

ಮಂಡ್ಯ: ಜಿಲ್ಲೆಯಲ್ಲಿ ಡಿ.29ರಂದು ಕರ್ನಾಟಕ ಲೋಕಸೇವಾ ಆಯೋಗದಿಂದ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಜರುಗಲಿದೆ. ಆದ್ದರಿಂದ ಪಾರದರ್ಶಕವಾಗಿ ಯಾವುದೇ ಅವ್ಯವಹಾರಗಳಿಗೆ ಹಾಗೂ ಆಸ್ಪದ ನೀಡದೆ ನಿಷ್ಪಕ್ಷಪಾತವಾಗಿ ನಡೆಸಲು ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಡಾ.ಬಿ.ಸಿ.ಶಿವಾನಂದಮೂರ್ತಿ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಜಿಲ್ಲೆಯಲ್ಲಿ 12 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, 6,971 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬೆಳಗ್ಗೆ 10 ರಿಂದ 12 ಗಂಟೆವರೆಗೆ ಪತ್ರಿಕೆ-1 ಮತ್ತು ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆವರೆಗೆ ಪತ್ರಿಕೆ-2 ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಪರೀಕ್ಷೆ ಗೌಪ್ಯತೆಯಲ್ಲಿ ಯಾವುದೇ ರಾಜಿಯಿಲ್ಲದಂತೆ ನ್ಯಾಯ ಸಮ್ಮತವಾಗಿ ನಿಷ್ಪಕ್ಷಪಾತವಾಗಿ ಪಾರದರ್ಶಕತೆಯಿಂದ ನಡೆಸಿ. ಪರೀಕ್ಷೆ ನಡೆಯುವ ದಿನಗಳಂದು ಕೇಂದ್ರದಲ್ಲಿ ಪರೀಕ್ಷಾರ್ಥಿ ಹಾಗೂ ಸಿಬ್ಬಂದಿಯನ್ನು ಹೊರತುಪಡಿಸಿ ಅನಧಿಕೃತ ವ್ಯಕ್ತಿಗಳು ಸಂಚರಿಸಬಾರದು ಮತ್ತು ಯಾರೂ ಆಕ್ಷೇಪಾರ್ಹ ವಸ್ತುಗಳನ್ನು ಒಯ್ಯಬಾರದು. ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸುತ್ತಮುತ್ತಲಿರುವ ಜೆರಾಕ್ಸ್ ಮತ್ತು ಸೈಬರ್ ಕೇಂದ್ರವನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚುವಂತೆ ಆದೇಶ ಹೊರಡಿಸಲಾಗುವುದು ಎಂದರು.
ತಡವಾಗಿ ಬಂದ ಅಭ್ಯರ್ಥಿಗಳನ್ನು ಪರೀಕ್ಷೆಗೆ ಕೂರಿಸುವಂತಿಲ್ಲ. ಪರೀಕ್ಷೆ ನಡೆಯುವಾಗ ಅರ್ಧಕ್ಕೆ ಅಭ್ಯರ್ಥಿಗಳನ್ನು ಕೊಠಡಿಯಿಂದ ಹೊರಗೆ ಕಳುಹಿಸುವಂತಿಲ್ಲ. ಪರೀಕ್ಷಾ ಪರಿವೀಕ್ಷಕರು ಎಚ್ಚರಿಕೆಯಿಂದ ಪ್ರಶ್ನೆಪತ್ರಿಕೆಯನ್ನು ನೋಡಿಕೊಳ್ಳಬೇಕು. ಪ್ರಾರಂಭವಾಗುವುದಕ್ಕೂ ಒಂದು ಗಂಟೆ ಮುಂಚಿತವಾಗಿ ಪ್ರಶ್ನೆಪತ್ರಿಕೆ ಕ್ರಮವಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಜತೆಗೆ ಪ್ರಶ್ನೆಪತ್ರಿಕೆಯ ಕವರ್ ತೆರೆದಿರುವುದಿಲ್ಲ ಎಂದು ಖಾತ್ರಿಪಡಿಸಿಕೊಳ್ಳಬೇಕು. ಪರೀಕ್ಷೆಯ ಸಂಪೂರ್ಣ ಜವಾಬ್ದಾರಿ ಮೇಲ್ವಿಚಾರಕರ ಮೇಲಿದೆ ಎಂದು ವಿವರಿಸಿದರು.
