ್ಷಣ ಕರ್ನಾಟಕ, ಕ್ಷೇತ್ರ ಸಂಪನ್ಮೂಲ ಕೇಂದ್ರದ ವತಿಯಿಂದ ಕೂಡಿಗೆಯ ಅಂಜೆಲಾ ವಿದ್ಯಾನಿಕೇತನ ಶಾಲೆಯಲ್ಲಿ ಮಂಗಳವಾರ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸೋಮವಾರಪೇಟೆ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸಾಂಸ್ಕೃತಿಕ ಸ್ಪರ್ಧೆ ಹಾಗೂ ಕಲೋತ್ಸವ-2024 ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ಮಕ್ಕಳು ಪ್ರದರ್ಶಿಸಿದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಗಮನ ಸಳೆಯಿತು.
ಪ್ರತಿಭಾ ಕಾರಂಜಿ ಸ್ಪರ್ಧೆ ಉದ್ಘಾಟಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಭಾಗ್ಯಮ್ಮ ಮಾತನಾಡಿ,
ಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಕಾರಂಜಿ ಸ್ಪರ್ಧೆ ಒಂದು ವಿನೂತನ ಕಾರ್ಯಕ್ರಮವಾಗಿದ್ದು, ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಉತ್ತಮ ವೇದಿಕೆ ಒದಗಿಸುತ್ತದೆ. ಮಕ್ಕಳ ಇಂಥ ಕಲಾ ಪ್ರತಿಭಾ ಸ್ಪರ್ಧೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ವಿದ್ಯಾರ್ಥಿಗಳು ಇಂಥ ಉತ್ತಮ ಅವಕಾಶ ಸದುಪಯೋಗಪಡಿಸಿಕೊಂಡು ತಮ್ಮ ಪ್ರತಿಭೆಯನ್ನು ಅಭಿವ್ಯಕ್ತಗೊಳಿಸುವ ಮೂಲಕ ಉತ್ತಮ ಕಲಾ ಪ್ರತಿಭೆಯನ್ನು ಬೆಳೆಸಿಕೊಳ್ಳಬೇಕು. ಮಕ್ಕಳ ವ್ಯಕ್ತಿತ್ವ ರೂಪಿಸಲು ಮತ್ತು ಅವರಲ್ಲಿ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಲು ಪೋಷಕರು ಶಿಕ್ಷಕರೊಡನೆ ಪ್ರೋತ್ಸಾಹಿಸಿದರೆ ಭವಿಷ್ಯದಲ್ಲಿ ಮಕ್ಕಳು ಉತ್ತಮ ವ್ಯಕ್ತಿತ್ವ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪ ಪ್ರಾಂಶುಪಾಲ ಕೆ.ಎನ್. ಶಿವಕುಮಾರ್ ಮಾತನಾಡಿ,
ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಬೆಳಕಿಗೆ ತರುವ ಪ್ರಯತ್ನಗಳಿಗೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆಯಾಗಿದೆ. ಪ್ರತಿಭಾ ಕಾರಂಜಿ ಮೂಲಕ ಮಕ್ಕಳು ಉತ್ತಮ ಶಿಕ್ಷಣ ಹಾಗೂ ಪ್ರತಿಭೆಯೊಂದಿಗೆ ಉತ್ತಮ ನಾಗರಿಕರಾಗಿ ಹೊರಹೊಮ್ಮಲು ಅವಕಾಶವಾಗಿದೆ ಎಂದರು.
ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ್ ಮಾತನಾಡಿ,
ಈ ಸ್ಪರ್ಧೆ ಮಕ್ಕಳ ಕಲಾಪ್ರತಿಭೆ ಪ್ರದರ್ಶಿಸಲು ಉತ್ತಮ ವೇದಿಕೆಯಾಗಿದ್ದು, ಸೂಕ್ತ ರೀತಿಯಲ್ಲಿ ಬಳಕೆ ಮಾಡಿಕೊಳ್ಳಬೇಕು ಎಂದರು.
ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಟಿ.ಕೆ. ಬಸವರಾಜ್, ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ಎಂ. ಹೇಮಂತ್ ಮಾತನಾಡಿದರು. ಶಾಲೆಯ ಮುಖ್ಯೋಪಾಧ್ಯಾಯಿನಿ
ಸಿಸ್ಟರ್ ಅನಿತಾ ಡಯಾಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಬಿಆರ್‌ಸಿ ಎಂ.ವಿ. ಮಂಜೇಶ್, ಕೂಡಿಗೆ ಡಯಟ್ ಉಪನ್ಯಾಸಕ ಎಂ. ಕೃಷ್ಣಪ್ಪ,
ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ದಯಾನಂದ ಪ್ರಕಾಶ್,
ಭಾರತ್ ಸ್ಕೌಟ್ಸ್, ಗೈಡ್ಸ್ ಕುಶಾಲನಗರ ತಾಲೂಕು ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷ ಕೆ.ಪಿ. ರಾಜು, ಸ್ಪರ್ಧಾ ಕಾರ್ಯಕ್ರಮದ ನೋಡಲ್ ಅಧಿಕಾರಿ ಬಿಆರ್‌ಪಿ ಎಸ್.ಎಸ್. ಶಿವಕುಮಾರ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಜಿ.ಪಿ. ಕವಿತಾ ಇತರರು ಇದ್ದರು.