ಎಚ್‌ಐವಿ/ ಏಡ್ಸ್ ರೋಗ ಬರದಂತೆ ಮುನ್ನೆಚ್ಚರ ಅಗತ್ಯ; ಡಿಸಿ

b87aacfb-01e9-4720-ad83-00ec484cfff1
Published on


ಮಡಿಕೇರಿ: ಯಾವುದೇ ರೀತಿಯ ರೋಗ ನಿಯಂತ್ರಣ ಸಂಬಂಧ ಮುನ್ನೆಚ್ಚರ ವಹಿಸುವುದು ಅತ್ಯಗತ್ಯ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಕಿವಿಮಾತು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಹಾಗೂ ವಿವಿಧ ಸಂಘಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ’ವಿಶ್ವ ಏಡ್ಸ್ ದಿನದ’ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.


ಎಪತ್ತು ಎಂಬತ್ತರ ದಶಕದಲ್ಲಿ ಎಚ್‌ಐವಿ/ಏಡ್ಸ್ ಎಂಬ ವೈರಾಣುವಿಗೆ ಹೆದರುತ್ತಿದ್ದರು. ಅದೇ ರೀತಿ ಕೋವಿಡ್-೧೯ ಸಂದರ್ಭದಲ್ಲಿ ಮುಂದೆ ಹೇಗೆ ಎಂದು ಯೋಚಿಸುತ್ತಿದ್ದರು. ಆದರೆ ಬರುತ್ತಾ ಇದನ್ನೆಲ್ಲಾ ಎದುರಿಸಿ ಮುಂದೆ ಸಾಗುತ್ತಿದ್ದೇವೆ. ಚೀನಾ ರಾಷ್ಟ್ರದಲ್ಲಿ ಮತ್ತೆ ಕೋವಿಡ್-೧೯ ಪ್ರಕರಣಗಳು ಹೆಚ್ಚಾಗಿ ಲಾಕ್‌ಡೌನ್ ಆಗಿದೆ. ಯಾವುದೇ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಸ್ವಚ್ಚತೆ, ಪರಿಸರ ಶುಚಿತ್ವ ಅತಿಮುಖ್ಯ, ಇದರಿಂದ ಸಾಂಕ್ರಾಮಿಕ ರೋಗಗಳಿಂದ ದೂರವಿರಬಹುದು ಎಂದು ಹೇಳಿದರು.


ಮಾರ್ಚ್, ಏಪ್ರಿಲ್ ತಿಂಗಳಲ್ಲಿ ವಿಧಾನಸಭಾ ಚುನಾವಣೆ ಬರಲಿದ್ದು, ೧೮ ವರ್ಷ ಮೇಲ್ಪಟ್ಟವರೆಲ್ಲರೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಬೇಕು. ಆ ನಿಟ್ಟಿನಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿದ್ದು, ಈ ಅವಕಾಶವನ್ನು ಬಳಸಿಕೊಳ್ಳುವಂತೆ ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸತೀಶ ಮನವಿ ಮಾಡಿದರು.


ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಮಾತನಾಡಿ, ಎಚ್‌ಐವಿ ಏಡ್ಸ್ ಬಗ್ಗೆ ಮಾಹಿತಿ ತಿಳಿದುಕೊಳ್ಳುವುದರ ಜತೆಗೆ ಇದರ ಪರಿಪೂರ್ಣ ಜ್ಞಾನ ಪಡೆಯುವುದು ಅಗತ್ಯ. ರೋಗ ನಿರೋಧಕ ಶಕ್ತಿ ಕಡಿಮೆಯಾದಲ್ಲಿ ಹಲವು ರೋಗಗಳು ದಾಳಿ ಮಾಡುತ್ತವೆ. ಆದ್ದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಉತ್ತಮ ಪೌಷ್ಠಿಕ ಆಹಾರ ಪಡೆಯಬೇಕು. ಆರೋಗ್ಯಯುತ ಜೀವನ ನಡೆಸುವತ್ತ ಗಮನಹರಿಸಬೇಕು ಎಂದರು.