ಪರೀಕ್ಷೆಗೆ ಹಾಜರಾಗುವ ಮತ್ತು ಗೈರಾಗುವ ಅಭ್ಯರ್ಥಿಗಳ ವಿವರಗಳನ್ನು ಆನ್‌ಲೈನ್ ಮೂಲಕ ದಾಖಲಿಸುವಂತೆ ಪರೀಕ್ಷಾ ಕೇಂದ್ರಗಳ ಉಪಮುಖ್ಯ ಅಧೀಕ್ಷಕರು/ಪ್ರಾಂಶುಪಾಲರಿಗೆ ಸೂಚಿಸಿದರು. ಅಭ್ಯರ್ಥಿ ಯಾವುದೇ ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳು, ಮೊಬೈಲ್ ಫೋನ್, ಬ್ಲೂಟೂತ್, ಕ್ಯಾಲ್ಕುಲೇಟರ್, ಪೆನ್‌ಡ್ರೈವ್‌ಗಳು, ಇಯರ್ ಫೋನ್, ಮೈಕ್ರೋ ಫೋನ್ ಮತ್ತು ಕೈಗಡಿಯಾರಗಳನ್ನು ಪರೀಕ್ಷಾ ಕೊಠಡಿ ಒಳಗೆ ತರುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಬ್ಲೂಟೂತ್ ಸಾಧನಗಳನ್ನು ಪರೀಕ್ಷಾ ಕೊಠಡಿಯಲ್ಲಿ ಬಳಸುವುದನ್ನು ತಡೆಯುವ ಸಲುವಾಗಿ ಫುಲ್ ಶರ್ಟ್, ಶೂ, ಟೋಪಿ ಧರಿಸುವುದನ್ನು ಬಾಯಿ, ಕಿವಿ ಹಾಗೂ ತಲೆಮುಚ್ಚುವ ವಸ್ತ್ರವನ್ನು/ಸಾಧನವನ್ನು ಧರಿಸುವುದನ್ನು ನಿಷೇಧಿಸಲಾಗಿದೆ. ಯಾವುದೇ ರೀತಿಯ ಮಾಸ್ಕನ್ನು ಧರಿಸಿ ಪರೀಕ್ಷಾ ಕೇಂದ್ರದ ಒಳಗೆ ಬರುವಂತಿಲ್ಲ. ಮಹಿಳಾ ಅಭ್ಯರ್ಥಿಗಳು ಮಾಂಗಲ್ಯ ಸರ ಹಾಗೂ ಮೂಗುತಿಯನ್ನು ಹೊರತುಪಡಿಸಿ ಇನ್ನಾವುದೇ ಆಭರಣಗಳನ್ನು ಧರಿಸುವಂತಿಲ್ಲ ಎಂದರು.
ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರು ವೈದ್ಯರು/ಆರೋಗ್ಯ ಸಿಬ್ಬಂದಿಗಳನ್ನು ನೇಮಕ ಮಾಡುವುದು ಕೇಂದ್ರಗಳ ಸುತ್ತಮುತ್ತ ಸ್ವಚ್ಛತೆ ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಮೂಲ ಸೌಕರ್ಯ, ಸೂಕ್ತ ಆಸನ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸಬೇಕು. ಚಲನವಲನ ವೈಕಲ್ಯವುಳ್ಳ ಅಂಗವಿಕಲ ಅಭ್ಯರ್ಥಿಗೆ ಪರೀಕ್ಷಾ ಕೊಠಡಿಗೆ ತೆರಳಲು ಅನುಕೂಲವಾಗುವಂತೆ ವೀಲ್ ಚೇರ್/ಇಳಿಜಾರು ಸೌಲಭ್ಯ ಒದಗಿಸಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಸಭೆಯಲ್ಲಿ ತಹಸೀಲ್ದಾರ್ ಡಾ.ಶಿವಕುಮಾರ್ ಬಿರಾದಾರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕುಮಾರ್, ಬಿಇಒ ಮಹದೇವ ಸೇರಿದಂತೆ ವಿವಿಧ ಕಾಲೇಜಿನ ಪ್ರಾಂಶುಪಾಲರು ಉಪಸ್ಥಿತರಿದ್ದರು.