ಡೋಣಿ ನದಿ ಪ್ರವಾಹ ತಡೆಗೆ ಮುನ್ನೆಚ್ಚರಿಕೆ ಕ್ರಮ, ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ-ಪರಿಶೀಲನೆ

DC VISIT DONI RIVER
ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್ ನೇತೃತ್ವದ ಅಧಿಕಾರಿಗಳ ತಂಡ ಡೋಣಿ ನದಿ ಪಾತ್ರದಲ್ಲಿ ಪರಿಶೀಲನೆ ನಡೆಸಿತು. ಜಿಪಂ ಸಿಇಒ ರಿಷಿ ಆನಂದ, ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ ಮತ್ತಿತರರಿದ್ದಾರೆ.
Published on

ವಿಜಯಪುರ: ಡೋಣಿ ನದಿಯಿಂದ ಉಂಟಾಗುವ ಪ್ರವಾಹ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ನೇತೃತ್ವದ ಅಧಿಕಾರಿಗಳ ತಂಡ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಸಾರವಾಡ ಬಳಿಯ ಡೋಣಿ ನದಿ ಪಾತ್ರದಲ್ಲಿ ಪರಿಶೀಲನೆ ನಡೆಸಿದ ತಂಡ ಅಲ್ಲಿನ ಜನರ ಸಮಸ್ಯೆ ಆಲಿಸಿ ಪರಿಹಾರ ಕಲ್ಪಿಸುವ ಕುರಿತು ಭರವಸೆ ನೀಡಿತು. ಬಳಿಕ ಹರನಾಳ, ದಾಶ್ಯಾಳ ಸಾರವಾಡ, ಎನ್.ಎಚ್.218 ಹೊನಗನಹಳ್ಳಿ, ಉಕುಮನಾಳ, ಹಿಟ್ನಳ್ಳಿ ಡೋಣಿ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಜ್‌ಗಳ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.

ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಣ ಕುರಿತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಪ್ರವಾಹ ನಿಯಂತ್ರಣ ಯೋಜನೆ ರೂಪಿಸುವ ಕುರಿತು ಈಗಾಗಲೇ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಲಾಗಿದೆ. ಡೋಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೇತುವೆಗಳಲ್ಲಿ ಹೂಳು ತುಂಬಿಕೊಂಡು ಸೇತುವೆಯ ಎತ್ತರ ಕಡಿಮೆಯಾಗಿ ನೀರಿನ ಶೇಖರಣೆ ಸಾಧ್ಯವಾಗದೇ ಇರುವುದರಿಂದ ನದಿಯಲ್ಲಿ ಹರಿಯುವ ನೀರಿನ ಒತ್ತಡ ಹೆಚ್ಚಾಗಿ ನೀರು ತನ್ನ ಪಥ ಬದಲಿಸುತ್ತಿದೆ. ಇದರಿಂದ ಸುತ್ತಮುತ್ತಲಿನ ಜಮೀನುಗಳಿಗೆ ನೀರು ನುಗ್ಗಿ ಪ್ರವಾಹ ಪರಿಸ್ಥಿತಿ ಉಂಟಾಗಲಿರುವುದರಿಂದ ಡೋಣಿಗೆ ಸೇರುವ ಕಾಲುವೆಗಳ ಪರಿಶೀಲನೆ ಹಾಗೂ ಡೋಣಿ ವ್ಯಾಪ್ತಿಯ ವಿವಿಧೆಡೆ ಚೆಕ್ ಡ್ಯಾಂ ನಿರ್ಮಾಣಕ್ಕೆ ಇರುವ ಅವಕಾಶಗಳು ಮತ್ತು ಡೋಣಿ ನದಿಯಿಂದ ಬೇರೆ ಕಾಲುವೆ, ಕೆರೆ-ಕಟ್ಟೆಗಳಿಗೆ ನೀರನ್ನು ಹರಿಸುವುದು ಸೇರಿದಂತೆ ಪ್ರವಾಹ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿವಿಧ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸುತ್ತಿರುವುದಾಗಿ ಜಿಲ್ಲಾಧಿಕಾರಿ ವಿವರಿಸಿದರು.

ಜಿಪಂ ಸಿಇಒ ರಿಷಿ ಆನಂದ, ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಕೃಷಿ ಜಂಟಿ ನಿರ್ದೇಶಕಿ ಎಲ್.ರೂಪಾ, ಗ್ರಾಮೀಣ ಕುಡಿಯುವ ನೀರು ಸರಬರಾಜು ಹಾಗೂ ನೈರ್ಮಲ್ಯ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರ ಬಸವರಾಜ ಕುಂಬಾರ, ಭೂಮಾಪನ ಇಲಾಖೆ ಉಪನಿರ್ದೇಶಕ ಮಹಾಂತೇಶ ಮುಳಗುಂದ, ಜಲಬಿರಾದರಿ ಸಂಸ್ಥೆಯ ಪೀಟರ್ ಅಲೆಕ್ಸಾಂಡರ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net