ಲಯನ್ಸ್ ಸಂಸ್ಥೆಯ ಅಧ್ಯಕ್ಷೆ ಕವಿತ ಕಾವೇರಮ್ಮರವರು ಮಾತನಾಡಿ ಪ್ರತಿಯೊಬ್ಬರೂ ಒಳ್ಳೆಯ ನಾಗರಿಕರಾಗಿ ಬದುಕಬೇಕು. ಒಳ್ಳೆಯ ಹವ್ಯಾಸ ರೂಢಿಸಿಕೊಳ್ಳಬೇಕು. ಉತ್ತಮ ಗುರಿ ಮತ್ತು ಉದ್ದೇಶ ಜೀವನದಲ್ಲಿ ಅಳವಡಿಸಿಕೊಂಡರೆ ಮುಂದೆ ಉತ್ತಮ ಜೀವನ ಲಭಿಸಲು ಸಾಧ್ಯ ಎಂದು ಹೇಳಿದರು.


ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಆರ್.ವೆಂಕಟೇಶ್ ಮಾತನಾಡಿ, ವಿದ್ಯಾರ್ಥಿಗಳು ಮಾದಕ ವಸ್ತುಗಳಿಗೆ ಬಲಿಯಾಗಬೇಡಿ ಮತ್ತು ದುಶ್ಚಟಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳದೆ ಉತ್ತಮ ಅಭ್ಯಾಸಗಳನ್ನು ಜೀವನದಲ್ಲಿ ರೂಡಿಸಿಕೊಳ್ಳಿ ಎಂದು ಹೇಳಿದರು.
ಏಡ್ಸ್ ಕುರಿತಂತೆ ಕೈಗೊಂಡ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ವಿಧ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಜಿಲ್ಲಾ ಎಡ್ಸ್ ನಿಯಂತ್ರಣಾಧಿಕಾರಿ ಡಾ.ಆನಂದ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಎನ್.ಆನಂದ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಜಯಪ್ಪ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಮೇಲ್ವಿಚಾರಕಿ ಸುನೀತ ಮುತ್ತಣ್ಣ ಇತರರಿದ್ದರು.


ಏಡ್ಸ್ ನಿರ್ಮೂಲನೆ ಮಾಡುವಲ್ಲಿ ಜಾಗೃತಿ ಕಾರ್ಯಕ್ರಮಗಳು ಜರುಗಬೇಕು. ಏಡ್ಸ್ ನಿರ್ಮೂಲನೆ ಮಾಡುವಲ್ಲಿ ಎಲ್ಲರೂ ಗಮನಹರಿಸಬೇಕು. ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗಬೇಡಿ’
ರವೀಂದ್ರ ರೈ, ಸಭಾಪತಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ


ಜಾಥಾಗೆ ಚಾಲನೆ: ವಿಶ್ವ ಏಡ್ಸ್ ದಿನದ ಪ್ರಯುಕ್ತ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಎಂ.ಭೃಂಗೇಶ್ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ(ಪ್ರಭಾರ) ಮುನಿರತ್ನಮ್ಮ ಅವರು ಗುರುವಾರ ಜಾಥಾಗೆ ಚಾಲನೆ ನೀಡಿದರು. ಜಾಥಾವೂ ಜನರಲ್ ತಿಮ್ಮಯ್ಯ ವೃತ್ತ, ಮಂಗೇರಿರ ಮುತ್ತಣ್ಣ ವೃತ್ತದ ಮೂಲಕ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತದ ಮೂಲಕ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಮಾರೋಪಗೊಂಡಿತ್ತು. ಜಾಥಾದಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ ಇತರರು ಪಾಲ್ಗೊಂಡಿದ್ದರು. ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ವೃತ್ತದಲ್ಲಿ ಮಂಡ್ಯದ ಚಿಂತನ ಸಾಂಸ್ಕೃತಿಕ ಕಲಾತಂಡದಿಂದ ಎಚ್‌ಐವಿ ಏಡ್ಸ್ ನಿಂದ ದೂರವಿರುವ ಬಗ್ಗೆ ಬೀದಿನಾಟಕ ಮೂಲಕ ಅರಿವು ಮೂಡಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net