ಚಾಮರಾಜನಗರ ವಿಧಾನಸಭಾ ಕ್ಷೇತ್ರ ಕಳೆದ ಮೂರು ಚುನಾವಣೆಗಳಿಂದಲೂ ‘ಕೈ’ ವಶದಲ್ಲಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಪ್ತ, ಉಪ್ಪಾರ ಸಮಾಜದ ನಾಯಕ, ಸಿಂಪಲ್ ರಾಜಕಾರಣಿ ಎಂದೇ ಹೆಸರಾಗಿರುವ ಸಿ. ಪುಟ್ಟರಂಗಶೆಟ್ಟಿ ಹ್ಯಾಟ್ರಿಕ್ ಗೆಲುವು ಕಂಡಿರುವ ಶಾಸಕ. ಮುಂದಿನ ಬಾರಿಗೂ ಇವರೇ ಕಾಂಗ್ರೆಸ್ನಿಂದ ಕಣಕ್ಕಿಳಿಯುವ ಹುರಿಯಾಳು ಎನ್ನುವುದರಲ್ಲಿ ಎರಡು ಮಾತಿಲ್ಲ. ಆದರೆ ಬಿಜೆಪಿಯಲ್ಲಿ ಒಬ್ಬರ ಹಿಂದೊಬ್ಬರು ಟಿಕೆಟ್ಗಾಗಿ ಸಾಲುಗಟ್ಟಿ ನಿಂತಿದ್ದಾರೆ. ಮಾಜಿ ಶಾಸಕ ದಿವಂಗತ ಸಿ.ಗುರುಸ್ವಾಮಿ ಅವರ ಪುತ್ರಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ನಾಗಶ್ರೀ ಪ್ರತಾಪ್, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ವಿಧಾನ ಪರಿಷತ್ ಮಾಜಿ ಸದಸ್ಯ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ವೃಷಭೇಂದ್ರಪ್ಪ, ಕಾಡಾ ಅಧ್ಯಕ್ಷ ಜಿ.ನಿಜಗುಣರಾಜು, ರೈತ ಮುಖಂಡ ಅಮ್ಮನಪುರ ಮಲ್ಲೇಶ್, ವೈದ್ಯ ಡಾ.ಎ.ಆರ್.ಬಾಬು, ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್ಹೆಸರು ಬಿಜೆಪಿ ಆಕಾಂಕ್ಷಿಗಳ ಪಟ್ಟಿಯಲ್ಲಿ ಪ್ರಮುಖವಾಗಿವೆ. ಈ ನಡುವೆ, ಕೆಲ ದಿನಗಳ ಹಿಂದಷ್ಟೇ ಜನ್ಮದಿನದ ಪ್ರಯುಕ್ತ ಬ್ಯಾನರ್ನಲ್ಲಿ ರಾರಾಜಿಸಿದ್ದ ಕೆಆರ್ಐಡಿಎಲ್ ಅಧ್ಯಕ್ಷ ರುದ್ರೇಶ್ ಚಿತ್ತ ಚಾಮರಾಜನಗರದತ್ತ ನೆಟ್ಟಿದೆ ಎನ್ನಲಾಗುತ್ತಿದೆ. ಇಷ್ಟೆಲ್ಲ ಹೆಸರಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹಿಂದಿಕ್ಕಿ ಸದ್ಯಕ್ಕೆ ಮುಂಚೂಣಿಯಲ್ಲಿದ್ದಾರೆ. ಆದರೆ, ಅವರ ನಡೆ ಮಾತ್ರ ನಿಗೂಢವಾಗಿ ಉಳಿದಿದೆ.