ಅತಿವೃಷ್ಟಿ ಹಾನಿ ತಡೆಗೆ ಮುಂಜಾಗೃತಾ ಕ್ರಮ

Divy prabhu
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ರಾಜ್ಯ ಹವಾಮಾನ ಇಲಾಖೆ ವರದಿಯಂತೆ ಜಿಲ್ಲೆಯಲ್ಲಿ ಆರೆಂಜ್​ ಅರ್ಲಟ್​ ಘೋಷಿಸಿದೆ. ಹೀಗಾಗಿ ಜಿಲ್ಲೆಯಲ್ಲಿ ಭಾರಿ ಮಳೆ, ಪ್ರವಾಹದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಎಲ್ಲ ಕ್ಷೇತ್ರ, ತಾಲೂಕು, ಜಿಲ್ಲಾ ಮಟ್ಟದ ಅಧಿಕಾರಿಗಳು ಅನುಮತಿ ಪಡೆಯದೆ ರಜೆ ಹಾಗೂ ಕೇಂದ್ರ ಸ್ಥಾನ ಬಿಡದಂತೆ ಆದೇಶಿಸಲಾಗಿದೆ. ಅಕಾಲಿಕ ಮಳೆ ಹಾಗೂ ಅತಿವೃಷ್ಟಿಯಿಂದ ಆಗುವ ಹಾನಿ ತಡೆಯಲು ವಿವಿಧ ಇಲಾಖೆ ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.

ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯರೊಂದಿಗೆ ವಿಡಿಯೋ ಸಂವಾದ ಮೂಲಕ ತುರ್ತು ಸಭೆ ಜರುಗಿಸಿ ಅವರು ಮಾತನಾಡಿದರು.

ಜಿಲ್ಲೆಯ ಸಂಭವನೀಯ ಹಾನಿಗಳ ಕುರಿತು ಮಾಹಿತಿ ಈಗಾಗಲೇ ನೀಡಲಾಗಿದೆ. ಗ್ರಾಮ ಮಟ್ಟದ ವಿಪತ್ತು ನಿರ್ವಹಣಾ ಸಮಿತಿಗಳನ್ನು ಸಕ್ರಿಯಗೊಳಿಸಿ, ಸ್ಥಳಿಯರ ಸಹಕಾರದಲ್ಲಿ ಯಾವುದೇ ಹಾನಿಯಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ಬೆಣ್ಣಿಹಳ್ಳ ಮತ್ತು ತುಪ್ಪರಿ ಹಳ್ಳಗಳ ಅಚ್ಚುಕಟ್ಟು ಪ್ರದೇಶದಲ್ಲಿ ವಾಸಿಸುವ ಜನರಿಗೆ ಸೂಕ್ತ ಮಾಹಿತಿ ನೀಡಿ, ಮಳೆ ಹೆಚ್ಚಾದಲ್ಲಿ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಬೇಕು ಎಂದು ನಿರ್ದೇಶನ ನೀಡಿದರು.

ಜನರ ಅನುಕೂಲಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ (1077) ಆರಂಭಿಸಲಾಗಿದೆ. ಶಾಲೆಗಳು ಮೇ 29ರಿಂದ ಪ್ರಾರಂಭವಾಗುತ್ತಿದ್ದು, ಸರ್ಕಾರಿ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಹಾಗೂ ಕಾಲೇಜು ಕಟ್ಟಡ ಹಾಗೂ ಕೊಠಡಿಗಳು ಸುಸ್ಥಿತಿಯಲ್ಲಿರುವ ಕುರಿತು ಮುಂಚಿತವಾಗಿ ಪರಿಶೀಲಿಸಿ, ವರದಿ ನೀಡಬೇಕು ಎಂದು ಸೂಚಿಸಿದರು.

ಜಿಪಂ ಸಿಇಒ ಭುವನೇಶ ಪಾಟೀಲ, ಎಸ್ಪಿ ಡಾ. ಗೋಪಾಲ ಬ್ಯಾಕೋಡ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ಉಪವಿಭಾಗಾಧಿಕಾರಿ ಶಾಲಂ ಹುಸೇನ, ಜಿಪಂ ಉಪ ಕಾರ್ಯದರ್ಶಿ ಬಿ.ಎಸ್​. ಮೂಗನೂರಮಠ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ಅಗ್ನಿ ಶಾಮಕ, ಆರೋಗ್ಯ, ಸಾರಿಗೆ, ಹೆಸ್ಕಾಂ, ಲೋಕೋಪಯೋಗಿ ಇಲಾಖೆ, ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು, ತಹಸೀಲ್ದಾರರು, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net