

ಬೆಂಗಳೂರು: ರಾಜ್ಯಮಟ್ಟದ ಸ್ವಾತಂತ್ರ್ಯ ದಿನಾಚರಣೆಗೆ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ಸಂಬಂಧ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಮಾರಂಭವನ್ನು ಯಶಸ್ವಿಯಾಗಿ ನಡೆಸುವ ಸಂಬಂಧ ಆಯಾ ಇಲಾಖೆಗಳಿಗೆ ನೀಡಿರುವ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಬೇಕೆ ಎಂದು ಸೂಚಿಸಿದರು.
ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಆಸನಗಳ ವ್ಯವಸ್ಥೆ, ಯಾವ ದ್ವಾರಗಳಲ್ಲಿ ಯಾರಿಗೆ ಪ್ರವೇಶ ನೀಡಬೇಕು, ಪಾರ್ಕಿಂಗ್ ವ್ಯವಸ್ಥೆ, ಮಾರ್ಗ ಬದಲಾವಣೆ ಸೇರಿ ಇನ್ನಿತರ ವ್ಯವಸ್ಥೆಗಳಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲದಂತೆ ನೋಡಿಕೊಳ್ಳಬೇಕೆಂದು ಸೂಚಿಸಲಾಯಿತು.
ಜಲಮಂಡಳಿ ವತಿಯಿಂದ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಮೈದಾನದಲ್ಲಿ ಶೌಚಾಲಯದ ವ್ಯವಸ್ಥೆ, ಕಾರ್ಯಕ್ರಮದ ದಿನ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸುವ ಹಾಗೂ ಭದ್ರತೆಯ ಹಿತದೃಷ್ಠಿಯಿಂದ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕೆಂದು ತಿಳಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಸರಿಯಾದ ರೀತಿಯಲ್ಲಿ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ನಾಡಗೀತೆ, ರೈತ ಗೀತೆ ಹಾಡಲು ಸೂಕ್ತ ತಂಡಗಳನ್ನು ಆಯ್ಕೆ ಮಾಡಬೇಕು. ಪ್ರಥಮ ಚಿಕಿತ್ಸೆ ವ್ಯಸವ್ಥೆಗಾಗಿ ಆಂಬುಲೆನ್ಸ್ ಜತೆಗೆ ಅಗತ್ಯ ಔಷಧಿ ಹಾಗೂ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಮುಖ್ಯ ಆಯುಕ್ತರು ವಿವರಿಸಿದರು.
ಸಭೆಯಲ್ಲಿ ಪಾಲಿಕೆಯ ವಿಶೇಷ ಆಯುಕ್ತರಾದ ಡಾ. ಕೆ. ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಪ್ರೀತಿ ಗೆಹ್ಲೋಟ್, ವಲಯ ಆಯುಕ್ತರಾದ ಡಾ. ಆರ್.ಎಲ್ ದೀಪಕ್, ಕರೀಗೌಡ, ಸ್ನೇಹಲ್, ವಿನೋತ್ ಪ್ರಿಯಾ, ವಲಯ ಜಂಟಿ ಆಯುಕ್ತರು, ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ್, ಬಿಬಿಎಂಪಿ, ಲೋಕೋಪಯೋಗಿ ಇಲಾಖೆ, ಪೊಲೀಸ್ ಇಲಾಖೆ, ಕನ್ನಡ-ಸಂಸ್ಕೃತಿ ಇಲಾಖೆ ಸೇರಿ ಇನ್ನಿತರ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.