

ಮಂಡ್ಯ: ವಿದ್ಯಾರ್ಥಿಗಳು ಕಲಿಕೆಯ ಜತೆಗೆ ಉತ್ತಮ ಸಂಸ್ಕಾರವನ್ನೂ ಮೈಗೂಡಿಸಿಕೊಳ್ಳಬೇಕು ಎಂದು ಆದಿಚುಂಚನಗಿರಿ ಕೊಮ್ಮೇರಹಳ್ಳಿ ಶಾಖಾ ಮಠದ ಮುಖ್ಯಸ್ಥ ಪುರುಷೋತ್ತಮಾನಂದನಾಥ ಸ್ವಾಮೀಜಿ ಸಲಹೆ ನೀಡಿದರು.
ನಗರದ ಗಾಂಧಿಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ, ಚಲುವರಾಯಸ್ವಾಮಿ ಹಿತೈಷಿ ಬಳಗ ಹಾಗೂ ವಿನಾಯಕ ಟ್ರೇಡರ್ಸ್ ಸಹಯೋಗದಲ್ಲಿ ಸಚಿವ ಚಲುವರಾಯಸ್ವಾಮಿ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವತ್ತ ಗಮನಹರಿಸಬೇಕು. ಅದಕ್ಕೆ ತಕ್ಕಂತೆ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಉತ್ತಮ ಸಂಸ್ಕಾರದೊಡನೆ ಶಿಕ್ಷಣವನ್ನು ಮುನ್ನಡೆಸಿದರೆ ಸಧೃಡ ಬದುಕನ್ನೂ ಹೊಂದಲು ಸಾಧ್ಯವಾಗುತ್ತದೆ. ಜತೆಗೆ ವಿದ್ಯಾರ್ಥಿಗಳು ಸಮಾಜಮುಖಿ ಆಲೋಚನೆಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ ಮಾತನಾಡಿ, ರಾಜಕೀಯ ಕ್ಷೇತ್ರದಲ್ಲಿ ಸೇವಾ ಮನೋಭಾವನೆಯೊಡನೆ ಅಭಿವೃದ್ಧಿಯ ಚಿಂತನೆಯಲ್ಲಿ ಸಚಿವ ಚಲುವರಾಯಸ್ವಾಮಿ ಕಾರ್ಯನಿರ್ವಹಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಯುತವಾಗಿ ಕಟ್ಟುವುದರ ಜತೆಗೆ ಜಿಲ್ಲೆಯ ಅಭಿವೃದ್ಧಿಗೂ ಹೆಚ್ಚು ಒತ್ತು ನೀಡುತ್ತಿದ್ದಾರೆ ಎಂದು ಬಣ್ಣಿಸಿದರು.
ಮಂಡ್ಯ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಿ.ತ್ಯಾಗರಾಜು, ಹಿತೈಷಿ ಬಳಗದ ಅಧ್ಯಕ್ಷ ನವೀನ್‌ಕುಮಾರ್, ಪ್ರಧಾನ ಕಾರ್ಯದರ್ಶಿ ಬಿ.ಟಿ.ಗುರುರಾಜ್, ಕೆ.ದೀಪಕ್, ಸಾತನೂರು ಕೃಷ್ಣ, ಸುಂಡಹಳ್ಳಿ ಮಂಜುನಾಥ್, ಮುಜಾಹಿದ್ ಆಲಿಖಾನ್, ಎಲ್.ಸಂದೇಶ್, ಕೊತ್ತತ್ತಿ ರಾಜು, ವಿಜಯಕುಮಾರ್, ಕಿರಣ್‌ಕುಮಾರ್, ಸೋಮಶೇಖರ್, ನಾಗೇಶ್ ಇತರರಿದ್ದರು.